ಧಾರವಾಡ:
ರಾಜ್ಯದಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ ಸ್ವ-ಸಹಾಯ ಗುಂಪುಗಳ ಮಹಿಳೆಯರೆ ನಿರ್ವಹಿಸಲು ಅವಕಾಶವಾಗುವಂತೆ ಅಕ್ಕ ಕೆಫೆ ರೂಪಿಸಲಾಗಿದೆ. ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಇದು ದೊಡ್ಡ ಕೊಡುಗೆ ನೀಡಲಿದೆ ಎಂದು ಸಚಿವ ಸಂತೋಷ ಲಾಡ್ ಹೇಳಿದರು.ಜಿಲ್ಲಾ ಪಂಚಾಯಿತಿ ಹತ್ತಿರದ ಕಟ್ಟಡದಲ್ಲಿ ಕಬ್ಬೆನೂರು ಗ್ರಾಮದ ಕಾಮಧೇನು ಮಹಿಳಾ ಸ್ವ-ಸಹಾಯ ಸಂಘ ಆರಂಭಿಸಿರುವ ಅಕ್ಕ ಕೆಫೆ ಉದ್ಘಾಟಿಸಿ ಮಾತನಾಡಿದರು.
ಮಹಿಳೆಯರ ಜೀವನೋಪಾಯ ಚಟುವಟಿಕೆಗಳಿಗೆ ಹೆಚ್ಚಿನ ಉತ್ತೇಜನ ನೀಡಲು ರಾಜ್ಯ ಸರ್ಕಾರ ಅಕ್ಕ ಕೆಫೆಯನ್ನು ಬಜೆಟ್‌ನಲ್ಲಿ ಘೋಷಿಸಿದೆ. ಸರ್ಕಾರದ ಆದೇಶದಂತೆ ಗ್ರಾಮೀಣ ಪ್ರದೇಶದಲ್ಲಿ ಸ್ಥಳೀಯ ಆಹಾರವನ್ನು ಶುಚಿ-ರುಚಿಯಾಗಿ ಕೈಗೆಟಕುವ ದರದಲ್ಲಿ ಒದಗಿಸಲು ಮಹಿಳೆಯರೇ ನಡೆಸುವ 50 ಕೆಫೆ ಸಂಜೀವಿನಿ (ಅಕ್ಕ ಕೆಫೆ) ಕ್ಯಾಂಟೀನ್‌ಗಳನ್ನು ಸ್ಥಾಪಿಸಲು ತಾತ್ವಿಕ ಅನುಮೋದನೆ ನೀಡಿ ಆದೇಶಿಸಿದೆ. ಅದರಂತೆ ಜಿಲ್ಲಾ ಕೇಂದ್ರ ಸ್ಥಾನ ಮತ್ತು ಎಲ್ಲ ತಾಲೂಕು ಕೇಂದ್ರ ಸ್ಥಾನಗಳಲ್ಲಿ ಅಕ್ಕ ಕೆಫೆ ಆರಂಭಿಸಲಾಗುತ್ತಿದೆ ಎಂದು ತಿಳಿಸಿದರು.ಈ ವೇಳೆ ಶಾಸಕ ಎನ್.ಎಚ್. ಕೋನರಡ್ಡಿ, ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್. ಪಾಟೀಲ್ ಹಾಗೂ ಜಿಪಂ ಸಿಇಒ ಭುವನೇಶ ಪಾಟೀಲ್, ಎಸ್ಪಿ ಗುಂಜನ ಆರ್ಯ, ಪ್ರೊಬೆಷನರಿ ಐಎಎಸ್ ಅಧಿಕಾರಿ ರೀತಿಕಾ ವರ್ಮಾ, ಉಪಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ ಹಾಗೂ ಕಾಮಧೇನು ಮಹಿಳಾ ಸ್ವ-ಸಹಾಯ ಸಂಘದ ಅಧ್ಯಕ್ಷೆ ರಾಜಶ್ರೀ ಮಂಜುನಾಥ ಪವಾಡಿ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು, ವಿವಿಧ ಸ್ವ-ಸಹಾಯ ಸಂಘಗಳ ಸದಸ್ಯೆಯರು, ಸಾರ್ವಜನಿಕರು ಉಪಸ್ಥಿತರಿದ್ದರು.
ಇದೇ ವೇಳೆ ಕೆಫೆಯಲ್ಲಿ ಉಪಾಹಾರ ಸೇವಿಸಿ ರುಚಿ ಕೂಡ ಸಚಿವರು ಸವೆದರು. ಈ ವೇಳೆ ಸಚಿವ ಲಾಡ್ ಕ್ಯಾಂಟಿನ್‌ನಲ್ಲಿ ತರಕಾರಿ ಕತ್ತರಿಸುವ ಮೂಲಕ ಮಹಿಳೆಯರಿಗೆ ಪ್ರೋತ್ಸಾಹ ನೀಡಿದರು.ಅಕ್ಕ ಕೆಫೆ:
ಜಿಲ್ಲೆಗೆ ಎರಡು ಅಕ್ಕ ಕೆಫೆಗಳ ಸ್ಥಾಪನೆಗಾಗಿ ಸ್ಥಳ ಗುರುತಿಸಿ ಸರ್ಕಾರಕ್ಕೆ ಬೇಡಿಕೆ ಸಲ್ಲಿಸಲಾಗಿತ್ತು. ಅದು ಅನುಮೋದನೆಗೊಂಡು ಅನುದಾನ ಬೀಡುಗಡೆಯಾಗಿದೆ. ಈ ಕೆಫೆ ಅನುಷ್ಠಾನಕ್ಕಾಗಿ ಜಿಲ್ಲಾ ಹಂತದಲ್ಲಿ ಜಂಟಿ ನಿರ್ದೇಶಕರು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಅಧ್ಯಕ್ಷತೆಯಲ್ಲಿ 7 ಜನರನ್ನು ಒಳಗೊಂಡ ಸಮಿತಿ ರಚಿಸಲಾಗಿದೆ.