ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಇಲ್ಲಿನ ಜಿಲ್ಲಾ ಪೊಲೀಸ್ ಕಚೇರಿಯ ಆವರಣದಲ್ಲಿ ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಮಹಿಳಾ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ನೂತನವಾಗಿ ರಚಿಸಲಾಗಿರುವ ‘ಅಕ್ಕ ಪಡೆ’ ಗೆ ಬುಧವಾರ ಚಾಲನೆ ನೀಡಿ ಮಾತನಾಡಿ,
ಅಪಾಯದಲ್ಲಿರುವ ಮತ್ತು ಸಂಕಷ್ಟದಲ್ಲಿರುವ ದುರ್ಬಲ ಮಹಿಳೆಯರು ಮತ್ತು ಮಕ್ಕಳಿಗೆ ತಕ್ಷಣದ ರಕ್ಷಣೆ ನೀಡುವುದು ಅಕ್ಕ ಪಡೆಯ ಪ್ರಾಥಮಿಕ ಉದ್ದೇಶವಾಗಿದೆ. ಇಡೀ ರಾಜ್ಯದಲ್ಲಿ ಬೇರೆ ಬೇರೆ ಹೆಸರಲ್ಲಿ ಈ ಪಡೆ ಕೆಲಸ ಮಾಡುತ್ತಿದೆ. ವಿಶೇಷವಾಗಿ ಶಾಲಾ ಕಾಲೇಜು ಹೆಣ್ಣುಮಕ್ಕಳು, ಮಹಿಳೆಯರ ರಕ್ಷಣೆಗಾಗಿ ಹಾಗೂ ಅವರಿಗೆ ಮಾನಸಿಕ ಧೈರ್ಯ ನೀಡಲು ಪಡೆ ರಚನೆಯಾಗಿದೆ ಎಂದರು.ಈ ಪಡೆ ಕಾರ್ಯನಿರ್ವಹಣೆಗಾಗಿ ಹೊಸ ವಾಹನವನ್ನು ನೀಡಿದ್ದು, ಈ ವಾಹನವು ಪಡೆಯೊಂದಿಗೆ ಶಾಲಾ-ಕಾಲೇಜು, ಜನ ನಿಬಿಡ ಹಾಗೂ ಸೂಕ್ಷ್ಮ ಪ್ರದೇಶಗಳಲ್ಲಿ ಕಾರ್ಯ ನಿರ್ವಹಿಸಲಿದೆ. ಸಹಾಯವಾಣಿ ಸಂಖ್ಯೆಗಳಾದ 112 ಮತ್ತು 1098 ಕುರಿತು ಹಾಗೂ ಕಾನೂನುಗಳ ಬಗ್ಗೆಯೂ ಜಾಗೃತಿ ಮೂಡಿಸಲಿದೆ. ಮಹಿಳಾ ಗೃಹರಕ್ಷಕಿಯರು ಹಾಗೂ ಮಹಿಳಾ ಅಧಿಕಾರಿಗಳನ್ನೇ ಈ ಪಡೆಗೆ ನೇಮಿಸಲಾಗಿದ್ದು, ಮಹಿಳೆಯರು, ಹೆಣ್ಣುಮಕ್ಕಳು ನಿರ್ಭೀತಿಯಿಂದ ಮತ್ತು ಸ್ವತಂತ್ರವಾಗಿ ಮಾತನಾಡಿ, ಅಕ್ಕ ಪಡೆಯ ಸೌಲಭ್ಯವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು.
ತರಬೇತಿ ಪಡೆದ ಅಕ್ಕ ಪಡೆಯು ಸೂಕ್ಷ್ಮ ಪ್ರದೇಶಗಳಲ್ಲಿ ಗಸ್ತು ಮತ್ತು ಮಹಿಳೆಯರು ಮತ್ತು ಮಕ್ಕಳನ್ನು ಒಳಗೊಂಡ ಸಂಕಷ್ಟದ ಕರೆಗಳಿಗೆ ತ್ವರಿತವಾಗಿ ಸ್ಪಂದಿಸುತ್ತದೆ. ಅಕ್ಕ ಪ್ರತಿ ದಿನ ಎರಡು ಪಾಳಿಗಳಲ್ಲಿ ನಗರ ಮತ್ತು ಹೊರವಲಯದ ಬಸ್ ನಿಲ್ದಾಣ, ಮಾರ್ಕೆಟ್, ದೇವಸ್ಥಾನ, ಪಾರ್ಕ್‌ಗಳು, ಶಾಲಾ-ಕಾಲೇಜುಗಳ ಬಳಿ, ಲೇಡಿಸ್ ಹಾಸ್ಟೆಲ್, ಜನ ನಿಭಿಡ ಪ್ರದೇಶಗಳು, ಸೂಕ್ಷ್ಮ ಪ್ರದೇಶಗಳಲ್ಲಿ ಗಸ್ತು ನಿರ್ವಹಣೆ ಮಾಡಿ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದರು.ಕಾರ್ಯಕ್ರಮದಲ್ಲಿ ಎಎಸ್ಪಿ ಕಾರಿಯಪ್ಪ, ಕೆಎಸ್‌ಆರ್‌ಪಿ ಕಮಾಂಡೆಂಟ್ ಯುವಕುಮಾರ್, ಗೃಹರಕ್ಷಕ ಕಮಾಂಡೆಂಟ್ ಚೇತನ್, ಡಿವೈಎಸ್‌ಪಿ ಬಾಬು ಅಂಜಿನಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಭಾರತಿ ಬಣಕಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಶಶಿರೇಖಾ, ಡಿಸಿಪಿಓ ಮಂಜುನಾಥ್, ಡಾ.ಸಂತೋಷ್ ಕುಮಾರ್, ಡಿಡಿಪಿಯು, ಡಿಡಿಪಿಐ, ಕಾಲೇಜು ಶಿಕ್ಷಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ಇತರೆ ಅಧಿಕಾರಿಗಳು ಪಾಲ್ಗೊಂಡಿದ್ದರು.
------ಅಕ್ಕ ಪಡೆ ರಚನೆಯು ಮಹಿಳಾ ಸಬಲೀಕರಣದೆಡೆ ಬಹು ದೊಡ್ಡ ಹೆಜ್ಜೆಯಾಗಿದೆ. ಮಹಿಳೆ ಸಬಲವಾಗಲು ಸರಿಯಾದ ಶಿಕ್ಷಣ ಅಗತ್ಯವಿದ್ದು, ಶಾಲಾ-ಕಾಲೇಜುಗಳಿಗೆ ಹೋಗಿ ಬರುವ ವೇಳೆ ಹಾಗೂ ಸಾಮಾಜಿಕ ಜೀವನದಲ್ಲಿ ಆಕೆಗೆ ಸುರಕ್ಷಿತ ವಾತಾವರಣ ಬೇಕು. ಇಂತಹ ವಾತಾವರಣವನ್ನು ಅಕ್ಕ ಪಡೆ ನಿರ್ಮಿಸಲು ಸಹಕಾರಿಯಾಗಿದೆ. ಪೋಕ್ಸೋ ಪ್ರಕರಣಗಳನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ‘ಅಕ್ಕ’ ಸಹಕಾರಿಯಾಗಲಿದೆ. ಹೆಣ್ಣುಮಕ್ಕಳು ತಮಗಾದ ಅನ್ಯಾಯ, ಕಿರುಕುಳ, ದೌರ್ಜನ್ಯ ಕುರಿತು ಅಂಜಿಕೆ ಇಲ್ಲದೇ, ಧೈರ್ಯದಿಂದ ಹೇಳಬೇಕು.
ಎಂ.ಎಸ್. ಸಂತೋಷ್ ,ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ