ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಕ್ಷರ ದಾಸೋಹ ನೌಕರರ ಪ್ರತಿಭಟನೆ

KannadaprabhaNewsNetwork |  
Published : Mar 05, 2025, 12:35 AM IST
ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಕ್ಷರ ದಾಸೋಹ ನೌಕರಿಂದ ಪ್ರತಿಭಟನೆ | Kannada Prabha

ಸಾರಾಂಶ

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಪ್ರಗತಿಪರ ಅಕ್ಷರ ದಾಸೋಹ ನೌಕರರ ಸಂಘ (ಎ.ಐ.ಸಿ.ಸಿ.ಟಿ.ಯು ) ವತಿಯಿಂದ ಬಿ.ಸಿ.ರೋಡು ಮಿನಿವಿಧಾನಸೌಧದ ಮುಂದೆ ಪ್ರತಿಭಟ‌ನೆ ನಡೆಸಿ ತಹಸೀಲ್ದಾರರಿಗೆ ಮನವಿ ಸಲ್ಲಿಸಲಾಯಿತು.

ಕನ್ನಡಪ್ರಭ ವಾರ್ತೆ ಬಂಟ್ವಾಳ

ಅಕ್ಷರ ದಾಸೋಹ ನೌಕರರಿಗೆ ರಾಜ್ಯ ಸರ್ಕಾರವು ವಿಧಾನಸಭಾ ಚುನಾವಣೆಯಲ್ಲಿ ಘೋಷಣೆ ಮಾಡಿದಂತೆ 6000 ವೇತನ ಹೆಚ್ಚಳ ಮಾಡಬೇಕೆಂದು ಹಾಗೂ ಇನ್ನಿತರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಪ್ರಗತಿಪರ ಅಕ್ಷರ ದಾಸೋಹ ನೌಕರರ ಸಂಘ (ಎ.ಐ.ಸಿ.ಸಿ.ಟಿ.ಯು ) ವತಿಯಿಂದ ಬಿ.ಸಿ.ರೋಡು ಮಿನಿವಿಧಾನಸೌಧದ ಮುಂದೆ ಪ್ರತಿಭಟ‌ನೆ ನಡೆಸಿ ತಹಸೀಲ್ದಾರರಿಗೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆ ಉದ್ದೇಶಿಸಿ ಎ.ಐ.ಸಿ.ಸಿ.ಟಿ.ಯು ದ.ಕ ಜಿಲ್ಲಾ ಅಧ್ಯಕ್ಷ ಕಾಮ್ರೇಡ್ ರಾಮಣ್ಣ ವಿಟ್ಲ ಮಾತನಾಡಿ, ದೇಶದ ಅಭಿವೃದ್ಧಿಗೆ ಶಿಕ್ಷಣ ಆರೋಗ್ಯ, ಉದ್ಯೋಗ ಹಾಗೂ ಆಹಾರ ಪೂರೈಸಲು ಬೇಕಾದ ಸಂಪನ್ಮೂಲವನ್ನು ಕೇಂದ್ರ ಸರ್ಕಾರವು ಸಂಪೂರ್ಣವಾಗಿ ಕಡೆಗಣಿಸಿದ್ದು . ದೇಶದ ದುಡಿಯುವ ಜನ ವಿಭಾಗದ ಬಿಸಿಯೂಟ ಯೋಜನೆಯನ್ನು ಕೇಂದ್ರ ಸರ್ಕಾರವು 2010 ರಿಂದ ಕಡೆಗಣಿಸುತ್ತಲೇ ಬಂದಿದೆ. ರಾಜ್ಯದಲ್ಲಿ ಕೆಲಸದ ಒತ್ತಡ ಹೆಚ್ಚಳವಾಗಿದೆ.ಆದರೆ ಕೆಲಸಕ್ಕೆ ತಕ್ಕ ವೇತನ ಮಾತ್ರ ಸಿಗದೇ ನೌಕರರು ಸಂಕಷ್ಟದ ಪರಿಸ್ಥಿತಿಯಲ್ಲಿ ನರಳುವಂತೆ ಮಾಡಿದೆ. ಬಿಸಿಯೂಟ ನೌಕರರಿಗೆ ರಾಜ್ಯ ಸರ್ಕಾರವು ವಿಧಾನಸಭಾ ಚುನಾವಣೆಯಲ್ಲಿ ಘೋಷಣೆ ಮಾಡಿದಂತೆ 6000 ವೇತನ ಹೆಚ್ಚಳ ಮಾಡಬೇಕೆಂದು ಒತ್ತಾಯಿಸಿದರು.

ಎ.ಐ.ಸಿ.ಸಿ.ಟಿ.ಯು ರಾಜ್ಯ ಸಮಿತಿ ಗೌರವಾಧ್ಯಕ್ಷ ಕಾಮ್ರೇಡ್ ಮೋಹನ್ ಕೆ.ಇ , ಎ.ಐ.ಸಿ.ಸಿ.ಟಿ.ಯು ತಾಲೂಕು ಮುಖಂಡ ಕಾಮ್ರೇಡ್ ರಾಜಾ ಚೆಂಡ್ತಿಮಾರ್ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದರು. ಎ.ಐ.ಸಿ.ಸಿ.ಟಿ.ಯು. ಮುಖಂಡರಾದ ಕಾಮ್ರೇಡ್ ಸಜೇಶ್ ವಿಟ್ಲ, ಕಾಮ್ರೇಡ್ ಸುಲೈಮಾನ್ ಕೆಳಿಂಜ, ಅಕ್ಷರ ದಾಸೋಹ ಸಂಘಟನೆಯ ತಾಲೂಕು ಅಧ್ಯಕ್ಷ ಜಯಶ್ರೀ ಆರ್.ಕೆ., ಕಾರ್ಯದರ್ಶಿ ವಾಣಿಶ್ರೀ ಕನ್ಯಾನ, ಉಪಾದ್ಯಕ್ಷರಾದ ವಿನಯ ನಡುಮೊಗರು, ಸೇವಂತಿ ಮುಂತಾದವರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ಬೇಡಿಕೆಗಳು:

2010 ರಿಂದ ಕೇಂದ್ರ ಸರ್ಕಾರ ಯಾವುದೇ ಗೌರವಧನ ಹೆಚ್ಚಳ ಮಾಡಿಲ್ಲವಾದ್ದರಿಂದ ಕೇಂದ್ರ ಸರ್ಕಾರವು 26.000 ರು.ಗಳಿಗೆ ಗೌರವಧನ ಹೆಚ್ಚಿಸಬೇಕು. ಹೆಚ್ಚಿಸುವ ತನಕ ಕೇರಳ ಪಾಂಡಿಚೇರಿ, ತಮಿಳುನಾಡು ಮತ್ತು ಹರಿಯಾಣ ರಾಜ್ಯದಲ್ಲಿರುವಂತೆ 7 ಸಾವಿರದಿಂದ 12 ಸಾವಿರ ರು. ವೇತನ ಕೊಡಬೇಕು. ಉತ್ತರ ಪ್ರದೇಶ ಮತ್ತು ಪಂಜಾಬ್ ರಾಜ್ಯದ ಮಾನ್ಯ ಹೈಕೋರ್ಟ್ ತೀರ್ಮಾನಿಸಿದಂತೆ ವರ್ಷದ 12 ತಿಂಗಳು ಕೆಲಸ ಮತ್ತು ಕನಿಷ್ಟ ಕೂಲಿ ಜಾರಿಯಾಗಬೇಕು. ಕೆಲಸದ ಅವಧಿ 4 ಗಂಟೆಯಿಂದ 6 ಗಂಟೆಗೆ ಅಕ್ಷರ ದಾಸೋಹ ಕೈಪಿಡಿಯಲ್ಲಿ ಬದಲಾಯಿಸಬೇಕು. ಅಕ್ಷರ ದಾಸೋಹ ಯೋಜನೆಯನ್ನು ಸಂಪೂರ್ಣವಾಗಿ ಶಿಕ್ಷಣ ಇಲಾಖೆಯಡಿಯಲ್ಲಿಯೇ ನಡೆಯಬೇಕು. ಕೆಲಸದ ಸ್ಥಳದಲ್ಲಿ ಮರಣ ಹೊಂದಿದರೆ 25 ಲಕ್ಷ ರೂ.ಗಳ ಪರಿಹಾರ ಕೊಡಬೇಕು. ಮಾರ್ಚ್ 31 2024 ಕ್ಕೆ ಬಿಸಿಯೂಟ ನೌಕರರನ್ನು ಬಿಡುಗಡೆಗೊಳಿಸಲು ಹೊರಡಿಸಿರುವ ಸುತ್ತೋಲೆ ಬದಲಾಯಿಸಿ ಎಪ್ರಿಲ್ 10,2025ಕ್ಕೆ ಮರು ಆದೇಶ ನೀಡಬೇಕು. ಹಾಜರಾತಿ ಆಧಾರದಲ್ಲಿ ಕೆಲಸದಿಂದ ತೆಗೆಯುವ ಕ್ರಮ ಹಿಂಪಡೆಯಬೇಕು. ಬಿಸಿಯೂಟ ಯೋಜನೆಯನ್ನು ಖಾಯಂ ಮಾಡಬೇಕು ಖಾಯಂ ಮಾಡುವ ತನಕ 45 ಮತ್ತು 46ನೇ ಭಾರತೀಯ ಕಾರ್ಮಿಕ ಸಮ್ಮೇಳನದ ಶಿಫಾರಸ್ಸಿನಂತೆ ಇವರನ್ನು ಕಾರ್ಮಿಕರೆಂದು ಗುರುತಿಸಬೇಕು. ಬಿಸಿಯೂಟ ಯೋಜನೆಯನ್ನು ಯಾವುದೇ ಖಾಸಗಿ ಸಂಸ್ಥೆಗಳಿಗೆ ಯಾವುದೇ ಸ್ವರೂಪದ ಜವಾಬ್ದಾರಿ ಕೊಡಬಾರದು. ಶಾಲೆಗಳಲ್ಲಿ ಗೂಪ್ ಡಿ ನೌಕರರು ಇಲ್ಲರಿರುವುದರಿಂದ ಈ ನೌಕರರಿಂದಲೇ ಶಾಲಾ ಸ್ವಚ್ಚತೆ, ಕೈತೋಟ ನಿರ್ವಹಣೆ ಶಾಲಾ ಸಮಯದ ಗಂಟೆ ಬಾರಿಸುವುದು ಇನ್ನಿತರ ಕೆಲಸ ನೀಡಿ ಈ ನೌಕರರಿಗೆ ಶಾಲಾ ಸಿಬ್ಬಂದಿ ಎಂದು ನೇಮಿಸಿ ನೇಮಕಾತಿ ಆದೇಶ ನೀಡಬೇಕು. ಬೇಸಿಗೆ ಮತ್ತು ದಸರಾ ರಜೆಗಳ ವೇತನ ಕಡ್ಡಾಯವಾಗಿ ನೀಡಬೇಕು. ಶಾಲಾ ಅವಧಿಯ ನಂತರ ನರೆಗಾ ಯೋಜನೆಯಡಿ ಶಾಲಾ ಕೈತೋಟದ ಕೆಲಸ ಇವರಿಗೆ ನೀಡಿ ಈ ಯೋಜನೆಯಿಂದ ವೇತನ ನೀಡಬೇಕು. ಅಪಘಾತದಲ್ಲಿ ಮರಣ ಹೊಂದಿದ ಅಡುಗೆ ಸಿಬ್ಬಂದಿ ಕುಟುಂಬದವರಿಗೆ ಕೆಲಸ ನೀಡಬೇಕು. ನಿವೃತ್ತಿ ಹೊಂದಿದ ಅಡುಗೆ ಸಿಬ್ಬಂದಿ ಕುಟುಂಬದವರಿಗೆ ಕೆಲಸ ನೀಡಬೇಕು. ಪ್ರತಿ ಶಾಲೆಯಲ್ಲಿ ಕನಿಷ್ಠ ಎರಡು ಜನ ಅಡುಗೆಯವರು ಇರಲೇಬೇಕು.

PREV

Recommended Stories

ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ