ಉಪ್ಪಿನಂಗಡಿ: ಮದ್ಯವರ್ಜನ ಶಿಬಿರದ ಮೂಲಕ ಪಾನಮುಕ್ತರಾದವರ ಕುಟುಂಬದ ಹೆಣ್ಣು ಮಕ್ಕಳ ಮುಖದಲ್ಲಿ ನಗು ಕಾಣುತ್ತಿದ್ದೇವೆ. ಇಂತಹ ಶಿಬಿರಗಳ ಬಗ್ಗೆ ಮಹಿಳೆಯರು ಹೆಚ್ಚು ಸಂತಸ ಪಡುತ್ತಿದ್ದಾರೆ. ಶಿಬಿರದಲ್ಲಿ ಮದ್ಯ ವ್ಯಸನಿಗಳು ವ್ಯಕ್ತಪಡಿಸುವ ಅನಿಸಿಕೆ ಕೇಳುವಾಗ ತುಂಬಾ ವ್ಯಥೆಯಾಗುತ್ತಿದೆ. ಆದ್ದರಿಂದ ಮದ್ಯವರ್ಜನ ಶಿಬಿರದಲ್ಲಿ ಪಾಲ್ಗೊಂಡವರೆಲ್ಲರೂ ಮನಸ್ಸು ಗಟ್ಟಿ ಮಾಡಿಕೊಂಡಿರಬೇಕು. ಮತ್ತೆ ಮದ್ಯ ವ್ಯಸನಿಗಳು ಆಗಬಾರದು. ಯಾವುದೇ ತ್ಯಾಗಕ್ಕೂ ಸಿದ್ಧರಾಗಿರಬೇಕು ಎಂದು ಡಾ. ಡಿ. ವೀರೇಂದ್ರ ಹೆಗ್ಗಡೆ ಹೇಳಿದರು. ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ನೆಲ್ಯಾಡಿ-ಕೌಕ್ರಾಡಿ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಕಡಬ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಬೆಳ್ತಂಗಡಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕಡಬ ತಾಲೂಕು ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ನೆಲ್ಯಾಡಿ-ಕೌಕ್ರಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಸಭಾಂಗಣದಲ್ಲಿ ನಡೆಯುತ್ತಿರುವ ೨೦೩೮ನೇ ಮದ್ಯವರ್ಜನ ಶಿಬಿರಕ್ಕೆ ಭೇಟಿ ನೀಡಿ ಶಿಬಿರಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.
ಅತಿಥಿಯಾಗಿದ್ದ ನೆಲ್ಯಾಡಿ ಜ್ಞಾನೋದಯ ಬೆಥನಿ ಪ.ಪೂ. ಕಾಲೇಜಿನ ಪ್ರಾಂಶುಪಾಲ ರೆ.ಫಾ.ವರ್ಗೀಸ್ ಕೈಪನಡ್ಕ ಮಾತನಾಡಿ, ಒತ್ತಡ, ನಿರಾಸೆ ಸಹಿತ ಹಲವಾರು ಕಾರಣಗಳಿಂದ ಆರಂಭಗೊಂಡ ಮದ್ಯಪಾನ ಮುಂದೆ ಮದ್ಯ ವ್ಯಸನಕ್ಕೆ ಕಾರಣವಾಗುತ್ತಿದೆ. ಮದ್ಯಪಾನದಿಂದ ಆರೋಗ್ಯ, ಸಂತೋಷ, ನೆಮ್ಮದಿ ಕೈತಪ್ಪುತ್ತದೆ. ಆದ್ದರಿಂದ ಮದ್ಯಪಾನ ತ್ಯಜಿಸಿ ಆರೋಗ್ಯ ಜೀವನ ನಡೆಸುವಂತೆ ಹೇಳಿದರು. ಪುತ್ತೂರು ಎಸ್‌ಆರ್‌ಕೆ ಲ್ಯಾಡರ್ಸ್ ಮಾಲೀಕ ಕೇಶವ ಅಮೈ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಬೆಳ್ತಂಗಡಿ ಇದರ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯಸ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ದ.ಕ. ಜಿಲ್ಲಾಧ್ಯಕ್ಷ ಪದ್ಮನಾಭ ಶೆಟ್ಟಿ, ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ನೆಲ್ಯಾಡಿ-ಕೌಕ್ರಾಡಿ ಇದರ ಗೌರವಾಧ್ಯಕ್ಷ ಶ್ರೀಧರ ಗೋರೆ, ಶಿಬಿರದ ವೈದ್ಯಾಧಿಕಾರಿ ಡಾ. ಮೋಹನ್‌ದಾಸ್ ಗೌಡ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ನೆಲ್ಯಾಡಿ ವಲಯಾಧ್ಯಕ್ಷ ಜಯಾನಂದ ಬಂಟ್ರಿಯಾಲ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ದ.ಕ.-೨ ಇದರ ನಿರ್ದೇಶಕ ಬಾಬು ನಾಯ್ಕ, ಕಡಬ ತಾಲೂಕು ಯೋಜನಾಧಿಕಾರಿ ಪ್ರಕಾಶ್ ಕುಮಾರ್ ಉಪಸ್ಥಿತರಿದ್ದರು. ಶಿಬಿರಾರ್ಥಿ ಸುರೇಶ್ ಅನಿಸಿಕೆ ವ್ಯಕ್ತಪಡಿಸಿದರು. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಉಡುಪಿ ಪ್ರಾದೇಶಿಕ ಕಚೇರಿ ಯೋಜನಾಧಿಕಾರಿ ಗಣೇಶ್ ಆಚಾರ್ಯ ಪ್ರಾಸ್ತಾವಿಕವಾಗಿ ಮಾತನಾಡಿದರು. ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ನೆಲ್ಯಾಡಿ-ಕೌಕ್ರಾಡಿ ಇದರ ಅಧ್ಯಕ್ಷ ಬಾಲಕೃಷ್ಣ ಬಾಣಜಾಲು ಸ್ವಾಗತಿಸಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕಡಬ ತಾಲೂಕು ಅಧ್ಯಕ್ಷ ಮಹೇಶ್ ಕೆ. ಸವಣೂರು ವಂದಿಸಿದರು. ಶಿವಪ್ರಸಾದ್ ರೈ ಮೈಲೇರಿ, ರವಿಪ್ರಸಾದ್ ಆಲಾಜೆ ನಿರೂಪಿಸಿದರು. ಅಶೋಕ ಆಚಾರ್ಯ ಬಲ್ಯ ಪ್ರಾರ್ಥಿಸಿದರು.