ಕನ್ನಡಪ್ರಭ ವಾರ್ತೆ ನಂಜನಗೂಡುಗ್ರಾಮೀಣ ಬಡ ಕೂಲಿ ಕಾರ್ಮಿಕರಿಗೆ ಉದ್ಯೋಗದ ಭರವಸೆಯಾಗಿದ್ದ ನರೇಗಾ ಯೋಜನೆಯನ್ನು ರದ್ದುಗೊಳಿಸಿರುವುದನ್ನು ಖಂಡಿಸಿ, ಬದಲಿ ಯೋಜನೆಯಲ್ಲಿನ ಕಾರ್ಮಿಕ ವಿರೋಧಿ ಅಂಶಗಳನ್ನು ಕೈಬಿಡಬೇಕು ಹಾಗೂ ಕೂಲಿ ಕಾರ್ಮಿಕರಿಗೆ ಯಾವುದೇ ಷರತ್ತುಗಳಿಲ್ಲದೆ ಕೆಲಸ ನೀಡಬೇಕು ಎಂದು ಆಗ್ರಹಿಸಿ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ಕಾರ್ಯಕರ್ತರು ಮಂಗಳವಾರ ತಾಲೂಕು ಕಚೇರಿ ಎದುರು ಪ್ರತಿಭಟಿಸಿದರು.ಗ್ರಾಮೀಣ ಪ್ರದೇಶದ ಬಡ ಕುಟುಂಬಗಳಿಗೆ ಆರ್ಥಿಕ ಭದ್ರತೆ ಒದಗಿಸುವಲ್ಲಿ ನರೇಗಾ ಯೋಜನೆ ಪ್ರಮುಖ ಪಾತ್ರ ವಹಿಸಿತ್ತು. ಕೃಷಿ ಚಟುವಟಿಕೆಗಳು ಕಡಿಮೆಯಾಗುವ ಅವಧಿಯಲ್ಲಿ ಕೂಲಿ ಕಾರ್ಮಿಕರಿಗೆ ಉದ್ಯೋಗ ದೊರೆಯಲು ಇದು ನೆರವಾಗುತ್ತಿತ್ತು. ಆದರೆ, ಯೋಜನೆಯ ಬದಲಾವಣೆಗಳಿಂದ ಗ್ರಾಮೀಣ ಜನರ ಜೀವನೋಪಾಯಕ್ಕೆ ತೊಂದರೆಯಾಗುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಇ-ಕೆವೈಸಿ, ಆಧಾರ್ ಸಮಸ್ಯೆ ಪರಿಹರಿಸಿ
ಪಡಿತರ ಪಡೆಯಲು ಇ-ಕೆವೈಸಿ ಕಡ್ಡಾಯಗೊಳಿಸಿರುವುದರಿಂದ ತಾಂತ್ರಿಕ ಸಮಸ್ಯೆ ಎದುರಿಸುತ್ತಿರುವ ಅನೇಕರು ಸೌಲಭ್ಯದಿಂದ ವಂಚಿತರಾಗುವಂತಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಸಮಸ್ಯೆಗಳನ್ನು ಪರಿಹರಿಸಿ ಪ್ರಕ್ರಿಯೆಯನ್ನು ಸರಳಗೊಳಿಸಬೇಕು. ಗ್ರಾಮೀಣ ಜನರು ಆಧಾರ್ ಸೇವೆಗಳಿಗಾಗಿ ದೂರದ ಕೇಂದ್ರಗಳಿಗೆ ಅಲೆದಾಡುವುದನ್ನು ತಪ್ಪಿಸಲು ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಆಧಾರ್ ಕೇಂದ್ರಗಳನ್ನು ಆರಂಭಿಸಿ ಅಗತ್ಯ ಸೌಲಭ್ಯ ಕಲ್ಪಿಸಬೇಕು ಎಂದು ಆಗ್ರಹಿಸಿದರು.ಮಹಿಳಾ ಸ್ವಸಹಾಯ ಸಂಘಗಳ ಸಾಲ ಮನ್ನಾಕ್ಕೆ ಆಗ್ರಹ
ಸಾರಿಗೆ ವ್ಯವಸ್ಥೆ ಸುಧಾರಿಸಲು ಒತ್ತಾಯ- ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಸುಗಮ ಸಾರಿಗೆ ಸೌಲಭ್ಯ ದೊರೆಯುವಂತೆ ಕ್ರಮ ಕೈಗೊಳ್ಳಬೇಕು. ಗ್ರಾಮೀಣ ಪ್ರದೇಶಗಳಲ್ಲಿ ಬಸ್ ಸಂಚಾರದ ಕೊರತೆಯನ್ನು ನಿವಾರಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕು. ಹೊರಳವಾಡಿ ಮತ್ತು ಮುಳ್ಳೂರು ಗ್ರಾಮಗಳಲ್ಲಿ ನಡೆಯುತ್ತಿದೆ ಎನ್ನಲಾದ ಅಕ್ರಮ ಮದ್ಯ ಮಾರಾಟವನ್ನು ತಡೆಗಟ್ಟಲು ಸಂಬಂಧಪಟ್ಟ ಇಲಾಖೆಗಳು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.