ಭ್ರಷ್ಟಾಚಾರ ತಡೆಗೆ ಎಲ್ಲರೂ ಕೈಜೋಡಿಸಿ: ವಿಜಯ

KannadaprabhaNewsNetwork | Published : Oct 29, 2024 12:53 AM

ಸಾರಾಂಶ

ಅಕ್ಟೋಬರ್‌ 28ರಿಂದ ನವೆಂಬರ್‌ 3ರವರೆಗೆ ಹಮ್ಮಿಕೊಂಡ ಭ್ರಷ್ಟಾಚಾರ ವಿರುದ್ಧ ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮವನ್ನು ನ್ಯಾಯಾಧೀಶರಾದ ಎನ್.ವಿ.ವಿಜಯ ಉದ್ಘಾಟಿಸಿದರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಭ್ರಷ್ಟಾಚಾರ ದೇಶದ ಜ್ವಲಂತ ಸಮಸ್ಯೆಗಳಲ್ಲಿ ಒಂದಾಗಿದ್ದು, ಇದರ ತಡೆಗೆ ಅಧಿಕಾರಿಗಳು ಹಾಗೂ ಸಾರ್ವಜನಿಕರು ಕೈಜೋಡಿಸಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎನ್.ವಿ.ವಿಜಯ ತಿಳಿಸಿದರು.

ಜಿಪಂ ನೂತನ ಸಭಾಭವನದಲ್ಲಿ ಸೋಮವಾರ ಕರ್ನಾಟಕ ಲೋಕಾಯುಕ್ತ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾಡಳಿತ, ಜಿಪಂ, ಪೊಲೀಸ್ ಇಲಾಖೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ಅ.28ರಿಂದ ನ.3ರವರೆಗೆ ಹಮ್ಮಿಕೊಂಡ ಭ್ರಷ್ಟಾಚಾರ ವಿರುದ್ಧ ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಸರಿಯಾದ ಸಾಕ್ಷಾಧಾರಗಳ ಕೊರತೆ ಇದ್ದಲ್ಲಿ ತಿರ್ಮಾಣ ಕೈಗೊಳ್ಳಲು ವಿಳಂಬವಾಗುತ್ತದೆ. ಆ ದಿಶೆಯಲ್ಲಿ ಪ್ರಥಮದಲ್ಲಿಯೇ ಭ್ರಷ್ಟಾಚಾರ ಮಾಡದಂತೆ ಆಮಿಷಕ್ಕೆ ಒಳಗಾಗದಂತೆ ಜಾಗೃತರಾಗಿ ಕಾರ್ಯನಿರ್ವಹಿಸುವುದು ಸುರಕ್ಷಿತ ಮಾರ್ಗವಾಗಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಜಾನಕಿ ಕೆ.ಎಂ, ಯಾವುದೇ ಸರ್ಕಾರಿ ಅಧಿಕಾರಿಗಳು ಜನ ಸೇವಕರು ಎಂಬುದನ್ನು ಮನದಲ್ಲಿಟ್ಟುಕೊಂಡು ಕೆಲಸ ಮಾಡಬೇಕು. ಪ್ರತಿಯೊಬ್ಬರು ಆತ್ಮಾವಲೋಕನ ಮಾಡಿಕೊಳ್ಳುವುದು ಅವಶ್ಯವಾಗಿದ್ದು, ಭ್ರಷ್ಟಾಚಾರ ಎಂಬುದು ಅಪರಾಧ ಎಂದು ಪ್ರತಿಯೊಬ್ಬರು ಮನವರಿಕೆ ಮಾಡಿಕೊಳ್ಳಬೇಕು. ಕೇವಲ ಸರ್ಕಾರಿ ಕೆಲಸದಲ್ಲಿದ್ದವರು ಭ್ರಷ್ಟಾಚಾರಿಗಳಿಲ್ಲದೇ ಇದ್ದರು, ಕಚೇರಿಗೆ ಬಂದ ಸಾರ್ವಜನಿಕರು ತಮ್ಮ ಕಾರ್ಯದಾಶೆಗೆ ಹಣದ ಆಸೆ ಒಡ್ಡುವ ಪ್ರಸಂಗದಿಂದ, ಭ್ರಷ್ಟಾಚಾರ ಮೊದ ಮೊದಲು ರುಚಿ ಎನಿಸಿದರೂ ಕೊನೆಗೆ ವಿಷವಾಗುವುದೆಂಬುದು ಅರಿತು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದರು.

ಜಿಪಂ ಸಿಇಒ ಶಶಿಧರ ಕುರೇರ ಮಾತನಾಡಿ, ಸಮಾಜದ ಹಿತದೃಷ್ಠಿಯಿಂದ ಹಾಗೂ ದೇಶದ ಅಭಿವೃದ್ಧಿಗಾಗಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುವುದು ಪ್ರತಿಯೊಬ್ಬ ನೌಕರರ ಕರ್ತವ್ಯವಾಗಿದೆ. ಹತ್ತು ಹಲವಾರು ಸರ್ಕಾರಿ ಯೋಜನೆ ಅನುಷ್ಠಾನ ಮಾಡುವಲ್ಲಿ ಆಯೋಜನೆಗೆ ಸಂಬಂಧಿಸಿದ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದರು.

ಕರ್ನಾಟಕ ಲೋಕಾಯುಕ್ತ ಇಲಾಖೆ ಪೊಲೀಸ್ ಅಧೀಕ್ಷಕ ಸತೀಶ ಚಿಟಗುಬ್ಬಿ ಮಾತನಾಡಿ, ಸೇವೆಯಲ್ಲಿ ಮುಖ್ಯವಾಗಿ ಪಾರದರ್ಶಕತೆ ಅಳವಡಿಸಿಕೊಂಡಾಗ ಮಾತ್ರ ಉತ್ತಮ ಸೇವೆ ನೀಡಲು ಸಾಧ್ಯವಾಗುತ್ತದೆ. ಸರ್ಕಾರದ ನಿಯಮಗಳನ್ವಯ ಇತಿ ಮಿತಿಯಲ್ಲಿ ಕೆಲಸ ಮಾಡಬೇಕು. ಅಂದಾಗ ಮಾತ್ರ ಈ ಭ್ರಷ್ಟಾಚಾರ ನಿರ್ಮೂಲನೆ ಮಾಡಲು ಸಾಧ್ಯವಾಗುತ್ತದೆ ಎಂದರು. ಈ ಸಂದರ್ಭದಲ್ಲಿ ಭ್ರಷ್ಟಾಚಾರ ನಿರ್ಮೂಲನೆ ಕುರಿತು ಪ್ರತಿಜ್ಞಾವಿಧಿ ಬೋಧಿಸಲಾಯಿತು.

ಕಾರ್ಯಕ್ರಮದ ಪೂರ್ವದಲ್ಲಿ ಪ್ರಾಸ್ತಾವಿಕವಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಚಂದ್ರಶೇಖರ ದಿಡ್ಡಿ ಮಾತನಾಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ, ಅಪರ ಜಿಲ್ಲಾಧಿಕಾರಿ ಪರಶುರಾಮ ಶಿನ್ನಾಳಕರ, ಜಿಪಂ ಉಪ ಕಾರ್ಯದರ್ಶಿ ಎನ್.ವಾಯ್.ಬಸರಿಗಿಡದ ಸೇರಿದಂತೆ ಇತರರು ಉಪಸ್ಥಿತರಿದ್ದರು.

Share this article