ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಬುಧವಾರ ಏರ್ಪಡಿಸಿದ್ದ ಜಿಲ್ಲಾ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ತಮ್ಮ ಹಂತದಲ್ಲಿ ಇತ್ಯರ್ಥವಾಗದ ಸಮಸ್ಯೆಗಳನ್ನು ಕೂಡಲೇ ತಮ್ಮ ಮೇಲಾಧಿಕಾರಿಗಳ ಗಮನಕ್ಕೆ ತಂದು ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವಂತೆ ಸಲಹೆ ನೀಡಿದರು.
ಜಿಲ್ಲೆಯಲ್ಲಿ ಬಾಡಿಗೆ ಕಟ್ಟಡದಲ್ಲಿ ನಡೆಸಲಾಗುತ್ತಿರುವ ಅಂಗನವಾಡಿ ಕೇಂದ್ರಗಳಿಗೆ ಶಾಶ್ವತ ಕಟ್ಟಡ ನಿರ್ಮಾಣಕ್ಕೆ ಕ್ರಮ ವಹಿಸಲಾಗುತ್ತಿದೆ. ಕೆಲವು ಗ್ರಾಮಗಳಲ್ಲಿನ ಶಾಲಾ ಆವರಣದಲ್ಲಿ ಅಂಗನವಾಡಿ ಕಟ್ಟಡಗಳ ನಿರ್ಮಾಣಕ್ಕೆ ಸ್ಥಳ ಗುರುತಿಸಲಾಗಿದ್ದು, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಕೂಡಲೇ ನಿರಾಕ್ಷೇಪಣಾ ಪತ್ರ ನೀಡಿ ಕಟ್ಟಡ ನಿರ್ಮಾಣಕ್ಕೆ ಅನುಮತಿ ನೀಡುವಂತೆ ಸೂಚಿಸಿದರು.ಪ್ರತಿ ಅಂಗನವಾಡಿ ಕೇಂದ್ರಗಳಲ್ಲಿ ಸ್ಥಳೀಯವಾಗಿರುವ ಗರ್ಭಿಣಿ, ಬಾಣಂತಿ ಮತ್ತು ಹಸುಕಂದಮ್ಮಗಳ ಅಧಿಕೃತ ಮಾಹಿತಿ, ಶಾಲೆಯಿಂದ ಹೊರಗುಳಿದ ಹಾಗೂ ನಿತ್ಯ ಶಾಲೆಗೆ ಹೋಗುತ್ತಿರುವ ಮಕ್ಕಳ ದಾಖಲೆಗಳನ್ನು ನಿರ್ವಹಿಸುವಂತೆ ಸೂಚಿಸಿದ ಅವರು, ತಾಲೂಕು ಮಟ್ಟದ ಅಧಿಕಾರಿಗಳು ತಮ್ಮ ಕ್ಷೇತ್ರವ್ಯಾಪ್ತಿಯಲ್ಲಿನ ಸಾಂತ್ವನ ಕೇಂದ್ರಗಳಿಗೆ ಖುದ್ದು ಭೇಟಿ ನೀಡಿ ಪ್ರಗತಿ ಪರಿಶೀಲಿಸಬೇಕು. ಇದೇ ವೇಳೆ ಅಲ್ಲಿನ ಅಪೌಷ್ಟಿಕ ಮಕ್ಕಳ ಬಗ್ಗೆಯೂ ಮಾಹಿತಿ ಪಡೆದು, ಚಿಕಿತ್ಸೆಗೆ ಕ್ರಮ ಕೈಗೊಳ್ಳುವಂತೆ ತಿಳಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಎನ್.ಹೇಮಂತ್ ಮಾತನಾಡಿ, ಮಕ್ಕಳ ರಕ್ಷಣಾ ಕಾವಲು ಸಮಿತಿಯ ಸದಸ್ಯ ಕಾರ್ಯದರ್ಶಿಗಳಾಗಿರುವ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ತಮ್ಮ ಜವಾಬ್ದಾರಿಯರಿತು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು. ತಮ್ಮ ಕಾರ್ಯಕ್ಷೇತ್ರದಲ್ಲಿ ಮಕ್ಕಳ ರಕ್ಷಣೆಗೆ ಸಂಬಂಧಿಸಿದಂತೆ ಸಮಸ್ಯಾತ್ಮಕ ಮಕ್ಕಳ ಸಮಗ್ರ ವಿವರಗಳನ್ನು ಹೊಂದಿರಬೇಕು ಎಂದರು.
ಜಿಲ್ಲೆಯಲ್ಲಿ ಕಳೆದ ಮೂರು ತಿಂಗಳ ಅವಧಿಯಲ್ಲಿ ಕೌಟುಂಬಿಕ ಕಲಹಕ್ಕೆ ಸಂಬಂಧಿಸಿದ 400ಕ್ಕೂ ಹೆಚ್ಚಿನ ಪ್ರಕರಣಗಳು ದಾಖಲಾಗಿರುವುದು. ಮಾತೃವಂದನಾ ಯೋಜನೆಯ ಅನುಷ್ಠಾನದಲ್ಲಿ ನಿರೀಕ್ಷಿತ ಪ್ರಗತಿ ಸಾಧಿಸದಿರುವುದು ಅತ್ಯಂತ ಬೇಸರದ ಸಂಗತಿಯಾಗಿದೆ.