ಅರ್ಥಪೂರ್ಣ ಸ್ವಾತಂತ್ರ್ಯೋತ್ಸವ ಆಚರಣೆಗೆ ಸಕಲ ಸಿದ್ಧತೆ: ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ

KannadaprabhaNewsNetwork |  
Published : Jul 31, 2025, 12:46 AM IST
30ಎಚ್‌ವಿಆರ್3 | Kannada Prabha

ಸಾರಾಂಶ

ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಆಯೋಜನೆಯಲ್ಲಿ ಯಾವುದೇ ಲೋಪವಾಗದಂತೆ ಅಚ್ಚುಕಟ್ಟಾಗಿ ಸಿದ್ಧತೆ ಮಾಡಿಕೊಳ್ಳಬೇಕು. ಈ ಕುರಿತಂತೆ ವಿವಿಧ ಇಲಾಖೆಗಳಿಗೆ ವಹಿಸಿರುವ ಕೆಲಸಗಳನ್ನು ಸಮನ್ವಯದಿಂದ ಹಾಗೂ ಅತ್ಯಂತ ಜವಾಬ್ದಾರಿಯಿಂದ ಮಾಡಬೇಕು.

ಹಾವೇರಿ: ಜಿಲ್ಲಾಡಳಿತದಿಂದ ಆ. 15ರಂದು ಆಯೋಜಿಸುವ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸುವ ಹಿನ್ನೆಲೆ ಅಗತ್ಯ ಸಿದ್ಧತೆಗಳನ್ನು ಕೈಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಅವರು ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಸ್ವಾತಂತ್ರ್ಯೋತ್ಸವದ ಸಿದ್ಧತಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಆಯೋಜನೆಯಲ್ಲಿ ಯಾವುದೇ ಲೋಪವಾಗದಂತೆ ಅಚ್ಚುಕಟ್ಟಾಗಿ ಸಿದ್ಧತೆ ಮಾಡಿಕೊಳ್ಳಬೇಕು. ಈ ಕುರಿತಂತೆ ವಿವಿಧ ಇಲಾಖೆಗಳಿಗೆ ವಹಿಸಿರುವ ಕೆಲಸಗಳನ್ನು ಸಮನ್ವಯದಿಂದ ಹಾಗೂ ಅತ್ಯಂತ ಜವಾಬ್ದಾರಿಯಿಂದ ಮಾಡಬೇಕು ಎಂದು ನಿರ್ದೇಶನ ನೀಡಿದರು.ಸ್ವಾತಂತ್ರ್ಯೋತ್ಸವ ಆಮಂತ್ರಣ ಪತ್ರಿಕೆ, ಎಸ್ಎಸ್ಎಲ್‌ಸಿ, ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಹಾಗೂ ವಿವಿಧ ಕ್ಷೇತ್ರದ ಸಾಧಕರ ಸನ್ಮಾನಕ್ಕೆ ಆಯ್ಕೆ, ಕ್ರೀಡಾಂಗಣದಲ್ಲಿ ವೇದಿಕೆ ನಿರ್ಮಾಣ, ಅಲಂಕಾರ, ರಾಷ್ಟ್ರಧ್ವಜಾರೋಹಣಕ್ಕೆ ಸಿದ್ಧತೆ, ಆಸನ ವ್ಯವಸ್ಥೆ, ಕವಾಯತು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಸಿದ್ಧತೆ, ಲಘು ಉಪಹಾರ, ಶಿಷ್ಟಾಚಾರದಂತೆ ಆಸನ ವ್ಯವಸ್ಥೆ ಸೇರಿದಂತೆ ಎಲ್ಲ ಪೂರಕ ಸಿದ್ಧತೆಗಳನ್ನು ಮಾಡಲು ವಿವಿಧ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.ಆ. 14 ಮತ್ತು 15ರಂದು ನಗರದ ವಿವಿಧ ವೃತ್ತಗಳು, ನಗರ ಸ್ವಚ್ಛತೆ, ವಿವಿಧ ವೃತ್ತಗಳಿಗೆ ದೀಪಾಲಂಕಾರ, ಕಚೇರಿಗಳಿಗೆ ದೀಪಾಲಂಕಾರ, ರಾಷ್ಟ್ರಗೀತೆ ಹಾಗೂ ನಾಡಗೀತೆ ತಂಡದ ಆಯ್ಕೆ, ಪೊಲೀಸ್ ಬ್ಯಾಂಡ್, ರಾಷ್ಟ್ರಧ್ವಜಾರೋಹಣಕ್ಕೆ ಹಾಗೂ ಪಥಸಂಚಲನಕ್ಕೆ ಸಿದ್ಧತೆ, ಸನ್ಮಾನಿತರು, ಮಾಧ್ಯಮದವರು, ಗಣ್ಯರಿಗೆ ಪ್ರತ್ಯೇಕ ಆಸನ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ಸೂಕ್ತ ಪೊಲೀಸ್ ಬಂದೋಬಸ್ತ್, ಆ್ಯಂಬುಲೆನ್ಸ್ ಹಾಗೂ ಪ್ರಥಮ ಚಿಕಿತ್ಸೆ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಮಾಡಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.ಆ. 15ರ ಬೆಳಗ್ಗೆ 9 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಿಂದ ಧ್ವಜಾರೋಹಣ, 9.15ಕ್ಕೆ ಪೊಲೀಸ್, ಗೃಹರಕ್ಷಕದಳ, ಎನ್‌ಸಿಸಿ, ಸ್ಕೌಟ್ಸ್ ಆ್ಯಂಡ್ ಗೈಡ್ಸ್, ಅಬಕಾರಿ, ಅರಣ್ಯ ಇಲಾಖೆ, ಸೇವಾದಳ, ಶಾಲಾ- ಕಾಲೇಜು ವಿದ್ಯಾರ್ಥಿಗಳಿಂದ ಪಥಸಂಚಲನ, ಜಿಲ್ಲಾ ಉಸ್ತುವಾರಿ ಸಚಿವರಿಂದ ಸ್ವಾತಂತ್ರ್ಯೋತ್ಸವ ಸಂದೇಶ, 9.30ರಿಂದ 10.30ರವರೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಸಂಜೆ ಗುರುಭವನದಲ್ಲಿ ಸ್ವಾತಂತ್ರ್ಯೋತ್ಸವ ನಿಮಿತ್ಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲು ತೀರ್ಮಾನಿಸಲಾಯಿತು.ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರುಚಿ ಬಿಂದಲ್, ಅಪರ ಜಿಲ್ಲಾಧಿಕಾರಿ ಡಾ. ನಾಗರಾಜ್ ಎಲ್., ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಸಿದ್ದರಾಮಯ್ಯ ಬರಗಿಮಠ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಪ್ರಶಾಂತ ವರಗಪ್ಪನವರ, ಪ್ರಭಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಯಾನಂದ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಲತಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಆರ್.ವಿ. ಚಿನ್ನಿಕಟ್ಟಿ, ಪೊಲೀಸ್ ಇಲಾಖೆ ಅಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.

PREV

Recommended Stories

2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...