ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ನಡೆದ ಸಭೆಯಲ್ಲಿ
ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ -2026 ಕಾರ್ಯವನ್ನು ಯಶಸ್ವಿಯಾಗಿ ನಡೆಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಎಡಿಸಿ ಜಗದೀಶ್ ತಿಳಿಸಿದರು.
ತಾಲೂಕು ಕಚೇರಿಯಲ್ಲಿ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ಆರಂಭವಾಗಲಿದ್ದು, ರಾಜಕೀಯ ಪಕ್ಷಗಳ ಸಭೆಗಳು, ಸಾರ್ವಜನಿಕ ಜಾಗೃತಿ ಕಾರ್ಯಕ್ರಮಗಳು ಹಾಗೂ ಎನ್ಯುಮರೇಷನ್ ಫಾರಂಗಳ ಮುದ್ರಣ ಕಾರ್ಯಗಳು ನಡೆಯುತ್ತಿವೆ ಎಂದು ಹೇಳಿದರು.ಬೇಲೂರು ವಿಧಾನಸಭಾ ಕ್ಷೇತ್ರದ 270 ಮತಗಟ್ಟೆಗಳಿಗೆ ಬೂತ್ ಮಟ್ಟದ ಅಧಿಕಾರಿಗಳನ್ನು (ಬಿಎಲ್ಒ) ನೇಮಿಸಲಾಗಿದ್ದು, ಅವರ ಕಾರ್ಯದ ಮೇಲ್ವಿಚಾರಣೆಗೆ ಮೇಲ್ವಿಚಾರಕರನ್ನು ನಿಯೋಜಿಸಲಾಗಿದೆ. ಬಿಎಲ್ಒಗಳು ಹಾಗೂ ಮೇಲ್ವಿಚಾರಕರಿಗೆ ವಿಶೇಷ ತರಬೇತಿ ನೀಡಲಾಗುವುದು. ಜೂನ್ 30ರಿಂದ ಜುಲೈ 29ರವರೆಗೆ ಬಿಎಲ್ಒಗಳು ಮನೆ-ಮನೆಗೆ ಭೇಟಿ ನೀಡಿ ಮತದಾರರಿಗೆ ಎನ್ಯುಮರೇಷನ್ ಫಾರಂಗಳನ್ನು ವಿತರಿಸಿ, ಭರ್ತಿ ಮಾಡಿದ ಅರ್ಜಿಗಳನ್ನು ಸಂಗ್ರಹಿಸಲಿದ್ದಾರೆ. ಮನೆಯಲ್ಲಿ ಯಾರೂ ಇಲ್ಲದಿದ್ದರೆ ಮೂರು ಬಾರಿ ಭೇಟಿ ನೀಡಿ ಮಾಹಿತಿ ಪಡೆಯಲಾಗುವುದು. ಸಂಪರ್ಕ ಸಾಧ್ಯವಾಗದಿದ್ದಲ್ಲಿ ನೋಟಿಸ್ ಅಂಟಿಸಲಾಗುವುದು ಎಂದು ತಿಳಿಸಿದರು.
ಆಗಸ್ಟ್ 5ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು. ಆಗಸ್ಟ್ 5ರಿಂದ ಸೆಪ್ಟೆಂಬರ್ 4ರವರೆಗೆ ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ಆಕ್ಷೇಪಣೆ ಸಲ್ಲಿಸಲು ಅವಕಾಶವಿದ್ದು, ಅರ್ಜಿಗಳ ವಿಚಾರಣೆಯನ್ನು ಅಕ್ಟೋಬರ್ 3ರೊಳಗೆ ಪೂರ್ಣಗೊಳಿಸಿ ಅಕ್ಟೋಬರ್ 7ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಚುನಾವಣಾ ವಿಭಾಗದ ಅಧಿಕಾರಿಗಳು, ಬಿಎಲ್ಒಗಳು ಹಾಗೂ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.