ಕೊಪ್ಪಳ: ಜಿಲ್ಲೆಯ ಎಲ್ಲ ಅಂಗನವಾಡಿಯಲ್ಲಿ 6 ವರ್ಷದೊಳಗಿನ ಮಕ್ಕಳಿಗೆ ಶಾಲಾಪೂರ್ವ ಶಿಕ್ಷಣ ನೀಡಲಾಗುತ್ತಿದ್ದು, ಇದು ಮಗುವಿನ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗಿದೆ ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಹೇಳಿದರು.
ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೆ ಮಾತನಾಡಿ, ಹುಟ್ಟಿದ ಪ್ರತಿ ಮಗುವಿನಲ್ಲಿ ಒಂದು ಪ್ರತಿಭೆ ಇರುತ್ತದೆ. ಅದನ್ನು ಗುರುತಿಸಿ, ಪ್ರೋತ್ಸಾಹಿಸುವ ಅಗತ್ಯವಿದೆ. ಇದರಲ್ಲಿ ಪೋಷಕರ, ಶಿಕ್ಷಕರ ಪಾತ್ರ ಬಹುಮುಖ್ಯವಾಗುತ್ತದೆ. ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಿರುವ ಶಾಲಾ ಪೂರ್ವ ಶಿಕ್ಷಣ ಪದ್ದತಿ ಮಗುವಿನಲ್ಲಿ ಆತ್ಮವಿಶ್ವಾಸ ಹೆಚ್ಚಿಸುತ್ತದೆ. ವೇದಿಕೆ ಕುರಿತಾಗಿ ಭಯ ಹೋಗಲಾಡಿಸಿ, ತಮ್ಮ ಪ್ರತಿಭೆ ಅನಾವರಣಕ್ಕೆ ಪೂರಕವಾಗಿ ಮಕ್ಕಳ ಅಭಿವೃದ್ಧಿಗೆ ಪ್ರೋತ್ಸಾಹಿಸುತ್ತದೆ. ಇಂದಿನ ಮಕ್ಕಳ ಹಬ್ಬದಲ್ಲಿ ಅಂಗನವಾಡಿಯ ಮಕ್ಕಳು ಪ್ರಸ್ತುತ ಪಡಿಸುವ ನೃತ್ಯ, ನಾಟಕಗಳಲ್ಲಿ ಅವರ ಪ್ರತಿಭೆ ಕಾಣುತ್ತದೆ. ಪೋಷಕರು ಮಕ್ಕಳಿಗೆ ಓದಿನ ಬಗ್ಗೆಯೇ ಹೆಚ್ಚಿನ ಒತ್ತಡ ಹಾಕದೆ ಪಠ್ಯೇತರ ಚಟುವಟಿಕೆ ಬಗ್ಗೆ ಮಕ್ಕಳಲ್ಲಿರುವ ಆಸಕ್ತಿಯನ್ನು ಗುರುತಿಸಿ ಮಕ್ಕಳನ್ನು ಪ್ರೋತ್ಸಾಹಿಸಬೇಕು ಎಂದು ಹೇಳಿದರು.
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರಿನ ಸದಸ್ಯರಾದ ಶೇಖರಗೌಡ ಜಿ. ರಾಮತ್ನಾಳ ಮಾತನಾಡಿ, ಪೋಷಕರು ಮಕ್ಕಳನ್ನು ಅಂಕಗಳಿಗೆ ಸೀಮಿತಗೊಳಿಸಬೇಡಿ. ಮಕ್ಕಳ ಆಸಕ್ತಿಗೆ ಅನುಗುಣವಾಗಿ ಅವರ ಆಯ್ಕೆಯ ಕ್ಷೇತ್ರದಲ್ಲಿ ಮಕ್ಕಳು ಮುಂದುವರಿಯಲು ಅವಕಾಶ ಕಲ್ಪಿಸಿಕೊಡಿ. ಎಲ್ಲ ಪಠ್ಯೇತರ ಚಟುವಟಿಕೆಯಲ್ಲಿ ಭಾಗವಹಿಸಲು ಮಕ್ಕಳನ್ನು ಪ್ರೋತ್ಸಾಹಿಸಿ. ಮಕ್ಕಳಿಗೆ ಅವರ ಆಯ್ಕೆಯ ಕ್ಷೇತ್ರದಲ್ಲಿ ಮುಂದುವರಿಯುವ ಹಕ್ಕಿದೆ. ಅವರ ಆಯ್ಕೆಯ ಕ್ಷೇತ್ರದ ಸಾಧಕ-ಬಾಧಕಗಳ ಬಗ್ಗೆ ಮಕ್ಕಳಿಗೆ ತಿಳಿಹೇಳುವ ಜವಾಬ್ದಾರಿ ಪೋಷಕರದ್ದು. ಬರೀ ಶಿಕ್ಷಣವನ್ನು ನೀಡುವುದು ಮಾತ್ರ ಪೋಷಕರ, ಶಿಕ್ಷಕರ ಜವಾಬ್ದಾರಿಯಲ್ಲ. ಬದಲಾಗಿ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪ್ರೋತ್ಸಾಹಿಸಬೇಕು ಎಂದು ಹೇಳಿದರು.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ತಿಪ್ಪಣ್ಣ ಸಿರಸಗಿ, ತಹಸೀಲ್ದಾರ್ ವಿಠ್ಠಲ್ ಚೌಗಲಾ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ದುಂಡಪ್ಪ ತುರಾದಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಯಲ್ಲಮ್ಮ, ಜಯಶ್ರೀ, ಬೆಟದಪ್ಪ, ನಿರೂಪಣಾಧಿಕಾರಿಗಳಾದ ಗಂಗಪ್ಪ, ಶಿಕ್ಷಣ ಇಲಾಖೆಯ ಅಧಿಕಾರಿಗಳು, ಎಲ್ಲ ತಾಲೂಕುಗಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಸರ್ಕಾರಿ ಬಾಲಕರ ಬಾಲ ಮಂದಿರ, ಬಾಲಕಿಯರ ಬಾಲ ಮಂದಿರ ಮಕ್ಕಳು, ಅಂಗನವಾಡಿ ಕಾರ್ಯಕರ್ತೆಯರು, ಮಕ್ಕಳು ಉಪಸ್ಥಿತರಿದ್ದರು. ಅಂಗನವಾಡಿ ಹಾಗೂ ಶಾಲಾ ಮಕ್ಕಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸ್ತುತ ಪಡಿಸಿದರು.