)
ಕಾರ್ಕಳ: ಪುರಸಭಾ ವ್ಯಾಪ್ತಿಯ ಪತ್ತೊಂಜಿಕಟ್ಟೆಯಲ್ಲಿ ನಿರ್ಮಾಣವಾಗುತ್ತಿರುವ ಆಶ್ರಯ ಮನೆಗಳ ಫಲಾನುಭವಿಗಳಿಗೆ ಶಾಸಕರ ಕಚೇರಿಗೆ ಭೇಟಿ ನೀಡುವಂತೆ ಒತ್ತಾಯಿಸುತ್ತಿರುವುದು ಖಂಡನೀಯ. ಇಂತಹ ವರ್ತನೆ ಮುಂದುವರಿದರೆ ಪ್ರತಿಭಟನೆ ಅನಿವಾರ್ಯವಾಗಲಿದೆ ಎಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಶುಭದರಾವ್ ಎಚ್ಚರಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ಮುತುವರ್ಜಿಯಲ್ಲಿ ಆಶ್ರಯ ಮನೆಗಳ ನಿರ್ಮಾಣ ಕಾರ್ಯ ಒಂದು ಹಂತದಲ್ಲಿ ಪೂರ್ಣಗೊಂಡಿದೆ. ಶಾಸಕರ ಅಧ್ಯಕ್ಷತೆಯಲ್ಲಿ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ಪೂರ್ಣಗೊಳಿಸಿ ಮನೆಗಳನ್ನು ವಿತರಿಸಬೇಕಿತ್ತು. ಆದರೆ, ಯೋಜನೆಯ ಶ್ರೇಯಸ್ಸು ರಾಜ್ಯ ಸರ್ಕಾರಕ್ಕೆ ಸಲ್ಲುತ್ತದೆ ಎಂಬ ಕಾರಣಕ್ಕೆ ಮನೆ ಹಸ್ತಾಂತರ ಪ್ರಕ್ರಿಯೆಯಲ್ಲಿ ವಿಳಂಬ ಮಾಡಲಾಗುತ್ತಿದೆ ಎಂಬುದು ಸಾರ್ವಜನಿಕರ ಅಭಿಪ್ರಾಯವಾಗಿದೆ ಎಂದು ತಿಳಿಸಿದ್ದಾರೆ. ಶಾಸಕರ ಕಚೇರಿಯಿಂದ ಫಲಾನುಭವಿಗಳಿಗೆ ಕರೆ ಮಾಡಿ ಕಚೇರಿಗೆ ಭೇಟಿ ನೀಡುವಂತೆ ಒತ್ತಾಯಿಸಿರುವುದರ ಹಿಂದಿನ ಉದ್ದೇಶವೇನು? ಎಂದು ಅವರು ಪ್ರಶ್ನಿಸಿದ್ದಾರೆ. ಕಚೇರಿಗೆ ಭೇಟಿ ನೀಡಿಲ್ಲ ಎಂಬ ಕಾರಣಕ್ಕೆ ಫಲಾನುಭವಿಗಳಿಗೆ ಯಾವುದೇ ತೊಂದರೆ ನೀಡಿದರೆ ಕಾಂಗ್ರೆಸ್ ತೀವ್ರ ಪ್ರತಿರೋಧ ವ್ಯಕ್ತಪಡಿಸಲಿದೆ ಎಂದು ಶುಭದರಾವ್ ಎಚ್ಚರಿಸಿದ್ದಾರೆ.