ಕನ್ನಡಪ್ರಭ ವಾರ್ತೆ ಸಕಲೇಶಪುರ
ಆರೋಗ್ಯ ಕೇಂದ್ರದಲ್ಲಿ ಅಂದಾಜು ₹ 50 ಲಕ್ಷ ವೆಚ್ಚದಲ್ಲಿ ವಿವಿಧ ನವೀಕರಣ ಹಾಗೂ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದ್ದು, ಈ ಪೈಕಿ ಸುಮಾರು ₹ 32 ಲಕ್ಷದ ಕಾಮಗಾರಿಗೆ ಟೆಂಡರ್ ಮೂಲಕ ಕಾರ್ಯಾದೇಶ ನೀಡಲಾಗಿತ್ತು ಎನ್ನಲಾಗಿದೆ. ಆದರೆ, ಕಾಮಗಾರಿಯ ಗುಣಮಟ್ಟ ಹಾಗೂ ಅನುಷ್ಠಾನದಲ್ಲಿ ಲೋಪಗಳಾಗಿವೆ ಎಂದು ಗ್ರಾಮಸ್ಥರು ಶಾಸಕರ ಗಮನಕ್ಕೆ ತಂದರು. ಉದ್ಘಾಟನೆಗೆ ಆಗಮಿಸಿದ್ದ ಶಾಸಕರು ಗ್ರಾಮಸ್ಥರ ಅಹವಾಲು ಆಲಿಸಿದ ಬಳಿಕ ಕಾಮಗಾರಿಯ ಗುಣಮಟ್ಟದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಆರೋಪಗಳ ಕುರಿತು ಸ್ಪಷ್ಟತೆ ದೊರೆಯುವವರೆಗೆ ಉದ್ಘಾಟನೆ ನಡೆಸುವುದು ಸೂಕ್ತವಲ್ಲ ಎಂದು ನಿರ್ಧರಿಸಿ ಕಾರ್ಯಕ್ರಮವನ್ನು ಮುಂದೂಡಿದರು. ಈ ವೇಳೆ ಸಂಬಂಧಪಟ್ಟ ಎಂಜಿನಿಯರ್‌ಗಳು ಹಾಗೂ ತಾಲೂಕು ಆರೋಗ್ಯ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಿದ ಶಾಸಕರು, ಕಾಮಗಾರಿಯ ಗುಣಮಟ್ಟ, ಬಳಸಿರುವ ಸಾಮಗ್ರಿಗಳು, ಅಂದಾಜು ಪಟ್ಟಿ ಹಾಗೂ ವಾಸ್ತವವಾಗಿ ಕೈಗೊಂಡಿರುವ ಕೆಲಸಗಳ ಕುರಿತು ಸಮಗ್ರ ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸಿದರು.ಸಾರ್ವಜನಿಕರ ತೆರಿಗೆ ಹಣದಲ್ಲಿ ನಡೆಯುವ ಅಭಿವೃದ್ಧಿ ಕಾಮಗಾರಿಗಳಲ್ಲಿ ನಿರ್ಲಕ್ಷ್ಯ ಅಥವಾ ಕಳಪೆ ಗುಣಮಟ್ಟವನ್ನು ಸಹಿಸುವುದಿಲ್ಲ. ಆಸ್ಪತ್ರೆಯ ಕಾಮಗಾರಿಯಲ್ಲಿ ಲೋಪ ಕಂಡುಬಂದರೆ ಅದನ್ನು ಗಂಭೀರವಾಗಿ ಪರಿಗಣಿಸಲಾಗುವುದು. ಪರಿಶೀಲನೆಯಲ್ಲಿ ಲೋಪ ಅಥವಾ ಕರ್ತವ್ಯಲೋಪ ಸಾಬೀತಾದರೆ ಸಂಬಂಧಪಟ್ಟ ಎಂಜಿನಿಯರ್‌ಗಳು, ಗುತ್ತಿಗೆದಾರರು ಹಾಗೂ ಜವಾಬ್ದಾರಿಯುತ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಮೇಲಧಿಕಾರಿಗಳಿಗೆ ಶಿಫಾರಸು ಮಾಡಲಾಗುವುದು ಎಂದು ಎಚ್ಚರಿಸಿದರು.ಕಾಮಗಾರಿಯಲ್ಲಿನ ಲೋಪಗಳನ್ನು ಸರಿಪಡಿಸಿ ಗುಣಮಟ್ಟ ಖಚಿತಪಡಿಸಿದ ಬಳಿಕವಷ್ಟೇ ಉದ್ಘಾಟನೆಗೆ ಅವಕಾಶ ನೀಡಲಾಗುವುದು ಎಂದು ಸ್ಪಷ್ಟಪಡಿಸಿದರು.