ಕನ್ನಡಪ್ರಭ ವಾರ್ತೆ ಮಡಿಕೇರಿ
ರಾಜ್ಯ ಸರ್ಕಾರ ದಲಿತ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ ಎಂದು ಆರೋಪಿಸಿ ಕೊಡಗು ಜಿಲ್ಲಾ ಬಿಜೆಪಿ ಹಾಗೂ ಎಸ್‌ಸಿ ಮೋರ್ಚಾ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು.ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದರು.ಈ ಸಂದರ್ಭ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ, ಕಳೆದ 9 ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ದಲಿತ ಸಮುದಾಯದ ವಿಚಾರದಲ್ಲಿ ಕೇವಲ ಮಾತಿನಲ್ಲಿ ಮಾತ್ರ ಕಾಳಜಿ ತೋರಿದೆ, ಉಳಿದಂತೆ ಎಲ್ಲಾ ಹಂತದಲ್ಲೂ ವಂಚಿಸುತ್ತಾ ಬರುತ್ತಿದೆ. ಪರಿಶಿಷ್ಟರಿಗಾಗಿ ಮೀಸಲಿಟ್ಟ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳಲಾಗಿದೆ ಎಂದು ಆರೋಪಿಸಿದರು.ಸಮಾಜ ಕಲ್ಯಾಣ ಸಚಿವರು ಕಾಂಗ್ರೆಸ್ ಪಕ್ಷದ ಹಿತವನ್ನು ಕಾಪಾಡಿಕೊಳ್ಳಲು ಮಾತ್ರ ದಲಿತ ಸಮುದಾಯವನ್ನು ಬಳಸಿಕೊಳ್ಳುತ್ತಿದ್ದಾರೆ. ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭಿವೃದ್ಧಿ ಇಲಾಖೆಗಳ ಅನುದಾನವನ್ನು ವಿದ್ಯಾರ್ಥಿಗಳಿಗೆ ಹಾಗೂ ಅರ್ಹ ಫಲಾನುಭವಿಗಳಿಗೆ ನೀಡದೆ ವಂಚಿಸಲಾಗುತ್ತಿದೆ ಎಂದ ರವಿ ಕಾಳಪ್ಪ ದಲಿತ ಸಮುದಾಯಕ್ಕಾಗಿ ಮೀಸಲಿಟ್ಟ ಹಣವನ್ನು ದಲಿತರ ಅಭಿವೃದ್ಧಿಗೆ ವ್ಯಯ ಮಾಡಬೇಕು, ತಪ್ಪಿದಲ್ಲಿ ಮುಂದಿನ ದಿನಗಳಲ್ಲಿ ಹೋರಾಟ ತೀವ್ರಗೊಳಿಸುವುದಾಗಿ ಎಚ್ಚರಿಸಿದರು.ಬಿಜೆಪಿ ಎಸ್‌ಸಿ ಮೋರ್ಚಾ ಜಿಲ್ಲಾಧ್ಯಕ್ಷ ಪಿ.ಎಂ.ರವಿ ಮಾತನಾಡಿ, ರಾಜ್ಯದಲ್ಲಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಬಂದ ನಂತರ ದಲಿತ ವಿರೋಧಿ ನೀತಿ ಅನುಸರಿಸಲಾಗುತ್ತಿದೆ. ಪರಿಶಿಷ್ಟ ಜಾತಿಗೆ ಸಂಬಂಧಿಸಿದ ಇಲಾಖೆಗಳಲ್ಲಿ ಅನುದಾನದ ಕೊರತೆ ಎದುರಾಗಿದೆ. ಬಿಟ್ಟಿ ಭಾಗ್ಯದಿಂದಾಗಿ ಪರಿಶಿಷ್ಟ ಜಾತಿ- ಪಂಗಡವನ್ನು ನಿರ್ಲಕ್ಷ್ಯ ಮಾಡಲಾಗುತ್ತಿದೆ ಎಂದು ಆರೋಪಿಸಿದ ರವಿ ಜಿಲ್ಲೆಯಲ್ಲಿರುವ ಪ.ಜಾತಿ, ಪ.ಪಂಗಡದ ಸಮುದಾಯದವನ್ನು ಒಗ್ಗೂಡಿಸಿ ಕಾರ್ಡ್ ಚಳವಳಿ ನಡೆಸಲಾಗುವುದು ಎಂದರು.ಪ್ರತಿಭಟನೆಯಲ್ಲಿ ಎಸ್.ಟಿ.ಮೋರ್ಚಾದ ರಾಜ್ಯ ಉಪಾಧ್ಯಕ್ಷೆ ಕೆ.ಆರ್.ಮಂಜುಳಾ, ಜಿಲ್ಲಾಧ್ಯಕ್ಷ ಎಂ.ಎಂ.ಪರಮೇಶ್ವರ್, ಬಿಜೆಪಿ ವಕ್ತಾರ ಬಿ.ಕೆ.ಅರುಣ್ ಕುಮಾರ್, ಪ್ರಮುಖರಾದ ಸುಬ್ರಮಣ್ಯ ಉಪಾಧ್ಯಯ, ರಾಬಿನ್ ದೇವಯ್ಯ, ಬಿ.ಬಿ.ಭಾರತೀಶ್ ಸರಿದಂತೆ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು