ಕನ್ನಡಪ್ರಭ ವಾರ್ತೆ ಆಲಮಟ್ಟಿ
123.081 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿರುವ ಆಲಮಟ್ಟಿ ಜಲಾಶಯದಲ್ಲಿ ಸದ್ಯ ಸುಮಾರು 118 ಟಿಎಂಸಿ ನೀರು ಸಂಗ್ರಹವಾಗಿದೆ. ಜಲಾಶಯದ ನೀರಿನ ಮಟ್ಟ 519.34 ಮೀಟರ್‌ಗೆ ತಲುಪಿದ್ದು, ಗರಿಷ್ಠ ಮಟ್ಟದ ಸಮೀಪದಲ್ಲಿದೆ. ಬುಧವಾರ ರಾತ್ರಿ 7.30ರ ವೇಳೆಗೆ ಜಲಾಶಯದ ಎಲ್ಲಾ 26 ಗೇಟ್‌ಗಳನ್ನು ತೆರೆದು ಹೆಚ್ಚುವರಿ ನೀರನ್ನು ನದಿಗೆ ಹರಿಸಲಾಗುತ್ತಿದೆ.
1.10 ಲಕ್ಷ ಕ್ಯು ಹೊರಹರಿವು:ಪ್ರಸ್ತುತ ಆಲಮಟ್ಟಿ ಜಲಾಶಯಕ್ಕೆ 89,361 ಕ್ಯೂಸೆಕ್ ನೀರು ಹರಿದುಬರುತ್ತಿದೆ. ಜಲಾಶಯದ ವಿದ್ಯುದ್ದಾಗಾರದ ಮೂಲಕ 42,500 ಕ್ಯೂಸೆಕ್ ಮತ್ತು 26 ಗೇಟ್‌ಗಳ ಮೂಲಕ 67,500 ಕ್ಯೂಸೆಕ್ ಸೇರಿ ಒಟ್ಟು 1.10 ಕ್ಯೂಸೆಕ್ ನೀರನ್ನು ಕೃಷ್ಣಾ ನದಿಗೆ ಬಿಡಲಾಗುತ್ತಿದೆ. ಒಳಹರಿವಿನ ಪ್ರಮಾಣದಲ್ಲಿ ಮತ್ತಷ್ಟು ಏರಿಳಿತವಾಗುವ ಸಾಧ್ಯತೆ ಇರುವುದರಿಂದ ಜಲಾಶಯದ ನೀರಿನ ಮಟ್ಟ ಮತ್ತು ಒಳಹರಿವಿನ ಮೇಲೆ ಅಧಿಕಾರಿಗಳು ನಿರಂತರ ನಿಗಾ ವಹಿಸಿದ್ದಾರೆ.
ಆಲಮಟ್ಟಿ ಜಲಾಶಯದ ನೀರಿನ ಸಂಗ್ರಹ ಬಹುತೇಕ ಪೂರ್ಣಗೊಂಡಿರುವುದರಿಂದ ಮುಂಬರುವ ದಿನಗಳಲ್ಲಿ ಮಹಾರಾಷ್ಟ್ರದ ಜಲಾನಯನ ಪ್ರದೇಶದಲ್ಲಿ ಮಳೆಯ ಪ್ರಮಾಣ, ಕೃಷ್ಣಾ ನದಿಯ ಒಳಹರಿವು ಮತ್ತು ಜಲಾಶಯದ ನೀರಿನ ಮಟ್ಟವನ್ನು ಆಧರಿಸಿ ಹೊರಹರಿವಿನ ಪ್ರಮಾಣವನ್ನು ನಿಯಂತ್ರಿಸುವ ಸಾಧ್ಯತೆ ಇದೆ.