ಚಿಕ್ಕಮಗಳೂರುವಿದ್ಯಾರ್ಥಿನಿಯರು ಶಿಕ್ಷಣದ ಜತೆಗೆ ಉತ್ತಮ ಸಂಸ್ಕಾರ, ಸಂಸ್ಕೃತಿ ಹಾಗೂ ಶಿಸ್ತನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸ್ಪಷ್ಟ ಗುರಿ ಹೊಂದಿ ಏಕಾಗ್ರತೆಯಿಂದ ವಿದ್ಯಾಭ್ಯಾಸ ಮಾಡಿದಾಗ ಮಾತ್ರ ಭವಿಷ್ಯದಲ್ಲಿ ಉನ್ನತ ಸಾಧನೆ ಮಾಡಲು ಸಾಧ್ಯ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.
ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿನಿಲಯದ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುವಿದ್ಯಾರ್ಥಿನಿಯರು ಶಿಕ್ಷಣದ ಜತೆಗೆ ಉತ್ತಮ ಸಂಸ್ಕಾರ, ಸಂಸ್ಕೃತಿ ಹಾಗೂ ಶಿಸ್ತನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸ್ಪಷ್ಟ ಗುರಿ ಹೊಂದಿ ಏಕಾಗ್ರತೆಯಿಂದ ವಿದ್ಯಾಭ್ಯಾಸ ಮಾಡಿದಾಗ ಮಾತ್ರ ಭವಿಷ್ಯದಲ್ಲಿ ಉನ್ನತ ಸಾಧನೆ ಮಾಡಲು ಸಾಧ್ಯ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.ನಗರದಲ್ಲಿ ಸರ್ಕಾರ, ಜಿಲ್ಲಾಡಳಿತ, ಜಿಪಂ ಹಾಗೂ ಸಮಾಜ ಕಲ್ಯಾಣ ಇಲಾಖೆಯಿಂದ ನಿರ್ಮಿಸಲಾಗುತ್ತಿರುವ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿನಿಲಯದ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ಸುಮಾರು 30 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ವಿದ್ಯಾರ್ಥಿನಿಲಯದ ಹಳೆಯ ಕಟ್ಟಡ ಶಿಥಿಲ ಗೊಂಡ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರು ಹಾಗೂ ಅಧಿಕಾರಿಗಳ ಮನವಿ ಮೇರೆಗೆ ನೂತನ ಕಟ್ಟಡ ನಿರ್ಮಾಣಕ್ಕೆ ಸರ್ಕಾರ ₹7 ಕೋಟಿ ಅನುದಾನ ಮಂಜೂರು ಮಾಡಿದೆ. ಈ ಪೈಕಿ ₹5.19 ಕೋಟಿ ವೆಚ್ಚದ ಕಾಮಗಾರಿಗೆ ಟೆಂಡರ್ ಪ್ರಕ್ರಿಯೆ ಪೂರ್ಣ ಗೊಳಿಸಿಗುತ್ತಿಗೆ ನೀಡಲಾಗಿದೆ. ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅಂದಿನ ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ. ಮಹದೇವಪ್ಪ ಅವರ ಪ್ರಯತ್ನದಿಂದ ಯೋಜನೆಗೆ ಅನುಮೋದನೆ ದೊರೆತಿದೆ ಎಂದರು.ಶಿಕ್ಷಣ ಮತ್ತು ಆರೋಗ್ಯಕ್ಕೆ ಸರ್ಕಾರ ಆದ್ಯತೆ ನೀಡುತ್ತಿದ್ದು, ಬಡವರು, ದಲಿತರು ಹಾಗೂ ಹಿಂದುಳಿದ ವರ್ಗಗಳ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವ ಉದ್ದೇಶದಿಂದ ವಸತಿ ನಿಲಯಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಶಿಕ್ಷಣದಿಂದ ಮಾತ್ರ ಶೋಷಿತ ಸಮುದಾಯಗಳು ಸಮಾಜದ ಮುಖ್ಯವಾಹಿನಿಗೆ ಬರಲು ಸಾಧ್ಯ ಎಂಬುದು ಡಾ. ಬಿ.ಆರ್. ಅಂಬೇಡ್ಕರ್ ಆಶಯವಾಗಿತ್ತು. ವಿದ್ಯಾರ್ಥಿನಿಯರು ಉತ್ತಮ ಶಿಕ್ಷಣ ಪಡೆದು ಸಮಾಜದ ಸತ್ಪ್ರಜೆಗಳಾಗಬೇಕು ಎಂದು ಹೇಳಿದರು.ನೂತನ ಕಟ್ಟಡ ನಿರ್ಮಾಣದಲ್ಲಿ ಗುಣಮಟ್ಟಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ವಿದ್ಯಾರ್ಥಿನಿಯರನ್ನು ತಮ್ಮ ಮನೆ ಮಕ್ಕಳಂತೆ ಭಾವಿಸಿ ಅಧಿಕಾರಿಗಳು ಮತ್ತು ಗುತ್ತಿಗೆದಾರರು ಕಾಮಗಾರಿ ನಿರ್ವಹಿಸಬೇಕು. ಸೇವಾ ಮನೋಭಾವದಿಂದ ಕೆಲಸ ಮಾಡಿದಾಗ ಮಾತ್ರ ದೀರ್ಘಕಾಲ ಬಾಳಿಕೆ ಬರುವ ಸುಸಜ್ಜಿತ ಕಟ್ಟಡ ನಿರ್ಮಾಣ ಸಾಧ್ಯ ಎಂದರು.ವಿದ್ಯಾರ್ಥಿಗಳು ತಮ್ಮ ಗುರಿ ಬಗ್ಗೆ ಸ್ಪಷ್ಟತೆ ಹೊಂದಿರಬೇಕು. ಸ್ವಾಮಿ ವಿವೇಕಾನಂದರ ಆಶಯದಂತೆ ದೊಡ್ಡ ಕನಸು ಕಾಣ ಬೇಕು. ಮಹಾಭಾರತದಲ್ಲಿ ಅರ್ಜುನನಿಗೆ ಪಕ್ಷಿಯ ಕಣ್ಣು ಮಾತ್ರ ಕಾಣಿಸಿದಂತೆ ವಿದ್ಯಾರ್ಥಿಗಳು ತಮ್ಮ ಗುರಿಯತ್ತ ಏಕಾಗ್ರತೆ ಯಿಂದ ಸಾಗಬೇಕು. ಅಡೆತಡೆಗಳಿಗೆ ವಿಚಲಿತರಾಗದೆ ಸಾಧನೆಯತ್ತ ಗಮನಹರಿಸಬೇಕು ಎಂದು ಕಿವಿಮಾತು ಹೇಳಿದರು.ರಾಜ್ಯ ಪರಿಸರ ಮಾಲಿನ್ಯ ಮಾಪನ ಅಧ್ಯಕ್ಷ ಎ.ಎನ್. ಮಹೇಶ್ ಮಾತನಾಡಿ ಹಿಂದಿನ ವಿದ್ಯಾರ್ಥಿನಿಲಯದ ಕಟ್ಟಡ 25ರಿಂದ 30 ವರ್ಷಗಳಲ್ಲೇ ಶಿಥಿಲಗೊಂಡಿರುವುದು ಕಳಪೆ ಕಾಮಗಾರಿಗೆ ಸಾಕ್ಷಿ. ಹೊಸ ಕಟ್ಟಡ ನೂರಾರು ವರ್ಷಗಳ ಕಾಲ ಬಾಳಿಕೆ ಬರುವಂತೆ ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿ ನಡೆಸಬೇಕು ಎಂದು ಸೂಚಿಸಿದರು. ಸರ್ಕಾರ ₹7 ಕೋಟಿ ಅಂದಾಜು ವೆಚ್ಚದಲ್ಲಿ ಕಟ್ಟಡ ನಿರ್ಮಾಣಕ್ಕೆ ಮುಂದಾಗಿದ್ದು, ವಿದ್ಯಾರ್ಥಿನಿಯರು ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.ವಿಧಾನ ಪರಿಷತ್ ಸದಸ್ಯೆ ಗಾಯತ್ರಿ ಶಾಂತೇಗೌಡ ಮಾತನಾಡಿ ಸರ್ಕಾರಿ ವಸತಿ ನಿಲಯಗಳ ಪ್ರವೇಶದಲ್ಲಿ ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮಾತ್ರ ಆದ್ಯತೆ ನೀಡದೆ. ಶೈಕ್ಷಣಿಕವಾಗಿ ಹಿಂದುಳಿದಿರುವ ಮಕ್ಕಳಿಗೂ ಅವಕಾಶ ಕಲ್ಪಿಸಬೇಕು. ಶೇ.85ರಿಂದ 90 ಅಂಕ ಪಡೆದವರ ಜತೆಗೆ ಶೇ.45ರಿಂದ 60 ಅಂಕ ಪಡೆದ ವಿದ್ಯಾರ್ಥಿಗಳಿಗೂ ಉತ್ತಮ ಶಿಕ್ಷಣ ನೀಡಿ ಸಾಧನೆಗೆ ಪ್ರೋತ್ಸಾಹಿಸಬೇಕು ಎಂದು ಹೇಳಿದರು.ವಸತಿ ನಿಲಯದಲ್ಲಿ ಕಲಿಯುತ್ತಿರುವ ವಿದ್ಯಾರ್ಥಿನಿಯರು ತಂದೆ-ತಾಯಿಯರ ನಿರೀಕ್ಷೆ ಹಾಗೂ ನಂಬಿಕೆ ಉಳಿಸಿಕೊಳ್ಳಬೇಕು. ಶಿಸ್ತು ಮತ್ತು ಜವಾಬ್ದಾರಿಯಿಂದ ನಡೆದುಕೊಳ್ಳುವ ಜತೆಗೆ ವಸತಿ ನಿಲಯವನ್ನು ತಮ್ಮ ಮನೆಯೆಂಬ ಭಾವನೆಯಿಂದ ಸ್ವಚ್ಛ ವಾಗಿಟ್ಟುಕೊಳ್ಳಬೇಕು ಎಂದರು.ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಪಿ. ಮಂಜೇಗೌಡ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಶಿವಾನಂದಸ್ವಾಮಿ, ದೌರ್ಜನ್ಯ ನಿಯಂತ್ರಣ ಸಮಿತಿ ಸದಸ್ಯರಾದ ಹುಣಸೆಮಕ್ಕಿ ಲಕ್ಷ್ಮಣ, ರಮೇಶ್, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಎಚ್.ಡಿ. ರೇವಣ್ಣ ಸೇರಿದಂತೆ ವಿವಿಧ ಸಮಿತಿಗಳ ಸದಸ್ಯರು, ಅಧಿಕಾರಿಗಳು, ಗುತ್ತಿಗೆದಾರರು ಹಾಗೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.