ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜರುಗಿದ ಜಿಲ್ಲಾ ಕೌಶಲ ಮಿಷನ್ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇತ್ತೀಚಿನ ದಿನಮಾನಗಳಲ್ಲಿ ಕೌಶಲ್ಯಾಧಾರಿತ ಶಿಕ್ಷಣವನ್ನು ಹೊಂದಿದ ಅಭ್ಯರ್ಥಿಗಳಿಗೆ ಬೇಡಿಕೆ ಇರುವುದರಿಂದ ಜಿಲ್ಲೆಯ ವಿದ್ಯಾರ್ಥಿಗಳಿಗೆ ಈ ಸಂಬಂಧ ಹೆಚ್ಚಿನ ತಿಳಿವಳಿಕೆ ನೀಡುವ ಕೆಲಸ ಮಾಡಿರಿ ಎಂದರು.
ಮಹಿಳೆಯರಿಗೆ ಕೌಶಲವುಳ್ಳ ವಿವಿಧ ತರಬೇತಿಗಳನ್ನು ನೀಡಿದಲ್ಲಿ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಸಹಕಾರಿಯಾಗುತ್ತದೆ. ಜಿಲ್ಲೆಯಲ್ಲಿ ಹೆಚ್ಚಿನ ಮಟ್ಟದಲ್ಲಿ ಹೊಲಿಗೆ ತರಬೇತಿ ನೀಡಲಾಗುತ್ತಿದೆ. ಇತರೇ ಕೌಶಲ್ಯ ತರಬೇತಿಗಳನ್ನು ನೀಡಲು ಮುಂದಾಗಬೇಕು ಎಂದು ತಿಳಿಸಿದರು.ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಗುರುಪಾದಯ್ಯ ಹಿರೇಮಠ ಅವರು ಮಾತನಾಡಿ, ಜಿಲ್ಲೆಯಲ್ಲಿ ಸಕ್ಕರೆ, ಸಿಮೆಂಟ್, ಸೋಲಾರ್, ಗ್ರೈನೈಟ್, ನೇಕಾರಿಕೆಯಂತಹ ಕೈಗಾರಿಕೆಗಳಿವೆ. ಉದ್ಯಮ ಆಧಾರಿತ ಬೇಡಿಕೆಯನುಸಾರ ಅವಶ್ಯವಿರುವ ಕೌಶಲ ತರಬೇತಿಗಳನ್ನು ಜನ ಶಿಕ್ಷಣ ಸಂಸ್ಥೆ, ಆರ್ ಸೆಟಿ, ಜಿಟಿಟಿಸಿ ಹಾಗೂ ಐಟಿಐ ನಂತಹ ಸರಕಾರಿ ಸಂಸ್ಥೆಗಳು ಹಾಗೂ ಮುಖ್ಯಮಂತ್ರಿ ಕೌಶಲ್ಯ ಕರ್ನಾಟಕ ಯೋಜನೆಯಡಿ ಇಲಾಖೆಯಿಂದ ಮಾನ್ಯತೆ ಪಡೆದ ತರಬೇತಿ ಸಂಸ್ಥೆಗಳ ಮೂಲಕ ನೀಡಲಾಗುತ್ತಿದೆ ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಜಾನಕಿ ಕೆ.ಎಂ., ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ, ಅಪರ ಜಿಲ್ಲಾಧಿಕಾರಿ ಪರಶುರಾಮ ಶಿನ್ನಾಳಕರ ಸೇರಿದಂತೆ ಇತರೆ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.