)
ಕನ್ನಡಪ್ರಭ ವಾರ್ತೆ ಎಚ್.ಡಿ. ಕೋಟೆ
ಪುರಸಭೆ ಅಧಿಕಾರಿಗಳು, ಸಿಬ್ಬಂದಿ ಹಾಗೂ ಪೊಲೀಸ್ ಭದ್ರತೆಯಲ್ಲಿ ನಡೆದ ಕಾರ್ಯಾಚರಣೆ ವೇಳೆ ಹಲವು ಸ್ಥಳಗಳಲ್ಲಿ ಪುಟ್‌ಪಾತ್ ಅನ್ನು ಸಂಪೂರ್ಣವಾಗಿ ಸಾರ್ವಜನಿಕ ಬಳಕೆಗೆ ಮುಕ್ತಗೊಳಿಸಲಾಯಿತು. ಇದರಿಂದ ಕೆಲಕಾಲ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾದರೂ ಯಾವುದೇ ಅಹಿತಕರ ಘಟನೆ ಸಂಭವಿಸಲಿಲ್ಲ.
ಪುರಸಭೆ ಮುಖ್ಯಾಧಿಕಾರಿ ಸುರೇಶ್ ಮಾತನಾಡಿ, ಸುಪ್ರೀಂಕೋರ್ಟ್ ನಿರ್ದೇಶನದ ಅನ್ವಯ ಕಳೆದ ವಾರ ಮೊದಲ ಹಂತದ ಅತಿಕ್ರಮಣ ತೆರವು ಕಾರ್ಯಾಚರಣೆ ಕೈಗೊಳ್ಳಲಾಗಿತ್ತು. ಆ ಸಂದರ್ಭದಲ್ಲಿ ಬೀದಿಬದಿ ವ್ಯಾಪಾರಿಗಳು ಸ್ವಯಂಪ್ರೇರಿತವಾಗಿ ತಮ್ಮ ಅಂಗಡಿಗಳನ್ನು ತೆರವುಗೊಳಿಸಲು ಒಂದು ವಾರದ ಕಾಲಾವಕಾಶ ಕೋರಿದ್ದರು. ಪುರಸಭೆಯಿಂದ ಗಡುವು ನೀಡಲಾಗಿತ್ತು. ಆದರೆ ಗಡುವು ಮುಕ್ತಾಯಗೊಂಡರೂ ಕೆಲವು ಅಂಗಡಿಗಳು ತೆರವಾಗದ ಹಿನ್ನೆಲೆ ಎರಡನೇ ಹಂತದ ಕಾರ್ಯಾಚರಣೆ ಆರಂಭಿಸಿ ಉಳಿದ ಅತಿಕ್ರಮಣಗಳನ್ನು ತೆರವುಗೊಳಿಸಲಾಗುತ್ತಿದೆ ಎಂದು ತಿಳಿಸಿದರು.ಅತಿಕ್ರಮಣ ತೆರವುಗೊಳಿಸಿದ ವ್ಯಾಪಾರಿಗಳ ಜೀವನೋಪಾಯಕ್ಕೆ ತೊಂದರೆಯಾಗದಂತೆ ಪಟ್ಟಣದ ಹೃದಯಭಾಗದಲ್ಲಿರುವ ಸಂತೆ ಮೈದಾನ ಹಾಗೂ ಇಂದಿರಾ ಕ್ಯಾಂಟೀನ್ ಹಿಂಭಾಗದಲ್ಲಿ ಪರ್ಯಾಯವಾಗಿ ಅಂಗಡಿಗಳನ್ನು ತೆರೆಯಲು ಅವಕಾಶ ಕಲ್ಪಿಸಲಾಗಿದೆ. ಅಲ್ಲಿ ಕುಡಿಯುವ ನೀರು, ವಿದ್ಯುತ್ ಸೇರಿದಂತೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸಲಾಗಿದೆ. ವ್ಯಾಪಾರಿಗಳು ಈ ವ್ಯವಸ್ಥೆಯನ್ನು ಬಳಸಿಕೊಳ್ಳಬೇಕು ಎಂದು ಅವರು ಮನವಿ ಮಾಡಿದರು.