ಅಂಬೇಡ್ಕರ್ ಸಾಧನೆ ಎಲ್ಲರಿಗೂ ಪ್ರೇರಣೆ: ಜಿಲ್ಲಾಧಿಕಾರಿ

KannadaprabhaNewsNetwork | Published : Apr 15, 2024 1:19 AM

ಸಾರಾಂಶ

ಬಾಬಾ ಸಾಹೇಬರ ತತ್ವಾದರ್ಶಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಮು ಎಂದು ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ ಹೇಳಿದರು. ರಾಯಚೂರಿನ ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ಡಾ.ಬಿ.ಆರ್ ಅಂಬೇಡ್ಕರ್ ಅವರ 133ನೇ ಜಯಂತಿ ಕಾರ್ಯಕ್ರಮವನ್ನು ಡಿಸಿ ಎಲ್.ಚಂದ್ರಶೇಖರ ನಾಯಕ ಉದ್ಘಾಟಿಸಿದರು.

ಕನ್ನಡಪ್ರಭ ವಾರ್ತೆ ರಾಯಚೂರು

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಸಾಧನೆ ಎಲ್ಲರಿಗೂ ಪ್ರೇರಣೆಯಾಗಿದೆ ಎಂದು ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ ಅಭಿಪ್ರಾಯ ವ್ಯಕ್ತಪಡಿಸಿದರು.

ಸ್ಥಳೀಯ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಪಂ, ನಗರಸಭೆ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ಡಾ.ಬಿ.ಆರ್ ಅಂಬೇಡ್ಕರ್ ಅವರ 133ನೇ ಜಯಂತಿ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಡಾ.ಬಿ.ಆರ್.ಅಂಬೇಡ್ಕರ್ ಅವರು ಹೇರಿದ ಸಾಧನೆ ಶಿಖರವನ್ನು ಇತರರು ತಲುಪುವುದು ಅಸಾಧ್ಯ. ಅಂತಹ ಮಹಾನ್ ವ್ಯಕ್ತಿ ಹಾಕಿಕೊಟ್ಟ ಮಾರ್ಗದಲ್ಲಿ ಪ್ರತಿಯೊಬ್ಬರು ನಡೆಯುವ ಮೂಲಕ ಉತ್ತಮ ಜೀವನ ರೂಪಿಸಿಕೊಳ್ಳಬೇಕು ಎಂದರು.

ಡಾ.ಬಿ.ಆರ್ ಅಂಬೇಡ್ಕರ್ ಅವರು ದೇಶದಲ್ಲಿ ಸಮಾನತೆಯನ್ನು ಸಾರಿ, ಸಮ ಸಮಾಜವನ್ನು ನಿರ್ಮಾಣ ಮಾಡುವಲ್ಲಿ ಸಾಕಷ್ಟು ಶ್ರಮ ಪಟ್ಟಿದ್ದಾರೆ. ಜೊತೆಗೆ ಸಂವಿಧಾನವನ್ನು ರಚನೆ ಮಾಡುವಲ್ಲಿ ಅವರ ಪಾತ್ರ ಅಪಾರವಾಗಿದ್ದು, ಅಂತಹ ಮಹಾನ್ ವ್ಯಕ್ತಿಗಳ ತತ್ವಾದರ್ಶಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು.

ಸಮಾರಂಭದಲ್ಲಿ ಗುಲ್ಬರ್ಗದ ಕನ್ನಡ ಅಧ್ಯಯನ ಸಂಸ್ಥೆ ನಿರ್ದೇಶಕ ಪ್ರೊ.ಎಚ್.ಟಿ.ಪೋತೆ ಅವರು ವಿಶೇಷ ಉಪನ್ಯಾಸ ನೀಡಿದರು.

ಈ ಸಂದರ್ಭದಲ್ಲಿ ಜಿಪಂ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಪಾಂಡ್ವೆ ರಾಹುಲ್ ತುಕಾರಾಮ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್.ಬಿ, ನಗರಸಭೆ ಪೌರಾಯುಕ್ತ ಜಿ.ಎನ್ ಚಲಪತಿ, ಬೀದರ ಬುದ್ದ ವಿಹಾರದ ಪೂಜ್ಯವಂತೆ, ಧಮ್ಮ ದೀಪ ದೇವನಾಂಪ್ರೀಯ ಸ್ವಾಮೀಜಿ, ವಿವಿಧ ಇಲಾಖೆ ಅಧಿಕಾರಿ, ಸಿಬ್ಬಂದಿ ಸೇರಿ ಸಮಾಜದ ಮುಖಂಡರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.ಗಣ್ಯರಿಂದ ಪುತ್ಥಳಿಗೆ ಮಾಲಾರ್ಪಣೆ, ಪೂಜೆ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ 133ನೇ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ಜಯಂತಿ ಹಿನ್ನೆಲೆಯಲ್ಲಿ ರಾಯಚೂರು ನಗರದ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿರುವ ಅವರ ಪುತ್ಥಳಿಗೆ ಗಣ್ಯರು ಮಾಲಾರ್ಪಣೆ ಮಾಡಿ, ಪೂಜೆ ಸಲ್ಲಿಸಿದರು.

ಅಂಬೇಡ್ಕರ್ ಪುತ್ಥಳಿಗೆ ಬಿಜೆಪಿ ಹಾಲಿ ಸಂಸದ ರಾಜಾ ಅಮರೇಶ್ವರ ನಾಯಕ, ಶಾಸಕ ಡಾ.ಶಿವರಾಜ ಪಾಟೀಲ್, ಕಾಂಗ್ರೆಸ್ನ ಜಿ.ಕುಮಾರ ನಾಯಕ, ಡಿಸಿ ಎಲ್.ಚಂದ್ರಶೇಖರ ನಾಯಕ, ಜಿಪಂ ಸಿಇಒ ಪಾಂಡ್ವೆ ರಾಹುಲ್ ತುಕಾರಾಮ ಹಾಗೂ ಎಸ್ಪಿ ನಿಖಿಲ್.ಬಿ ಸೇರಿ ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ಸಂಘಟನೆಗಳ ನಾಯಕರು ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿದರು. ಇದಕ್ಕೂ ಮೊದಲು ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು.

Share this article