೫ಕ್ಕೆ ಅಂಬೇಡ್ಕರ್ ಪ್ರತಿಮೆ ಅನಾವರಣ

KannadaprabhaNewsNetwork |  
Published : Jul 03, 2026, 01:30 AM IST
1 | Kannada Prabha

ಸಾರಾಂಶ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನದ ಆವರಣದಲ್ಲಿ ಸಂವಿಧಾನ ಶಿಲ್ಪಿ, ಭಾರತರತ್ನ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಜುಲೈ ೫ರಂದು ಅನಾವರಣಗೊಳಿಸಲಾಗುವುದು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನದ ಆವರಣದಲ್ಲಿ ಸಂವಿಧಾನ ಶಿಲ್ಪಿ, ಭಾರತರತ್ನ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಜುಲೈ ೫ರಂದು ಅನಾವರಣಗೊಳಿಸಲಾಗುವುದು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾಡಳಿತ ಭವನದ ಆವರಣದಲ್ಲಿ ೧೪ ಅಡಿ ಎತ್ತರದ ಅಂಬೇಡ್ಕರ್‌ ಪ್ರತಿಮೆಯನ್ನು ೧.೩೫ ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಪ್ರತಿಮೆ ಅನಾವರಣ ಜಿಲ್ಲೆಯ ಜನತೆಯ ಬಹುದಿನಗಳ ಬೇಡಿಕೆಯಾಗಿದೆ ಎಂದರು.

ಅಂದು ಬೆಳಗ್ಗೆ ೧೧ ಗಂಟೆಗೆ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಹಾಗೂ ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಅಂಬೇಡ್ಕರ್ ಪ್ರತಿಮೆ ಅನಾವರಣ ಮಾಡಲಿದ್ದಾರೆ. ಬಳಿಕ ತಾಲೂಕಿನ ಆಲೂರುದುದ್ದನಹಳ್ಳಿ ಬಳಿ ನಡೆಯುವ ವೇದಿಕೆ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉದ್ಘಾಟಿಸುವರು. ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಸಂಸದರು, ಸಚಿವರು, ಜಿಲ್ಲೆಯ ಎಲ್ಲಾ ಶಾಸಕರು, ಚುನಾಯಿತ ಜನಪ್ರತಿನಿಧಿಗಳು, ಎಲ್ಲಾ ನಾಮನಿರ್ದೇಶಿತ ಸದಸ್ಯರು, ಎಲ್ಲಾ ನಿಗಮ/ಮಂಡಳಿಗಳ ಅಧ್ಯಕ್ಷರು ಮತ್ತು ಸದಸ್ಯರು, ಎಲ್ಲಾ ಸಂಘ-ಸಂಸ್ಥೆಗಳ ಮುಖಂಡರು ಹಾಗೂ ಸಾರ್ವಜನಿಕರು ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ ಎಂದರು.

ಜಿಲ್ಲೆಯ ಪ್ರತಿ ಗ್ರಾಪಂನಿಂದ ಪಲ್ಲಕ್ಕಿ:

ಜಿಲ್ಲೆಯ ನಾಲ್ಕು ತಾಲೂಕುಗಳ ೧೦೨ ಗ್ರಾಪಂಗಳಿಂದ ಡಾ. ಅಂಬೇಡ್ಕರ್ ಅವರ ಭಾವಚಿತ್ರ ಇರುವ ಪಲ್ಲಕ್ಕಿಯೊಂದಿಗೆ ವಿವಿಧ ಸಾಂಸ್ಕೃತಿಕ ಕಲಾ ತಂಡಗಳು ಭಾಗವಹಿಸಲಿವೆ. ಜಿಲ್ಲೆಯ ಎಲ್ಲಾ ಕನ್ನಡಪರ, ದಲಿತಪರ, ಪ್ರಗತಿಪರ ಸಂಘಟನೆಗಳ ಮುಖಂಡರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಸಚಿವರು ಮನವಿ ಮಾಡಿದರು.

ಕಾರ್ಯಕ್ರಮಕ್ಕೆ ಅಗತ್ಯ ವೇದಿಕೆ ಸಿದ್ಧತೆ, ಆಹ್ವಾನ ಪತ್ರಿಕೆ ಮುದ್ರಣ, ಗಣ್ಯರಿಗೆ ಆಹ್ವಾನ, ಜನರ ಕರೆತರುವಿಕೆ, ವಾಹನಗಳ ಪಾರ್ಕಿಂಗ್, ಭದ್ರತೆ, ಕುಡಿಯುವ ನೀರು-ಉಪಾಹಾರ ಹಾಗೂ ಇನ್ನಿತರ ಸಿದ್ಧತೆ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿ ಮೇಲುಸ್ತುವಾರಿ ವಹಿಸಲು ಡಿಸಿ, ಸಿಇಒಗೆ ಸೂಚಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಡಾ. ಅನುರಾಧ, ಸಿಇಒ ಡಾ ವಾಸಂತಿ ಅಮರ್, ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ರಾಜಣ್ಣ, ಬಯಪ ಅಧ್ಯಕ್ಷ ಶಾಂತ್ ಕುಮಾರ್, ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು ಉಪಸ್ಥಿತರಿದ್ದರು.

(ಫೋಟೊ ಕ್ಯಾಫ್ಷನ್‌)

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿ ಸಚಿವ ಕೆ.ಎಚ್.ಮುನಿಯಪ್ಪ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಜಿಲ್ಲಾಧಿಕಾರಿ ಡಾ. ಅನುರಾಧ, ಸಿಇಒ ಡಾ ವಾಸಂತಿ ಅಮರ್ ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮನೆಗೊಂದು ಗ್ರಂಥಾಲಯ ಅನುಷ್ಠಾನ ಅರ್ಥಪೂರ್ಣವಾದದ್ದು: ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ. ಮಾನಸ
ರೈತರ ನೆರವಿಗೆ ಕೇಂದ್ರ, ರಾಜ್ಯ ಸರ್ಕಾರಗಳು ಧಾವಿಸಲಿ: ಶಾಸಕ ಸಿಎನ್ ಬಾಲಕೃಷ್ಣ