ಮಾದಪ್ಪನ ಬೆಟ್ಟದ ಹಾಡಿ ಜನರ ಸೇವೆಗೆ ಆ್ಯಂಬುಲೆನ್ಸ್‌

KannadaprabhaNewsNetwork | Published : Apr 19, 2025 12:40 AM

ಸಾರಾಂಶ

ಹನೂರು ತಾಲೂಕಿನ ಶ್ರೀ ಕ್ಷೇತ್ರ ಮಲೆಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಖರೀದಿಸಿರುವ ವಿಶೇಷ ಆ್ಯಂಬುಲೆನ್ಸ್‌ ಅನ್ನು ಆರೋಗ್ಯ ಇಲಾಖೆಗೆ ಹಸ್ತಾಂತರಿಸಲಾಯಿತು.

ಕನ್ನಡಪ್ರಭ ವಾರ್ತೆ ಹನೂರು

ತಾಲೂಕಿನ ಮಲೆಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾಡಿಗಳ ಜನರಿಗೆ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಶ್ರೀ ಮಲೆಮಹದೇಶ್ವರ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಉಚಿತ ಆಂಬ್ಯುಲೆನ್ಸ್ ಸೇವೆ ಪ್ರಾರಂಭಿಸಲಾಗಿದೆ ಎಂದು ಪ್ರಾಧಿಕಾರದ ಕಾರ್ಯದರ್ಶಿ ಎ.ಈ. ರಘು ತಿಳಿಸಿದರು.

ಶ್ರೀ ಕ್ಷೇತ್ರ ಮಲೆಮಹದೇಶ್ವರ ಬೆಟ್ಟದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 18 ಗ್ರಾಮಗಳಿದ್ದು ಬೆಟ್ಟ ಗುಡ್ಡಗಳಿಂದ ಅರಣ್ಯದ ಮಧ್ಯಭಾಗದಲ್ಲಿ ಇರುವುದರಿಂದ ಸಮರ್ಪಕ ರಸ್ತೆ ಇಲ್ಲದೇ ಇರುವುದರಿಂದ ಸಾರಿಗೆ ವ್ಯವಸ್ಥೆ ಇಲ್ಲದೆ ಇಲ್ಲಿನ ನಿವಾಸಿಗಳು ತೊಂದರೆ ಅನುಭವಿಸುತ್ತಿರುವುದರ ಬಗ್ಗೆ ಶಾಸಕ ಎಂ.ಆರ್.ಮಂಜುನಾಥ್ ಮಾರ್ಗದರ್ಶನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ವೆಂಕಟೇಶ್ ಗಮನಕ್ಕೆ ತಂದು ಪ್ರಾಧಿಕಾರದ ಅನುಮೋದನೆಯೊಂದಿಗೆ ₹18.5 ಲಕ್ಷ ವೆಚ್ಚದಲ್ಲಿ ವಿಶೇಷ ವ್ಯವಸ್ಥೆಯುಳ್ಳ ಆ್ಯಂಬುಲೆನ್ಸ್‌ ಸೇವೆ ಪ್ರಾರಂಭಿಸಲಾಗಿದೆ ಎಂದರು.

ಕಳೆದ 1 ವರ್ಷಗಳಿಂದ ಮಲೆಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಈ ಭಾಗದಲ್ಲಿ ಆರೋಗ್ಯ ಸಮಸ್ಯೆಯಾದರೆ ಡೋಲಿಯ ಮುಖಾಂತರ ರೋಗಿಯನ್ನು ಆಸ್ಪತ್ರೆಗೆ ಕರೆ ತರಬೇಕಾಗಿತ್ತು. ಈ ಹಿನ್ನೆಲೆ ಬಹಳ ವರ್ಷಗಳ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು, ಸಚಿವರು, ಶಾಸಕರು, ಜಿಲ್ಲಾಧಿಕಾರಿಗಳ ಮಾರ್ಗದರ್ಶನದಲ್ಲಿ ಆ್ಯಂಬುಲೆನ್ಸ್‌ ಸೇವೆ ಒದಗಿಸಿ ಕೊಟ್ಟಿದ್ದೇವೆ. ಜನರು ಮತ್ತು ಮಾದಪ್ಪನ ಸೇವೆ ಮಾಡುವುದು ನಮ್ಮ ಪುಣ್ಯದ ಕೆಲಸವಾಗಿದೆ. ಇದು ಉಚಿತ ಸೇವೆಯಾಗಿದ್ದು ಚಾಲಕ ಹಾಗೂ ವಾಹನದ ನಿರ್ವಹಣೆಯನ್ನು ಪ್ರಾಧಿಕಾರದ ವತಿಯಿಂದಲೇ ಮಾಡಲಾಗುವುದು ಎಂದರು.

ಆ್ಯಂಬುಲೆನ್ಸ್‌ ವಾಹನವನ್ನು ಆರೋಗ್ಯ ಇಲಾಖೆಗೆ ಹಸ್ತಾಂತರ ಮಾಡಲಾಗಿದೆ. ರೋಗಿಗಳನ್ನು ಕರೆತರಲು ತಜ್ಞ ವೈದ್ಯಕೀಯ ಸಿಬ್ಬಂದಿ ಅವಶ್ಯಕತೆ ಇರುವುದರಿಂದ ಆರೋಗ್ಯ ಇಲಾಖೆಯು ಇದರ ಜವಾಬ್ದಾರಿ ವಹಿಸಿಕೊಳ್ಳಲಿದೆ ಎಂದರು.

ಶಾಸಕರಿಂದ ಹಸ್ತಾಂತರ:

ಮಲೆಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಖರೀದಿಸಿರುವ ವಿಶೇಷ ಆ್ಯಂಬುಲೆನ್ಸ್ ವಾಹನವನ್ನು ಶಾಸಕ ಎಂಆರ್ ಮಂಜುನಾಥ್, ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾನಾಗ್ ಸಮ್ಮುಖದಲ್ಲಿ ಆರೋಗ್ಯ ಇಲಾಖೆಗೆ ಹಸ್ತಾಂತರಿಸಲಾಯಿತು.

ಶಾಸಕ ಎಂ.ಆರ್. ಮಂಜುನಾಥ್ ಮಾತನಾಡಿ, ಮಲೆಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಕುಗ್ರಾಮಗಳ ಜನರಿಗೆ ಆರೋಗ್ಯ ಸೇವೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಪ್ರಾಧಿಕಾರದ ವತಿಯಿಂದ ಆ್ಯಂಬುಲೆನ್ಸ್ ವ್ಯವಸ್ಥೆ ಮಾಡಲಾಗಿದೆ. ಕಾಡಂಚಿನ ಗ್ರಾಮಗಳ ನಿವಾಸಿಗಳು ಆರೋಗ್ಯ ಸಮಸ್ಯೆ ಕಂಡು ಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿದರೆ ತಕ್ಷಣ ನೀವಿರುವ ಸ್ಥಳಕ್ಕೆ ಬಂದು ಚಿಕಿತ್ಸೆ ಕೊಡಿಸಲು ಕರೆದೊಯ್ಯುತ್ತಾರೆ. ಈ ನಿಟ್ಟಿನಲ್ಲಿ ಕಾಡಂಚಿನ ಗ್ರಾಮಗಳ ನಿವಾಸಿಗಳು ಆರೋಗ್ಯ ಸೇವೆಗೆ ತುರ್ತು ವಾಹನವನ್ನು ಸದ್ಬಳಕೆ ಮಾಡಿಕೊಳ್ಳುವಂತೆ ತಿಳಿಸಿದರು. ಈ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಟಿ ಕವಿತಾ, ಪ್ರಾಧಿಕಾರದ ಸಿಬ್ಬಂದಿ ವರ್ಗದವರಿದ್ದರು.

Share this article