ಗದಗ: ಸಂತ ಕವಿ ಸರ್ವಜ್ಞರ ವಿಚಾರಧಾರೆಗಳನ್ನು ಪ್ರತಿಯೊಬ್ಬರೂ ಬದುಕಿನಲ್ಲಿ ಅಳವಡಿಸಿಕೊಂಡು ಸಮಾಜ ಸುಧಾರಣೆಗೆ ಶ್ರಮಿಸಬೇಕೆಂದು ಅಪರ ಜಿಲ್ಲಾಧಿಕಾರಿ ದುರಗೇಶ ಕೆ.ಆರ್. ತಿಳಿಸಿದರು.ನಗರದ ಜಿಲ್ಲಾಡಳಿತ ಭವನದ ಅಡಿಟೋರಿಯಂ ಹಾಲ್‌ನಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಜರುಗಿದ ಸಂತ ಕವಿ ಸರ್ವಜ್ಞ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಪ್ರತಿಯೊಬ್ಬರೂ ಕವಿ ಸರ್ವಜ್ಞನ ವಚನಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸಮಾಜದಲ್ಲಿ ಅವರ ಆದರ್ಶಗಳನ್ನು ಪಾಲಿಸಬೇಕು. ಮಕ್ಕಳಿಗೆ ಸರ್ವಜ್ಞ ಅವರ ವಚನಗಳು ಮತ್ತು ಸಂಸ್ಕೃತಿ ಮತ್ತು ಮೌಲ್ಯಗಳ ಬಗ್ಗೆ ಅರಿವು ಮೂಡಿಸುವ ಕೆಲಸವಾಗಬೇಕು. ಸರ್ವಜ್ಞ ಅವರು ತಮ್ಮ ವಚನಗಳ ಮೂಲಕ ಸಮಾಜದಲ್ಲಿನ ಅಂಕುಡೊಂಕು, ಮೂಢನಂಬಿಕೆ ಹೋಗಲಾಡಿಸಿ ಲೋಕ ಕಲ್ಯಾಣಕ್ಕೆ ಶ್ರಮಿಸಿದವರಾಗಿದ್ದಾರೆ. ಪಾಲಕರು ತಮ್ಮ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಸಮಾಜದಲ್ಲಿ ಉನ್ನತ ಸ್ಥಾನ ಪಡೆಯಲು ಶ್ರಮಿಸಬೇಕು ಎಂದರು.
ಈ ಸಂದರ್ಭದಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಮುದಾಯದ ಸಾಧಕರನ್ನು ಸನ್ಮಾನಿಸಲಾಯಿತು.
ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ್ ಬಬರ್ಚಿ, ವಿ.ಆರ್. ಕುಂಬಾರ, ಮುರಿಗೆಪ್ಪ ಕೇರಿ, ಯಲ್ಲಪ್ಪ ಕುಂಬಾರ, ನಿಂಗಪ್ಪ ಕುಂಬಾರ, ಶರಣಮ್ಮ, ಈಶ್ವರಪ್ಪ ಕುಂಬಾರ ಸೇರಿದಂತೆ ಸಮಾಜದ ಮುಖಂಡರು, ಗಣ್ಯರು, ಮಹಿಳೆಯರು ಇದ್ದರು. ವೀರಣ್ಣ ಅಂಗಡಿ ಹಾಗೂ ಸಂಗಡಿಗರು ನಾಡಗೀತೆ ಪ್ರಸ್ತುತಪಡಿಸಿದರು.