ಅಂಗನವಾಡಿ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ ವಾಪಸ್‌

KannadaprabhaNewsNetwork |  
Published : Jun 26, 2024, 12:44 AM IST
Anganwadi | Kannada Prabha

ಸಾರಾಂಶ

ಶಾಲಾಪೂರ್ವ ಶಿಕ್ಷಣ ಸೇರಿದಂತೆ ವಿವಿಧ ಬೇಡಿಕೆಗಳ ಬಗ್ಗೆ ಚರ್ಚಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು ವಿಶೇಷ ಸಭೆ ಕರೆಯುವುದಾಗಿ ಭರವಸೆ ನೀಡಿದ ಹಿನ್ನೆಲೆಯಲ್ಲಿ ಎರಡು ದಿನದಿಂದ ನಡೆಸುತ್ತಿದ್ದ ಅಹೋರಾತ್ರಿ ಧರಣಿಯನ್ನು ಅಂಗನವಾಡಿ ಕಾರ್ಯಕರ್ತೆಯರು ವಾಪಸ್‌ ಪಡೆದಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಶಾಲಾಪೂರ್ವ ಶಿಕ್ಷಣ ಸೇರಿದಂತೆ ವಿವಿಧ ಬೇಡಿಕೆಗಳ ಬಗ್ಗೆ ಚರ್ಚಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು ವಿಶೇಷ ಸಭೆ ಕರೆಯುವುದಾಗಿ ಭರವಸೆ ನೀಡಿದ ಹಿನ್ನೆಲೆಯಲ್ಲಿ ಎರಡು ದಿನದಿಂದ ನಡೆಸುತ್ತಿದ್ದ ಅಹೋರಾತ್ರಿ ಧರಣಿಯನ್ನು ಅಂಗನವಾಡಿ ಕಾರ್ಯಕರ್ತೆಯರು ವಾಪಸ್‌ ಪಡೆದಿದ್ದಾರೆ.

ಮಂಗಳವಾರ ರಾತ್ರಿ ಧರಣಿ ನಡೆಯುತ್ತಿದ್ದ ಸ್ವಾತಂತ್ರ್ಯ ಉದ್ಯಾನವನಕ್ಕೆ ಆಗಮಿಸಿದ ಸಚಿವರ ವಿಶೇಷ ಕರ್ತವ್ಯಾಧಿಕಾರಿ ನಿಶ್ಚಲ್‌ ಅವರು, ಅನಾರೋಗ್ಯದ ನಿಮಿತ್ತ ಸಚಿವರು ಆಗಮಿಸಲು ಸಾಧ್ಯವಾಗಿಲ್ಲ. ಕಲ್ಯಾಣ ಕರ್ನಾಟಕ ಭಾಗ ಸೇರಿದಂತೆ ರಾಜ್ಯಾದ್ಯಂತ ಯಾವ ಸರ್ಕಾರಿ ಶಾಲೆಗಳಲ್ಲೂ ಶಾಲಾಪೂರ್ವ ಶಿಕ್ಷಣ ಆರಂಭಿಸಬಾರದು ಎಂಬ ನಿಮ್ಮ ಬೇಡಿಕೆಯ ಬಗ್ಗೆ ಚರ್ಚಿಸಲು ಜೂ.30 ರಂದು ಸಚಿವರು ವಿಶೇಷ ಸಭೆ ಆಯೋಜಿಸುವುದಾಗಿ ತಿಳಿಸಿದ್ದಾರೆ ಎಂದು ಭರವಸೆ ನೀಡಿದ್ದರಿಂದ ಪ್ರತಿಭಟನೆ ಹಿಂಪಡೆಯಲಾಯಿತು.

ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್‌ ಪ್ರಧಾನ ಕಾರ್ಯದರ್ಶಿ ಎಂ.ಜಯಮ್ಮ, ಶಾಲಾಪೂರ್ವ ಶಿಕ್ಷಣದ ಬಗ್ಗೆ ಜೂ.27 ರಂದು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗುವುದು. ಜೂ.30 ರಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಅವರು ಸಹ ಸಭೆ ಕರೆದಿರುವುದರಿಂದ ಹೋರಾಟವನ್ನು ಹಿಂಪಡೆಯಲಾಗುತ್ತಿದೆ.ಇನ್ನುಳಿದ ಬೇಡಿಕೆಗಳ ಬಗ್ಗೆ ಮುಂದಿನ ದಿನಗಳಲ್ಲಿ ತೀರ್ಮಾನಿಸಲಾಗುವುದು ಎಂದರು.

ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ-ಯುಕೆಜಿ ಆರಂಭಿಸಬಾರದು ಎಂದು ಆಗ್ರಹಿಸಿ ಎಐಟಿಯುಸಿ ನೇತೃತ್ವದ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್‌ ಆಶ್ರಯದಲ್ಲಿ ಜೂ.24 ರಿಂದ ಬೆಂಗಳೂರಿನಲ್ಲಿ ಪ್ರತಿಭಟನೆ ಆರಂಭಿಸಲಾಗಿತ್ತು. ಈ ಸಂಬಂಧ ಲಕ್ಷ್ಮಿ ಹೆಬ್ಬಾಳ್ಕರ್‌ ಅವರು ಯಾರನ್ನೂ ಕೆಲಸದಿಂದ ತೆಗೆಯುವುದಿಲ್ಲ. ಅಂಗನವಾಡಿಗಳನ್ನು ಉನ್ನತೀಕರಿಸಲಾಗುವುದು. ಕಲ್ಯಾಣ ಕರ್ನಾಟಕವನ್ನು ಹೊರತುಪಡಿಸಿದರೆ ಉಳಿದ ಜಿಲ್ಲೆಗಳಲ್ಲಿ ಶಾಲಾಪೂರ್ವ ಶಿಕ್ಷಣವು ಅಂಗನವಾಡಿಗಳಲ್ಲೇ ಮುಂದುವರಿಯಲಿದೆ ಎಂದು ಸರ್ಕಾರದ ನಿರ್ಧಾರ ಪ್ರಕಟಿಸಿದ್ದರು.

ಆದರೆ, ಕಲ್ಯಾಣ ಕರ್ನಾಟಕ ಭಾಗಕ್ಕೆ ಮಾತ್ರ ಸರ್ಕಾರ ಏಕೆ ಈ ರೀತಿ ವಿಶೇಷ ಅಕ್ಕರೆ ತೋರುತ್ತಿದೆ. ರಾಜ್ಯಾದ್ಯಂತ ಏಕರೂಪ ಶಿಕ್ಷಣ ಪದ್ಧತಿ ಇರಬೇಕು ಎಂದು ಆಗ್ರಹಿಸಿ ಕಾರ್ಯಕರ್ತೆಯರು ಹೋರಾಟ ಮುಂದುವರೆಸಿದ್ದರು.

PREV

Recommended Stories

ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಎಸ್ಸೆಸ್ಸೆಲ್ಸಿ- ಪಿಯು : ಈ ವರ್ಷವೂ 3 ಪರೀಕ್ಷೆ ಉದ್ದೇಶ ಫೇಲ್‌