ಅಂಗನವಾಡಿ ಕಾರ್ಯಕರ್ತೆಯರಿಂದ ಆಗಸ್ಟ್‌ 25ರಂದು ಪ್ರತಿಭಟನೆ

KannadaprabhaNewsNetwork |  
Published : Aug 23, 2026, 02:15 AM IST
ಸಸಸಸ | Kannada Prabha

ಸಾರಾಂಶ

ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಶನ್ (ಎಐಟಿಯುಸಿ) ವತಿಯಿಂದ ಆ. 25ರಂದು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಎಐಟಿಯುಸಿ ಮುಖಂಡ ಹನುಮಂತಪ್ಪ ಕಬ್ಬಾರ ಹೇಳಿದರು.

ಹಾವೇರಿ: ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಶನ್ (ಎಐಟಿಯುಸಿ) ವತಿಯಿಂದ ಆ. 25ರಂದು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಎಐಟಿಯುಸಿ ಮುಖಂಡ ಹನುಮಂತಪ್ಪ ಕಬ್ಬಾರ ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಹಲವು ವರ್ಷಗಳಿಂದ ವಿವಿಧ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈ ಕುರಿತು ಇತ್ತೀಚೆಗೆ ನಡೆದ ರಾಜ್ಯ ಸಮಿತಿಯ ಸಭೆಯಲ್ಲಿ ಚರ್ಚಿಸಿ, ಬೇಡಿಕೆಗಳ ಈಡೇರಿಕೆಗೆ ಹೋರಾಟ ರೂಪಿಸಲು ತೀರ್ಮಾನಿಸಲಾಗಿದೆ. ಎರಡು-ಮೂರು ತಿಂಗಳಿಂದ ಬಾಕಿ ಇರುವ ಗೌರವಧನವನ್ನು ಕೂಡಲೇ ಬಿಡುಗಡೆ ಮಾಡಬೇಕು. ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಕನಿಷ್ಠ ವೇತನ ಜಾರಿಗೊಳಿಸಬೇಕು. 11ನೇ ವೇತನ ಆಯೋಗದ ಶಿಫಾರಸು ಹಾಗೂ ಗ್ರಾಚ್ಯುಟಿ ಸೇರಿದಂತೆ ಬಾಕಿ ಸೌಲಭ್ಯಗಳನ್ನು ಜಾರಿಗೊಳಿಸಬೇಕು. ಆರನೇ ಗ್ಯಾರಂಟಿ ಯೋಜನೆ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.

ಎಐಟಿಸಿಯು ಅಧ್ಯಕ್ಷರಾದ ಹನುಮಂತಪ್ಪ ಅಗಸಿಬಾಗಿಲು ಮಾತನಾಡಿ, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು. ಆಗಸ್ಟ್ 25ರಂದು ನಡೆಯುವ ಪ್ರತಿಭಟನೆಯಲ್ಲಿ ಜಿಲ್ಲೆಯ ಎಲ್ಲ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಹೋರಾಟವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ಎಐಟಿಯುಸಿ ಅಂಗನವಾಡಿ ಫೆಡರೇಶನ್ ಪ್ರಧಾನ ಕಾರ್ಯದರ್ಶಿ ಸುನಂದಮ್ಮ ರೇವಣಕರ ಮಾತನಾಡಿ, ಅಂಗನವಾಡಿ ಕೆಲಸಕ್ಕೆ ಸಂಬಂಧಿಸದ ಎಸ್‌ಐಆರ್ ಸಮೀಕ್ಷೆ, ಜಾತಿ ಪ್ರಮಾಣಪತ್ರ ವಿತರಣೆ, ಗೃಹಲಕ್ಷ್ಮಿ ಸಮೀಕ್ಷೆ ಸೇರಿದಂತೆ ಹೆಚ್ಚುವರಿ ಕೆಲಸಗಳಿಂದ ಕಾರ್ಯಕರ್ತೆಯರನ್ನು ಮುಕ್ತಗೊಳಿಸಬೇಕು. ಪ್ರಭಾರ ಭತ್ಯೆ ಹಾಗೂ ತುಟ್ಟಿಭತ್ಯೆ ಹೆಚ್ಚಿಸಬೇಕು. ಮಹಿಳಾ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಋತುಚಕ್ರದ ರಜೆ ಹಾಗೂ ಸಂಬಳ ಸಹಿತ ವೈದ್ಯಕೀಯ ರಜೆ ನೀಡಬೇಕು ಎಂದು ಆಗ್ರಹಿಸಿದರು.

ಬಾಕಿ ಇರುವ ಸಾದಿಲ್ವಾರು ಹಣವನ್ನು ಬಿಡುಗಡೆ ಮಾಡಿ ಮೊತ್ತ ಹೆಚ್ಚಿಸಬೇಕು. ಕಳಪೆ ಗುಣಮಟ್ಟದ ಸಮವಸ್ತ್ರ ನೀಡುವುದನ್ನು ನಿಲ್ಲಿಸಿ ಉತ್ತಮ ಗುಣಮಟ್ಟದ ಸಮವಸ್ತ್ರ ಒದಗಿಸಬೇಕು. ಅಂಗನವಾಡಿ ಮಕ್ಕಳಿಗೆ ನೀಡುವ ಮೊಟ್ಟೆ ಹಾಗೂ ತರಕಾರಿ ಖರೀದಿ ದರ ಹೆಚ್ಚಿಸಬೇಕು. ಕಾರ್ಯಕರ್ತೆಯರನ್ನು ಬಿಎಲ್‌ಒ ಕರ್ತವ್ಯದಿಂದ ಬಿಡುಗಡೆಗೊಳಿಸಬೇಕು. ಖಾಲಿ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು. ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ-ಯುಕೆಜಿ ಆರಂಭದಿಂದ ಅಂಗನವಾಡಿ ಮಕ್ಕಳ ದಾಖಲಾತಿ ಕುಸಿಯುತ್ತಿರುವ ಸಮಸ್ಯೆ ಪರಿಹರಿಸಬೇಕು. ಜಿಲ್ಲೆ ಹಾಗೂ ತಾಲೂಕು ಮಟ್ಟದ ಸ್ಥಳೀಯ ಸಮಸ್ಯೆಗಳನ್ನೂ ಬಗೆಹರಿಸಬೇಕು ಎಂದು ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಪ್ರೇಮಾ ಬೂದಾಪುರ, ಭಾರತಿ ಹಿರೇಮಠ, ಸುನಿತಾ ಮರ್ಕಳ್ಳಿ ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮುಂಡರಗಿ: ಬಿಸಿಯೂಟದ ಉಪ್ಪಿಟ್ಟಿನಲ್ಲಿ ಹಲ್ಲಿ ಪತ್ತೆ, 160 ವಿದ್ಯಾರ್ಥಿಗಳು ಅಸ್ವಸ್ಥ
ದೇಗುಲಗಳು ಶಾಂತಿ, ನೆಮ್ಮದಿ ನೀಡುವ ಪವಿತ್ರ ಕೇಂದ್ರಗಳು: ಫಕೀರ ಸಿದ್ಧರಾಮ ಸ್ವಾಮೀಜಿ