ಪುತ್ತೂರಿನಲ್ಲಿ ಬಿಜೆಪಿ ಅಭ್ಯರ್ಥಿ ಚೌಟ ಪರ ಅಣ್ಣಾಮಲೈ ರೋಡ್ ಶೋ

KannadaprabhaNewsNetwork | Published : Apr 24, 2024 2:22 AM

ಸಾರಾಂಶ

ಲೋಕಸಭಾ ಚುನಾವಣೆಯಯಲ್ಲಿ ಬಿಜೆಪಿ ಸ್ಟಾರ್ ಪ್ರಚಾರಕರಾಗಿರುವ ಅಣ್ಣಾಮಲೈ ಅವರು ದ.ಕ. ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಪರ ಮಂಗಳವಾರ ಪುತ್ತೂರಿನಲ್ಲಿ ಬೃಹತ್ ರೋಡ್ ಶೋ ಮೂಲಕ ಪ್ರಚಾರ ನಡೆಸಿದರು.

ಕನ್ನಡಪ್ರಭ ವಾರ್ತೆ ಪುತ್ತೂರು

ಮುಂದಿನ ೨೫ ವರ್ಷಗಳಲ್ಲಿ ದೇಶ ಯಾವ ಹಾದಿಯಲ್ಲಿ ಸಾಗುತ್ತದೆ ಎಂಬುದನ್ನು ಈ ಬಾರಿಯ ಲೋಕಸಭಾ ಚುನಾವಣೆಯಲ್ಲೇ ನಿರ್ಧರಿಸಬೇಕಾಗಿದ್ದು, ಈ ನಿಟ್ಟಿನಲ್ಲಿ ರಾಷ್ಟ್ರದ ಸಮಗ್ರ ಅಭಿವೃದ್ಧಿ ಮತ್ತು ಸಮಗ್ರತೆಯನ್ನು ಗಮನದಲ್ಲಿರಿಸಿಕೊಂಡು ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವುದರ ಮೂಲಕ ನರೇಂದ್ರ ಮೋದಿ ಅವರನ್ನು ೩ನೇ ಬಾರಿಗೆ ಪ್ರಧಾನಿಯನ್ನಾಗಿ ಮಾಡುವ ಸಂಕಲ್ಪ ತೊಡಬೇಕು ಎಂದು ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಹೇಳಿದರು.

ಲೋಕಸಭಾ ಚುನಾವಣೆಯಯಲ್ಲಿ ಬಿಜೆಪಿ ಸ್ಟಾರ್ ಪ್ರಚಾರಕರಾಗಿರುವ ಅಣ್ಣಾಮಲೈ ಅವರು ದ.ಕ. ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಪರ ಮಂಗಳವಾರ ಪುತ್ತೂರಿನಲ್ಲಿ ಬೃಹತ್ ರೋಡ್ ಶೋ ಮೂಲಕ ಪ್ರಚಾರ ನಡೆಸಿ, ಬಳಿಕ ನಗರದ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಬಳಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು.

ದ.ಕ. ಜಿಲ್ಲೆಯ ಜನತೆ ಸದಾ ಬಿಜೆಪಿಯನ್ನು ಬೆಂಬಲಿಸುತ್ತಾ ಬಂದಿದ್ದು, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬೃಜೇಶ್ ಚೌಟ ಅವರನ್ನು ದಾಖಲೆಯ ಮತಗಳ ಅಂತರದಿಂದ ಗೆಲ್ಲಿಸಿಕೊಡುವಿರೆಂಬ ನಂಬಿಕೆಯಿದೆ ಎಂದರು. ಕೇಂದ್ರ ಸರ್ಕಾರ ದೇಶದಲ್ಲಿ ೧೧ ಕೋಟಿ ಟಾಯ್ಲೆಟ್ ನಿರ್ಮಿಸಿಕೊಟ್ಟು ಮಹತ್ವದ ಪ್ರಗತಿಯ ಕೆಲಸ ಮಾಡಿದೆ. ಆದರೆ, ಕಾಂಗ್ರೆಸ್‌ನವರು ಈಗಲೂ ಚೆಂಬು ಹಿಡಿದು ಯಾಕೆ ಹೋಗುತ್ತಿದ್ದಾರೆಂದು ಅರ್ಥವಾಗುತ್ತಿಲ್ಲ ಎಂದು ಲೇವಡಿ ಮಾಡಿದರು.

ದ.ಕ. ಜಿಲ್ಲೆಯ ಅಭ್ಯರ್ಥಿ ಒಬ್ಬ ವಿಶಿಷ್ಟ ವ್ಯಕ್ತಿಯಾಗಿ ಪರಿಗಣಿಸಲ್ಪಟ್ಟಿದ್ದಾರೆ. ೯ ವರ್ಷಗಳ ಕಾಲ ಈ ದೇಶದ ಸೈನಿಕನಾಗಿ, ಕರ್ತವ್ಯ ನಿರ್ವಹಿಸಿರುವ ಬ್ರಿಜೇಶ್ ಈ ಬಾರಿ ಬಿಜೆಪಿಯ ಅಭ್ಯರ್ಥಿಯಾಗಿ ಸಮಾಜ ಸೇವೆ ಮಾಡಲು ಅಣಿಯಾಗಿದ್ದಾರೆ ಎಂದು ಅಣ್ಣಾಮಲೈ ಹೇಳಿದರು.

ಅಭ್ಯರ್ಥಿ ಬ್ರಿಜೇಶ್ ಚೌಟ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳಿ, ಮಾಜಿ ಶಾಸಕರಾದ ಸಂಜೀವ ಮಠಂದೂರು, ಮಲ್ಲಿಕಾ ಪ್ರಸಾದ್, ಬಿಜೆಪಿ ಪ್ರಮುಖರಾದ ಸುಲೋಚನಾ ಜಿ.ಕೆ. ಭಟ್, ತಿಮ್ಮಪ್ಪ ಚನಿಲ, ಅರುಣ್ ಕುಮಾರ್ ಪುತ್ತಿಲ, ಆರ್.ಸಿ. ನಾರಾಯಣ್, ನಿತೀಶ್ ಶಾಂತಿವನ, ಸಾಜ ರಾಧಾಕೃಷ್ಣ ಆಳ್ವ, ಪಿ.ಜಿ. ಜಗನ್ನಿವಾಸ ರಾವ್, ಜೆಡಿಎಸ್‌ನ ಪ್ರಭಾಕರ್, ಕೈಲಾಸ್ ಗೌಡ ಮತ್ತಿತರರು ಉಪಸ್ಥಿತರಿದ್ದರು.

Share this article