ಸಂಡೂರು: ಸಂಸದ ಈ.ತುಕಾರಾಂ ವ್ಯಕ್ತಿತ್ವ, ಅವರು ಕ್ಷೇತ್ರದಲ್ಲಿ ಮಾಡಿದ ಅಭಿವೃದ್ಧಿ ಕಾರ್ಯಗಳು ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಈ.ಅನ್ನಪೂರ್ಣಾ ತುಕಾರಾಂ ಅವರ ಗೆಲುವಿಗೆ ಸಹಕಾರಿಯಾಗಲಿವೆ. ಕ್ಷೇತ್ರದಲ್ಲಿ ಈ.ಅನ್ನಪೂರ್ಣಾ ಗೆಲುವು ಸಾಧಿಸುವ ವಿಶ್ವಾಸವಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಎಂದು ಹೇಳಿದರು.
ಭಾನುವಾರ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಕಾಂಗ್ರೆಸ್ ಮಹತ್ವದ ಕೊಡುಗೆ ನೀಡಿದೆ. ೩೭೧ಜೆ ತಿದ್ದುಪಡಿಗೆ ಬಿಜೆಪಿಯವರು ಪ್ರೋತ್ಸಾಹ ನೀಡಲಿಲ್ಲ. ಆದರೆ, ಕಾಂಗ್ರೆಸ್ ಮುಖಂಡರು ೩೭೧ಜೆ ತಿದ್ದುಪಡಿ ತಂದಿದ್ದರಿಂದ ಈ ಭಾಗದ ಅಭಿವೃದ್ಧಿಗೆ ಮತ್ತು ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಹಾಗೂ ಉದ್ಯೋಗದಲ್ಲಿ ಮೀಸಲಾತಿ ಪಡೆಯಲು ಅನುಕೂಲವಾಗಿದೆ. ಸಚಿವ ಸಂಪುಟ ಪ್ರಸಕ್ತ ಆರ್ಥಿಕ ವರ್ಷದಲ್ಲಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಆರೋಗ್ಯ ಇಲಾಖೆಯಡಿ ವಿವಿಧ ಅಭಿವೃದ್ಧಿ ಕಾರ್ಯಗಳಿಗಾಗಿ ₹೯೦೦ ಕೋಟಿ ಅನುದಾನಕ್ಕೆ ಅನುಮೋದನೆ ನೀಡಿದೆ. ಈ ಅನುದಾನದಲ್ಲಿ ಜಿಲ್ಲಾ ಆಸ್ಪತ್ರೆಗಳ ಅಭಿವೃದ್ಧಿ, ಹೊಸದಾಗಿ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ತೆರೆಯುವುದು, ಇರುವ ಆಸ್ಪತ್ರೆಗಳನ್ನು ಮೇಲ್ದರ್ಜೆಗೆ ಏರಿಸುವುದು ಮುಂತಾದ ಯೋಜನೆಗಳನ್ನು ಹಾಕಿಕೊಳ್ಳಲಾಗಿದೆ ಎಂದರು.ಸಂಡೂರು ತಾಲೂಕಿನಲ್ಲಿ ಆರೋಗ್ಯ ಇಲಾಖೆಗೆ ಪ್ರಸಕ್ತ ಸಾಲಿನಲ್ಲಿ ₹೩೯ ಕೋಟಿ ಅನುದಾನಕ್ಕೆ ಅನುಮೋದನೆ ದೊರೆತಿದೆ. ಸಂಡೂರಿನಲ್ಲಿನ ೧೦೦ ಬೆಡ್ ಆಸ್ಪತ್ರೆಯನ್ನು ೧೫೦ ಬೆಡ್‌ಗಳ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೆ ಏರಿಸಲು, ತೋರಣಗಲ್ಲಿನ ೩೦ ಬೆಡ್ ಆಸ್ಪತ್ರೆಯನ್ನು ೫೦ ಬೆಡ್ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಲು, ನಾಲ್ಕು ಗ್ರಾಮಗಳಲ್ಲಿ ಹೊಸದಾಗಿ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮಂಜೂರು ಮಾಡಲಾಗಿದೆ ಎಂದರು.
ಜನಾರ್ದನ ರೆಡ್ಡಿ ಆಡಳಿತಾವಧಿಯಲ್ಲಿ ಜಿಲ್ಲೆಯಲ್ಲಿ ಭಯದ ವಾತಾವರಣವಿತ್ತು. ಇಲ್ಲಿನ ಸಂಪನ್ಮೂಲಗಳನ್ನು ಲೂಟಿ ಮಾಡಲಾಯಿತು. ಇಂದು ಬಿಜೆಪಿ ಗಣಿ ಲೂಟಿ ಮಾಡಿದವರಿಗೆ ಚುನಾವಣಾ ಉಸ್ತುವಾರಿ ನೀಡಿ, ನೈತಿಕತೆ, ಆದರ್ಶವಿಲ್ಲದೆ, ಮತಕೇಳುತ್ತಿದೆ. ಇದು ಹಾಸ್ಯಾಸ್ಪದವಾಗಿದೆ. ಸಂಡೂರು ಸೇರಿದಂತೆ ರಾಜ್ಯದಲ್ಲಿ ಉಪ ಚುನಾವಣೆ ನಡೆಯುತ್ತಿರುವ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.ಯಡಿಯೂರಪ್ಪ ಹಾಗೂ ಶ್ರೀರಾಮುಲು ವಿರುದ್ಧ ಪ್ರಾಸಿಕ್ಯೂಷನ್‌ಗೆ ಶಿಫಾರಸು ಮಾಡಿರುವ ಕುರಿತು ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಯಡಿಯೂರಪ್ಪ ಅವರಂತಹ ಭ್ರಷ್ಟ ಮುಖ್ಯಮಂತ್ರಿಯನ್ನು ರಾಜ್ಯ ಇದುವರೆಗೆ ಕಂಡಿಲ್ಲ. ಕೊರೋನಾ ಸಂದರ್ಭದಲ್ಲಿ ಬಿಜೆಪಿಯವರು ಹೆಣದ ಮೇಲೆ ಹಣ ಮಾಡಿದ್ದಾರೆ ಎಂದು ಆರೋಪಿಸಿದ್ದೆವು. ಇದು ಈಗ ನ್ಯಾ. ಮೈಕಲ್ ಡಿ. ಕುನ್ಹಾ ನೀಡಿರುವ ವರದಿಯಿಂದ ದೃಢಪಟ್ಟಿದೆ. ಈ ವಿಷಯದಲ್ಲಿ ನಡೆದಿರುವ ಭ್ರಷ್ಟಾಚಾರದ ವಿರುದ್ಧ ಕಾನೂನು ಪ್ರಕಾರ ಕ್ರಮಕೈಗೊಳ್ಳಲಾಗುವುದು ಎಂದರು.
ಸಂಡೂರಿನ ಆಸ್ಪತ್ರೆಯಲ್ಲಿ ಮೂಲ ಸೌಕರ್ಯಗಳ ಕೊರತೆ ಕುರಿತು ಪ್ರಶ್ನಿಸಿದಾಗ, ಪ್ರತಿಕ್ರಿಯಿಸಿದ ಸಚಿವರು ಚುನಾವಣೆ ಮುಗಿದ ಮೇಲೆ ಆಸ್ಪತ್ರೆಗೆ ಭೇಟಿ ನೀಡಿ, ಅಲ್ಲಿನ ನ್ಯೂನತೆಗಳನ್ನು ಸರಿಪಡಿಸಲು ಕ್ರಮಕೈಗೊಳ್ಳಲಾಗುವುದು ಎಂದರು.ದಾವಣಗೆರೆ ಕ್ಷೇತ್ರದ ಸಂಸದೆ ಪ್ರಭಾ ಮಲ್ಲಿಕಾರ್ಜುನ ಮಾತನಾಡಿ, ಸಂಡೂರು ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಭದ್ರಕೋಟೆಯಾಗಿದೆ. ಇಲ್ಲಿ ಈ ವರೆಗೆ ನಡೆದಿರುವ ೧೫ ಚುನಾವಣೆಗಳಲ್ಲಿ ೧೩ ಬಾರಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಜಿಲ್ಲೆಯಲ್ಲಿ ಕಾಂಗ್ರೆಸ್‌ನ ಈ.ತುಕಾರಾಂ ಸಂಸದರಾಗಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತವಿದೆ. ಉಪ ಚುನಾವಣೆಯಲ್ಲಿ ಕ್ಷೇತ್ರದ ಜನತೆ ಕಾಂಗ್ರೆಸ್ ಅಭ್ಯರ್ಥಿ ಈ. ಅನ್ನಪೂರ್ಣಾ ತುಕಾರಾಂ ಅವರನ್ನು ಗೆಲ್ಲಿಸಿದರೆ, ಕ್ಷೇತ್ರದ ಅಭಿವೃದ್ಧಿಗೆ ಅನುಕೂಲವಾಗಲಿದೆ ಎಂದರು.
ಕೇಂದ್ರವು ರಾಜ್ಯದ ಕುರಿತು ಮಲತಾಯಿ ಧೋರಣೆ ಅನುಸರಿಸುತ್ತಿದೆ. ರಾಜ್ಯದಿಂದ ಕೇಂದ್ರಕ್ಕೆ ನೀಡುವ ಒಂದು ರುಪಾಯಿಯಲ್ಲಿ ರಾಜ್ಯಕ್ಕೆ ಮರಳಿ ಬರುತ್ತಿರುವುದು ಕೇವಲ ೧೫ ಪೈಸೆ. ೧೫ನೇ ಹಣಕಾಸು ಆಯೋಗದ ಅನ್ವಯ ₹೧ ಲಕ್ಷ ಕೋಟಿ ಕೇಳುತ್ತಿದ್ದೇವೆ. ಆದರೆ, ಕೇಂದ್ರ ನೀಡುತ್ತಿರುವುದು ₹೪೫ ಸಾವಿರ ಕೋಟಿ. ರಾಜ್ಯದಲ್ಲಿ ಬಿಜೆಪಿಯ ಸಂಸದರ ಸಂಖೆ ಹೆಚ್ಚಿದ್ದರೂ ಅವರು ಕೇಂದ್ರ ಸರ್ಕಾರದ ಮಲತಾಯಿ ಧೋರಣೆ ಕುರಿತು ಮಾತನಾಡುತ್ತಿಲ್ಲ. ಈ ಬಾರಿ ಕಾಂಗ್ರೆಸ್ ೯ ಸಂಸದರಿದ್ದೇವೆ. ಮುಂಬರುವ ಸಂಸತ್ ಅಧಿವೇಶನದಲ್ಲಿ ಈ ಕುರಿತು ಧ್ವನಿ ಎತ್ತಲಾಗುವುದು ಎಂದು ಪ್ರಭಾ ಹೇಳಿದರು.ಎಐಸಿಸಿ ಕಾರ್ಯದರ್ಶಿ ಗೋಪಿನಾಥ್ ಪಳನಿಯಪ್ಪನ್, ವಿಧಾನ ಪರಿಷತ್ ಸದಸ್ಯ ವಸಂತಕುಮಾರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶಿವಯೋಗಿ ಉಪಸ್ಥಿತರಿದ್ದರು.