ಕನ್ನಡಪ್ರಭ ವಾರ್ತೆ ನಾಪೋಕ್ಲು
ಜ್ಞಾನ ವಿಕಾಸ ಕೇಂದ್ರದ ಸದಸ್ಯರು ಎಲ್ಲಾ ಕಾರ್ಯಕ್ರಮದಲ್ಲಿ ತೊಡಗಿಸಿಕೊಂಡು, ಜೀವನದಲ್ಲಿ ಮತ್ತು ಮನೆಯಲ್ಲಿ ಮಕ್ಕಳಿಗೆ ಸಂಸ್ಕಾರವನ್ನು ಕಲಿಸುತ್ತಾ ಬರುತ್ತಿದ್ದಾರೆ. ಈ ಕಾರ್ಯಕ್ರಮದ ಮೂಲಕ ಮಹಿಳೆಯರ ಸಬಲೀಕರಣಕ್ಕೆ ಉತ್ತಮ ವೇದಿಕೆಯನ್ನು ಕಲ್ಪಿಸಿಕೊಡಲಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಡಿಕೇರಿ ತಾಲೂಕು ಯೋಜನಾಧಿಕಾರಿ ಪುರುಷೋತ್ತಮ ಹೇಳಿದರು.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ಬೆಟ್ಟಗೇರಿ ವಲಯದ ಹಾಕತ್ತೂರಿನ ತೊಂಬತ್ತು ಮನೆ ತ್ರಿನೇತ್ರ ಯುವಕ ಸಂಘದ ಸಮುದಾಯ ಭವನದಲ್ಲಿ ಆಯೋಜಿಸಲಾಗಿದ್ದ ಹಾಕತ್ತೂರು ಸ್ಪಂದನ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಮಹಿಳೆಯರು ಸ್ವ ಉದ್ಯೋಗ ತರಬೇತಿಗಳನ್ನು ಪಡೆದುಕೊಳ್ಳುವ ಮೂಲಕ ಸ್ವಾವಲಂಬಿ ಜೀವನ ನಡೆಸಲು ಹಲವು ಅವಕಾಶಗಳಿವೆ ಎಂದರು.ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದ ತ್ರಿನೇತ್ರ ಯುವಕ ಸಂಘದ ಅಧ್ಯಕ್ಷ ಪಿ. ಪಿ. ಸುಕುಮಾರ ಮಾತನಾಡಿ, ಮಹಿಳೆಯರು ಸಮಾಜಮುಖಿ ಕಾರ್ಯಕ್ರಮದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಲು ಈ ಜ್ಞಾನ ವಿಕಾಸ ಕೇಂದ್ರ ಸಹಕಾರಿ ಆಗಿದೆ ಎಂದು ಹೇಳಿ 20 ವರ್ಷ ದ ಹಿಂದೆ ಸ್ವ ಸಹಾಯ ಸಂಘದ ಪ್ರಾರಂಭದ ದಿನಗಳನ್ನು ಮೆಲುಕು ಹಾಕಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸ್ಪಂದನ ಜ್ಞಾನವಿಕಾಸ ಕೇಂದ್ರದ ಸದಸ್ಯೆ ವಿಮಲ ವಹಿಸಿದ್ದು ಕೇಂದ್ರದ ವಾರ್ಷಿಕ ವರದಿಯನ್ನು ಹಾಕತ್ತೂರು ಒಕ್ಕೂಟದ ಕಾರ್ಯದರ್ಶಿ ಹರಿಣಿ ಮಂಡಿಸಿದರು.
ಈ ಸಂದರ್ಭ ಒಕ್ಕೂಟದ ಕಾರ್ಯದರ್ಶಿ ಹರಿಣಿ, ಜ್ಞಾನ ವಿಕಾಸ ಸಮನ್ವಯಾಧಿಕಾರಿ ಮಾಲಿನಿ, ಮೇಲ್ವಿಚಾರಕಿ ವಿದ್ಯಾ, ಸೇವಾಪ್ರತಿನಿಧಿ ಕವಿತಾ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.ಕಾರ್ಯಕ್ರಮದಲ್ಲಿ ಸ್ಪಂದನಜ್ಞಾನ ವಿಕಾಸ ಕೇಂದ್ರದ ಸದಸ್ಯರಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಿ, ವಿಜೇತರಾದ ವರಿಗೆ ಬಹುಮಾನ ವಿತರಣೆ ಮಾಡಲಾಯಿತು. ಮಡಿಕೇರಿ ತಾಲೂಕು ಜ್ಞಾನವಿಕಾಸ ಸಮನ್ವಯಾಧಿಕಾರಿ ಮಾಲಿನಿ ನಿರೂಪಿಸಿದರು. ಸೇವಾಪ್ರತಿನಿಧಿ ಕವಿತಾ ಸ್ವಾಗತಿಸಿ, ವಂದಿಸಿದರು.