ಕನ್ನಡಪ್ರಭ ವಾರ್ತೆ ಬೆಳಗಾವಿ
ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ರಾಜ್ಯ ರಚನೆಯಾಗಿ ಏಳು ದಶಕಗಳು ಕಳೆದರೂ ಉತ್ತರ ಮತ್ತು ದಕ್ಷಿಣ ಕರ್ನಾಟಕದ ನಡುವಿನ ಪ್ರಾದೇಶಿಕ ಅಸಮತೋಲನ ನಿವಾರಣೆಯಾಗಿಲ್ಲ. ರಾಜ್ಯದ ಆರ್ಥಿಕ ಪ್ರಗತಿಯಲ್ಲಿ ಬೆಂಗಳೂರಿಗೆ ಹೆಚ್ಚಿನ ಆದ್ಯತೆ ದೊರೆಯುತ್ತಿದ್ದು, ಉತ್ತರ ಕರ್ನಾಟಕ ನಿರೀಕ್ಷಿತ ಅಭಿವೃದ್ಧಿಯಿಂದ ವಂಚಿತವಾಗಿದೆ. ಈ ಭಾಗದ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಉದ್ದೇಶದಿಂದ ಸುವರ್ಣ ವಿಧಾನಸೌಧ ನಿರ್ಮಿಸಲಾಗಿದ್ದರೂ, ಇಲ್ಲಿ ನಡೆದ ಅಧಿವೇಶನಗಳು ನಿರೀಕ್ಷಿತ ಫಲ ನೀಡಿಲ್ಲ. ಅಧಿವೇಶನ ನಡೆಸಿ ಬೆಂಗಳೂರಿಗೆ ಮರಳುವುದಷ್ಟೇ ಆಗಬಾರದು. ಇಲ್ಲಿ ಕೈಗೊಳ್ಳುವ ನಿರ್ಣಯಗಳು ಸಚಿವ ಸಂಪುಟದ ಅನುಮೋದನೆ ಪಡೆದು ಅನುಷ್ಠಾನಗೊಳ್ಳಬೇಕು. ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸಂಬಂಧಿಸಿದಂತೆ ಪ್ರತಿ ವರ್ಷ ಸರ್ಕಾರ ಶ್ವೇತಪತ್ರ ಹೊರಡಿಸಬೇಕು ಎಂದು ಒತ್ತಾಯಿಸಿದರು.
ನಂಜುಂಡಪ್ಪ ವರದಿಯಲ್ಲಿ ಗುರುತಿಸಲಾದ 85 ಹಿಂದುಳಿದ ತಾಲೂಕುಗಳು ಉತ್ತರ ಕರ್ನಾಟಕದಲ್ಲಿವೆ. ಈ ಭಾಗದ ಅಭಿವೃದ್ಧಿಗಾಗಿ ಈ ಹಿಂದೆ ಹಲವು ವಿಶೇಷ ಪ್ಯಾಕೇಜ್‌ಗಳನ್ನು ಘೋಷಿಸಿದರೂ ಸಮರ್ಪಕವಾಗಿ ಅನುದಾನ ಬಿಡುಗಡೆಯಾಗಿಲ್ಲ. ಕಲ್ಯಾಣ ಕರ್ನಾಟಕದ ಮಾದರಿಯಲ್ಲಿ ಕಿತ್ತೂರು ಕರ್ನಾಟಕಕ್ಕೂ ವಿಶೇಷ ಅಭಿವೃದ್ಧಿ ಪ್ಯಾಕೇಜ್ ಘೋಷಿಸಬೇಕು. ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಉತ್ತರ ಕರ್ನಾಟಕ ಅಭಿವೃದ್ಧಿ ಮಂಡಳಿ ಸ್ಥಾಪಿಸಿ, ಪ್ರತ್ಯೇಕ ಅನುದಾನ ಒದಗಿಸಬೇಕು ಎಂದರು.ಕೃಷ್ಣಾ ಮೇಲ್ದಂಡೆ ಯೋಜನೆ (ಯುಕೆಪಿ) ಹಾಗೂ ಮಹದಾಯಿ ಯೋಜನೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಕಾಂಗ್ರೆಸ್ ಸರ್ಕಾರ ಈ ಹಿಂದೆ ''''''''ನಡಿಗೆ ಕೃಷ್ಣೆಯ ಕಡೆಗೆ'''''''' ಕಾರ್ಯಕ್ರಮ ನಡೆಸಿದ್ದರೂ, ಅಧಿಕಾರಕ್ಕೆ ಬಂದ ಬಳಿಕ ಕೃಷ್ಣಾ ಮೇಲ್ದಂಡೆ ಯೋಜನೆಗೆ ನಿರೀಕ್ಷಿತ ಪ್ರಮಾಣದಲ್ಲಿ ಅನುದಾನ ಬಿಡುಗಡೆ ಮಾಡಿಲ್ಲ. ನೀರಾವರಿ ಯೋಜನೆಗಳು ಪೂರ್ಣಗೊಂಡರೆ ಲಕ್ಷಾಂತರ ಎಕರೆ ಪ್ರದೇಶಕ್ಕೆ ನೀರಾವರಿ ಸೌಲಭ್ಯ ದೊರೆಯಲಿದೆ. ಈ ಕುರಿತು ಸರ್ಕಾರ ಸ್ಪಷ್ಟ ನಿಲುವು ಪ್ರಕಟಿಸಬೇಕು ಎಂದು ಆಗ್ರಹಿಸಿದರು.
ಶಿಕ್ಷಣ ಕ್ಷೇತ್ರದಲ್ಲಿಯೂ ಉತ್ತರ ಕರ್ನಾಟಕ ಹಿಂದುಳಿದಿದೆ. ಸರ್ಕಾರಿ ಶಾಲೆಗಳಲ್ಲಿ ಸುಮಾರು 30 ಸಾವಿರ ಶಿಕ್ಷಕರ ಹುದ್ದೆಗಳು ಖಾಲಿಯಿದ್ದು, ಕಳೆದ 15 ವರ್ಷಗಳಿಂದ ನೇಮಕಾತಿ ಸಮರ್ಪಕವಾಗಿ ನಡೆದಿಲ್ಲ. ವಿಶೇಷವಾಗಿ ಗಣಿತ ಮತ್ತು ವಿಜ್ಞಾನ ವಿಷಯಗಳ ಶಿಕ್ಷಕರ ಕೊರತೆಯಿಂದ ವಿದ್ಯಾರ್ಥಿಗಳ ಕಲಿಕೆಗೆ ತೊಂದರೆಯಾಗುತ್ತಿದೆ. ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಖಾಲಿ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡಬೇಕು ಎಂದು ಒತ್ತಾಯಿಸಿದರು.
ಬೆಳಗಾವಿ ರಿಂಗ್‌ರೋಡ್ ಯೋಜನೆಯಿಂದ ರೈತರಿಗೆ ಎದುರಾಗಿರುವ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಬೇಕು. ಮುಂಬರುವ ಅಧಿವೇಶನಕ್ಕೂ ಮುನ್ನ ಉತ್ತರ ಕರ್ನಾಟಕದ ಎಲ್ಲ ಜನಪ್ರತಿನಿಧಿಗಳು ಪಕ್ಷಭೇದ ಮರೆತು ಒಂದೇ ವೇದಿಕೆಯಲ್ಲಿ ಸಭೆ ಸೇರಿ, ಈ ಭಾಗದ ಬೇಡಿಕೆಗಳ ಕುರಿತು ಒಮ್ಮತದ ನಿರ್ಣಯ ಕೈಗೊಳ್ಳಬೇಕು. ಸರ್ಕಾರದ ಮೇಲೆ ಒತ್ತಡ ತಂದು ಅಭಿವೃದ್ಧಿ ಕಾರ್ಯಗಳಿಗೆ ಕಾಲಮಿತಿಯೊಳಗೆ ಅನುಮೋದನೆ ಹಾಗೂ ಅನುದಾನ ಪಡೆಯಬೇಕು. ಈ ಬಾರಿಯ ಅಧಿವೇಶನ ಕೇವಲ ವಿಧಿವಿಧಾನ ಮತ್ತು ಚರ್ಚೆಗೆ ಸೀಮಿತವಾಗದೆ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಹೊಸ ದಿಕ್ಕು ನೀಡಬೇಕು. ಅಗತ್ಯಬಿದ್ದರೆ ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ ಅವರ ನೇತೃತ್ವದಲ್ಲಿ ಉತ್ತರ ಕರ್ನಾಟಕದ ಬೇಡಿಕೆಗಳಿಗಾಗಿ ಹೋರಾಟ ನಡೆಸಲಾಗುವುದು ಎಂದು ಮಹಾಂತೇಶ ಕವಟಗಿಮಠ ಎಚ್ಚರಿಸಿದರು.