ಸ್ಥಳೀಯ ಸಂಸ್ಥೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಪ್ರಕಟ

KannadaprabhaNewsNetwork | Published : Aug 6, 2024 12:34 AM

ಸಾರಾಂಶ

ಕಳೆದ ಒಂದೂವರೆ ವರ್ಷಗಳಿಂದ ಖಾಲಿ ಇದ್ದ ನಗರ ಸ್ಥಳೀಯ ಸಂಸ್ಥೆಗಳಾದ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ನಿಗದಿಪಡಿಸಿ ರಾಜ್ಯ ಸರ್ಕಾರ ಸೋಮವಾರ ಪಟ್ಟಿ ಬಿಡುಗಡೆಗೊಳಿಸಿದೆ.

ಹಾವೇರಿ: ಕಳೆದ ಒಂದೂವರೆ ವರ್ಷಗಳಿಂದ ಖಾಲಿ ಇದ್ದ ನಗರ ಸ್ಥಳೀಯ ಸಂಸ್ಥೆಗಳಾದ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ನಿಗದಿಪಡಿಸಿ ರಾಜ್ಯ ಸರ್ಕಾರ ಸೋಮವಾರ ಪಟ್ಟಿ ಬಿಡುಗಡೆಗೊಳಿಸಿದೆ. ಹಾವೇರಿ ನಗರಸಭೆ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಬ ಅಭ್ಯರ್ಥಿಗೆ ಮೀಸಲಾಗಿದೆ. ರಾಣಿಬೆನ್ನೂರ ನಗರಸಭೆ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಅ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಅಭ್ಯರ್ಥಿಗೆ ಮೀಸಲು ನಿಗದಿಯಾಗಿದೆ.

ಗುತ್ತಲ ಪಟ್ಟಣ ಪಂಚಾಯಿತಿ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ ಎಸ್‌ಟಿ ಅಭ್ಯರ್ಥಿಗೆ ಮೀಸಲಾಗಿದೆ.

ಹಿರೇಕೆರೂರ ಪಟ್ಟಣ ಪಂಚಾಯಿತಿ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಅಭ್ಯರ್ಥಿಗೆ ಮೀಸಲಾಗಿದೆ.ಬಂಕಾಪುರ ಪುರಸಭೆ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಬ, ಬ್ಯಾಡಗಿ ಪುರಸಭೆ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಎಸ್‌ಸಿ ಅಭ್ಯರ್ಥಿ, ಹಾನಗಲ್ಲ ಪುರಸಭೆ ಅಧ್ಯಕ್ಷ ಸ್ಥಾನ ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಬ ಮಹಿಳಾ ಅಭ್ಯರ್ಥಿಗೆ ಅವಕಾಶ ನೀಡಲಾಗಿದೆ. ಸವಣೂರ ಪುರಸಭೆ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಅ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ, ಶಿಗ್ಗಾಂವಿ ಪುರಸಭೆ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಅ ಅಭ್ಯರ್ಥಿಗೆ ಅವಕಾಶ ನೀಡಲಾಗಿದೆ.

ಕಳೆದ ಒಂದೂವರೆ ವರ್ಷದಿಂದ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾಯಿತ ಪ್ರತಿನಿಧಿಗಳ ಆಡಳಿತವಿಲ್ಲದೇ ಆಡಳಿತಾಧಿಕಾರಿಗಳದ್ದೇ ಕಾರುಬಾರಾಗಿತ್ತು. ಈಗ ಸರ್ಕಾರ ಮೀಸಲಾತಿ ಪ್ರಕಟಿಸಿದ್ದರಿಂದ ಅಧ್ಯಕ್ಷ, ಉಪಾಧ್ಯಕ್ಷರು ಯಾರಾಗಲಿದ್ದಾರೆ ಎಂಬ ಚರ್ಚೆಗಳು ಶುರುವಾಗಿದೆ.

ಮೀಸಲಾತಿಗೆ ಅನುಗುಣವಾಗಿ ಅರ್ಹರಿದ್ದವರಿಗೆ ಆಕಾಂಕ್ಷೆಗಳು ಗರಿಗೆದರಿವೆ.

Share this article