ಲೋಕ ಅಭ್ಯರ್ಥಿಗಳ ಆಯ್ಕೆಗೆ ಮುನ್ನ ಕಾಂಗ್ರೆಸ್‌ನಿಂದ ಮತ್ತೊಂದು ಸಮೀಕ್ಷೆ

KannadaprabhaNewsNetwork |  
Published : Feb 15, 2024, 01:35 AM IST
Kpcc 2 | Kannada Prabha

ಸಾರಾಂಶ

ಲೋಕಸಭೆ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಆಯ್ಕೆ ಸಂಬಂಧ ಬುಧವಾರ ಕೆಪಿಸಿಸಿ ಕಚೇರಿಯಲ್ಲಿ ಚುನಾವಣಾ ಸಮಿತಿ ಸಭೆ ನಡೆಸಲಾಗಿದ್ದು, ಮತ್ತೊಂದು ಸುತ್ತಿನ ಸಮೀಕ್ಷೆ ಮೂಲಕ ಅಭ್ಯರ್ಥಿಗಳ ಬಗ್ಗೆ ಅಭಿಪ್ರಾಯ ಸಂಗ್ರಹ ಮಾಡಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಮುಂದುವರೆಸಲು ತೀರ್ಮಾನ ಮಾಡಲಾಗಿದೆ.

ತೀರ್ಮಾನ- ಅಭ್ಯರ್ಥಿಗಳ ಬಗ್ಗೆ ಅಭಿಪ್ರಾಯ ಸಂಗ್ರಹಿಸಿ ಆಯ್ಕೆ ಪ್ರಕ್ರಿಯೆ

ಕನ್ನಡಪ್ರಭ ವಾರ್ತೆ, ಬೆಂಗಳೂರು: ಲೋಕಸಭೆ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಆಯ್ಕೆ ಸಂಬಂಧ ಬುಧವಾರ ಕೆಪಿಸಿಸಿ ಕಚೇರಿಯಲ್ಲಿ ಚುನಾವಣಾ ಸಮಿತಿ ಸಭೆ ನಡೆಸಲಾಗಿದ್ದು, ಮತ್ತೊಂದು ಸುತ್ತಿನ ಸಮೀಕ್ಷೆ ಮೂಲಕ ಅಭ್ಯರ್ಥಿಗಳ ಬಗ್ಗೆ ಅಭಿಪ್ರಾಯ ಸಂಗ್ರಹ ಮಾಡಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಮುಂದುವರೆಸಲು ತೀರ್ಮಾನ ಮಾಡಲಾಗಿದೆ.ಜತೆಗೆ, ಸಮೀಕ್ಷೆ ವರದಿ ಬಳಿಕ ಮತ್ತೊಂದು ಸುತ್ತಿನ ಚುನಾವಣಾ ಸಮಿತಿ ಸಭೆ ದೆಹಲಿಯಲ್ಲಿ ನಡೆಯಲಿದೆ. ಮೊದಲ ಹಂತದಲ್ಲಿ ಕನಿಷ್ಠ ಶೇ.50 ರಷ್ಟು ಅಭ್ಯರ್ಥಿಗಳಿಗಾದರೂ ಕೆಲಸ ಆರಂಭಿಸಲು ಸೂಚಿಸಬೇಕಿದೆ. ಹೀಗಾಗಿ ಆದಷ್ಟು ಬೇಗ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷರೂ ಆದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ.ಕೆಪಿಸಿಸಿ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್ ಸುರ್ಜೆವಾಲ, ಲೋಕಸಭೆ ಅಭ್ಯರ್ಥಿಗಳ ಪಟ್ಟಿ ಪರಿಷ್ಕರಣೆ ಸಮಿತಿ ಅಧ್ಯಕ್ಷ ಹರೀಶ್ ಚೌಧರಿ ಅವರನ್ನೊಳಗೊಂಡ ಸಮಿತಿ ಸಭೆ ನಡೆಸಲಾಯಿತು.ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್‌, ‘ಲೋಕಸಭೆ ಚುನಾವಣೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ಮತ್ತೊಂದು ಸುತ್ತಿನ ಸಮೀಕ್ಷೆ ನಡೆಸಿ, ದೆಹಲಿಯಲ್ಲಿ ಸಭೆ ಮಾಡಲಿದ್ದೇವೆ’ ಎಂದು ಹೇಳಿದರು.

‘ಇಂದಿನ ಸಭೆಯಲ್ಲಿ ಪಕ್ಷದ ವೀಕ್ಷಕರು, ಜಿಲ್ಲಾ ಮಂತ್ರಿಗಳು, ಕೆಲವು ಕಾರ್ಯಕರ್ತರು ಸಲ್ಲಿಸಿದ್ದ ವರದಿ ಹಾಗೂ ನಮ್ಮ ಸಮೀಕ್ಷೆ ವರದಿಗಳನ್ನು ಪರಾಮರ್ಶೆ ಮಾಡಿದ್ದೇವೆ. ಮತ್ತೊಂದು ಸುತ್ತಿನ ಸಮೀಕ್ಷೆ ಮೂಲಕ ಅಭಿಪ್ರಾಯ ಸಂಗ್ರಹಕ್ಕೆ ಸೂಚಿಸಿದ್ದೇವೆ. ಪಕ್ಷದ ಅಭ್ಯರ್ಥಿಗಳ ಪಟ್ಟಿ ಇನ್ನೂ ಅಂತಿಮವಾಗಿಲ್ಲ, ಮುಂದಿನ ಸುತ್ತಿನ ಸಭೆಯನ್ನು ದೆಹಲಿಯಲ್ಲಿ ನಡೆಸಲಾಗುವುದು. ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ಈ ಬಾರಿ ಬೆಂಗಳೂರಿನಲ್ಲೇ ಸಭೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.ಈ ತಿಂಗಳೊಳಗಾಗಿ ಅಭ್ಯರ್ಥಿಗಳ ಪಟ್ಟಿ ಅಂತಿಮವಾಗುತ್ತದೆಯೇ ಎಂದು ಕೇಳಿದಾಗ, ‘ಆದಷ್ಟು ಬೇಗ ಅಂತಿಮಗೊಳಿಸಬೇಕು. ಶೇ. 50 ರಷ್ಟು ಅಭ್ಯರ್ಥಿಗಳಿಗಾದರೂ ಕೆಲಸ ಆರಂಭಿಸಲು ನಾವು ಸೂಚನೆ ನೀಡಬೇಕಿದೆ. ಹೀಗಾಗಿ ಆದಷ್ಟು ಬೇಗ ಪಟ್ಟಿ ಅಂತಿಮಗೊಳಿಸಬೇಕಾದ ಅನಿವಾರ್ಯತೆ ಇದೆ’ ಎಂದರು.ಎಷ್ಟು ಕ್ಷೇತ್ರಗಳಲ್ಲಿ ಒಬ್ಬರೇ ಆಕಾಂಕ್ಷಿಗಳಿದ್ದಾರೆ ಎಂಬ ಪ್ರಶ್ನೆಗೆ, ‘ನಾವು ಇನ್ನು ಆ ವಿಚಾರವಾಗಿ ಚರ್ಚೆ ಮಾಡಿಲ್ಲ. ನಾವು ಕೇವಲ ನಮಗೆ ಬಂದಿರುವ ವರದಿಗಳು, ಅಭಿಪ್ರಾಯದ ಬಗ್ಗೆ ಚರ್ಚೆ ಮಾಡಿದ್ದೇವೆ’ ಎಂದಷ್ಟೇ ಹೇಳಿದರು.ಎಐಸಿಸಿಗೆ ಕಳಿಸಲಾಗಿರುವ ಪಟ್ಟಿ ಬಗ್ಗೆ ಗೊಂದಲವಿದೆಯೇ ಎಂದು ಕೇಳಿದಾಗ, ಇದೆಲ್ಲವೂ ಸುಳ್ಳು, ನಾವು ಎಐಸಿಸಿಗೆ ಯಾವುದೇ ಪಟ್ಟಿ ನೀಡಿಲ್ಲ. ಮುಖ್ಯಮಂತ್ರಿಗಳಿಗೆ ವಿವಿಧ ವರದಿಗಳು, ಅಭಿಪ್ರಾಯಗಳ ಕುರಿತ ಅಧಿಕೃತ ಪಟ್ಟಿಯನ್ನು ಇವತ್ತಷ್ಟೇ ನೀಡಿದ್ದೇನೆ. ನಾವು ನಮ್ಮ ಪಟ್ಟಿಯನ್ನು ಗೌಪ್ಯವಾಗಿಡಬೇಕು, ಆ ಕೆಲಸ ಮಾಡುತ್ತೇವೆ ಎಂದರು.

ಎಐಸಿಸಿ ಕಾರ್ಯದರ್ಶಿಗಳಾದ ರೋಜಿ ಜಾನ್‌, ಅಭಿಷೇಕ್‌ ದತ್, ಮಯೂರ ಜೈಕುಮಾರ್‌ ಸೇರಿದಂತೆ ಹಲವರು ಹಾಜರಿದ್ದರು.ಸಚಿವರು ಮಾತ್ರವಲ್ಲ ರಾಜಕೀಯದಲ್ಲಿ ಯಾರು ಬೇಕಾದರೂ ಸ್ಪರ್ಧಿಸಬಹುದು. ಎಲ್ಲರಿಗೂ ಅವಕಾಶವಿರುತ್ತದೆ. ನಮಗೆ ಪಕ್ಷ ಗೆಲ್ಲುವುದು ಮುಖ್ಯ.- ಡಿ.ಕೆ. ಶಿವಕುಮಾರ್, ಉಪಮುಖ್ಯಮಂತ್ರಿ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅನಕ್ಷರತೆ ಬಾಲ್ಯ ವಿವಾಹ ಕೇಸ್‌ ರದ್ದತಿಗೆ ಆಧಾರವಾಗದು: ಕೋರ್ಟ್‌
ಕೆಎಸ್‌ಡಿಎಲ್‌ನಿಂದ ₹400ನ ಮಲ್ಲಿಗೆ ಸೋಪ್‌!