
ಕನ್ನಡಪ್ರಭ ವಾರ್ತೆ, ಪಾವಗಡ
ತಾಲೂಕಿನ ಅರಸೀಕೆರೆ ಗ್ರಾಮದ ಸುದಾ (33) ಮೃತಪಟ್ಟ ಮಹಿಳೆ. ನವೆಂಬರ್ 17ರಂದು ಮಧ್ಯಾಹ್ನ ಸುಮಾರು 12 ಗಂಟೆಗೆ ಪಾವಗಡ ಸರ್ಕಾರಿ ಆಸ್ಪತ್ರೆಯಲ್ಲಿ ಅವರಿಗೆ ಸಿಜೇರಿಯನ್ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ ಮಾಡಿಸಲಾಗಿತ್ತು. ಹೆಣ್ಣು ಮಗುವಿಗೆ ಜನ್ಮ ನೀಡಿದ ಸುದಾ ಅವರಿಗೆ ರಾತ್ರಿ ತೀವ್ರ ಎದೆನೋವು ಹಾಗೂ ಹೊಟ್ಟೆನೋವು ಕಾಣಿಸಿಕೊಂಡಿದೆ ಎನ್ನಲಾಗಿದೆ. ಈ ಕುರಿತು ವೈದ್ಯರಿಗೆ ಮಾಹಿತಿ ನೀಡಿದರೂ ಸರಿಯಾಗಿ ಸ್ಪಂದಿಸಿಲ್ಲ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ. ರಾತ್ರಿ ಸುಮಾರು 12.30ರ ವೇಳೆಗೆ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಹದಗೆಟ್ಟ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಾಣಿ ವಿಲಾಸ್ ಆಸ್ಪತ್ರೆಗೆ ಕರೆದೊಯ್ಯಲು ನಿರ್ಧರಿಸಲಾಗಿತ್ತು. ಆದರೆ, ಮಾರ್ಗಮಧ್ಯೆ ಚಂದ್ರಬಾವಿ ಬಳಿ ರಾತ್ರಿ ಸುಮಾರು 1.30ರ ವೇಳೆಗೆ ಸುದಾ ಮೃತಪಟ್ಟಿದ್ದಾರೆ ಎಂದು ಕುಟುಂಬದವರು ತಿಳಿಸಿದ್ದಾರೆ.
ಹೆರಿಗೆಯ ನಂತರ ತೀವ್ರ ನೋವು ಕಾಣಿಸಿಕೊಂಡಿದ್ದರೂ ಸಮರ್ಪಕ ಚಿಕಿತ್ಸೆ ನೀಡದಿರುವುದೇ ಸಾವಿಗೆ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಆಸ್ಪತ್ರೆಯ ವೈದ್ಯಕೀಯ ವ್ಯವಸ್ಥೆಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಅವರು, ಘಟನೆಯ ಕುರಿತು ಸೂಕ್ತ ತನಿಖೆ ನಡೆಸಿ ನ್ಯಾಯ ಒದಗಿಸುವಂತೆ ಒತ್ತಾಯಿಸಿದ್ದಾರೆ.ಮೃತ ಸುಧಾ ಅವರು ಪತಿ ಏಕಾಂತೇಶ್ವರ ಹಾಗೂ ಎಂಟು ವರ್ಷದ ಪುತ್ರಿ ಉನ್ನತಿಯನ್ನು ಅಗಲಿದ್ದಾರೆ. ಎರಡನೇ ಹೆರಿಗೆಯಲ್ಲಿ ಜನಿಸಿರುವ ನವಜಾತ ಹೆಣ್ಣು ಮಗು ಆರೋಗ್ಯವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಈ ಸಂಬಂಧ ಪಾವಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.