ಬ್ರಹ್ಮಾವರ: ಇಲ್ಲಿನ ಗ್ರಾಮಾಭಿವೃದ್ಧಿ ಮತ್ತು ಸ್ವ ಉದ್ಯೋಗ ತರಬೇತಿ ಸಂಸ್ಥೆ (ರುಡ್‌ಸೆಟ್)ಯಲ್ಲಿ ತರಬೇತಿ ಪಡೆಯುತ್ತಿರುವ ಶಿಬಿರಾರ್ಥಿಗಳಿಗೆ ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮ ಹಾಗೂ ಜಾಗೃತಿ ಜಾಥಾ ನಡೆಯಿತು.
ಪ್ರತಿಯೊಬ್ಬರೂ ಸ್ವತಃ ಜಾಗೃತರಾಗುವುದರ ಜೊತೆಗೆ ತಮ್ಮ ಸುತ್ತಮುತ್ತಲಿನವರಲ್ಲೂ ಜಾಗೃತಿ ಮೂಡಿಸುವ ಜವಾಬ್ದಾರಿಯನ್ನು ಹೊತ್ತು, ಉತ್ತಮ ನಾಗರಿಕ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಕರೆ ನೀಡಿದರು.ಇನ್ನೋರ್ವ ಮುಖ್ಯ ಅತಿಥಿಯಾಗಿದ್ದ ಜಿಲ್ಲಾ ಲೀಡ್ ಡಿಸ್ಟ್ರಿಕ್ಟ್ ಮ್ಯಾನೇಜರ್ ಹರೀಶ್ ಜಿ. ಮಾತನಾಡಿ, ದೇಶದ ಅಭಿವೃದ್ಧಿಗೆ ಮಾದಕ ವಸ್ತುಗಳ ಬಳಕೆಯನ್ನು ಸಂಪೂರ್ಣವಾಗಿ ತಡೆಗಟ್ಟುವುದು ಅತ್ಯಗತ್ಯವಾಗಿದೆ. ಕಾನೂನು ಜಾರಿಯಲ್ಲಿದ್ದರೂ ಸಮಾಜ ವಿರೋಧಿ ಶಕ್ತಿಗಳು ಯುವಜನರನ್ನು ತಪ್ಪು ದಾರಿಗೆಳೆಯುತ್ತಿರುವುದು ಆತಂಕಕಾರಿ. ಇಂತಹ ಕಾನೂನುಬಾಹಿರ ಚಟುವಟಿಕೆಗಳು ಕಂಡುಬಂದಲ್ಲಿ ಸಂಬಂಧಪಟ್ಟ ಇಲಾಖೆಗೆ ತಕ್ಷಣ ಮಾಹಿತಿ ನೀಡಿ, ಜಾಗೃತಿ ಮೂಡಿಸುವ ಕಾರ್ಯದಲ್ಲಿ ಎಲ್ಲರೂ ಭಾಗಿಯಾಗಬೇಕು ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ರುಡ್‌ಸೆಟ್ ಸಂಸ್ಥೆಯ ನಿರ್ದೇಶಕ ಡಾ. ಬೊಮ್ಮಯ್ಯ ಎಂ. ಮಾತನಾಡಿ, ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಯುವಜನರಲ್ಲಿ ಅರಿವು ಮೂಡಿಸುವುದು ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ. ಉತ್ತಮ ಚಿಂತನೆ ಹಾಗೂ ಉತ್ತಮ ಜೀವನಶೈಲಿಯ ಮೂಲಕ ವ್ಯಕ್ತಿ ಮತ್ತು ದೇಶದ ಅಭಿವೃದ್ಧಿಗೆ ಪ್ರತಿಯೊಬ್ಬರೂ ಕೊಡುಗೆ ನೀಡಬೇಕು ಎಂದು ಶಿಬಿರಾರ್ಥಿಗಳಿಗೆ ಕರೆ ನೀಡಿದರು.ಈ ಸಂದರ್ಭದಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆಯ ಪ್ರೊಬೇಷನರಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಆಶ್ರಿತ ಶೆಟ್ಟಿ ಅವರು ಮಾದಕ ವಸ್ತುಗಳ ದುರುಪಯೋಗ ತಡೆಗಟ್ಟುವ ಕುರಿತು ಪ್ರತಿಜ್ಞಾ ವಿಧಿ ಬೋಧಿಸಿದರು. ಬಳಿಕ ಗಣ್ಯರು, ಸಿಬ್ಬಂದಿ ಹಾಗೂ ಸಂಸ್ಥೆಯ ಶಿಬಿರಾರ್ಥಿಗಳು ಬ್ರಹ್ಮಾವರ ರುಡ್‌ಸೆಟ್ ಸಂಸ್ಥೆಯಿಂದ ಕೃಷಿ ವಿಜ್ಞಾನ ಕೇಂದ್ರದವರೆಗೆ ಮಾದಕ ದ್ರವ್ಯ ವಿರೋಧಿ ಜಾಗೃತಿ ಜಾಥಾ ನಡೆಸಿದರು.ಉಪನ್ಯಾಸಕಿ ಚೈತ್ರ ಕೆ. ನಿರೂಪಿಸಿದರು. ಕಚೇರಿ ಸಹಾಯಕ ಶಾಂತಪ್ಪ ಸ್ವಾಗತಿಸಿ, ಹಿರಿಯ ಕಚೇರಿ ಸಹಾಯಕ ರವಿ ವಂದಿಸಿದರು.