ಕಾಂಗ್ರೆಸ್‌ ಸರ್ಕಾರದಿಂದ ರೈತ ವಿರೋಧಿ ನಡೆ

KannadaprabhaNewsNetwork |  
Published : Apr 07, 2024, 01:50 AM IST
ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಎ.ಎಸ್‌.ಪಾಟೀಲ ನಡಹಳ್ಳಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು | Kannada Prabha

ಸಾರಾಂಶ

ಬೆಳಗಾವಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 9 ತಿಂಗಳು ಕಳೆದರೂ ರೈತಪರ ಯೋಜನೆ ಮಾಡದೆ, ರೈತ ವಿರೋಧಿ‌ ನೀತಿ ಅನುಸರಿಸುತ್ತಿದೆ ಎಂದು ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಆರೋಪಿಸಿದರು. ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಬಿಜೆಪಿ ಅವಧಿಯಲ್ಲಿ ಜಾರಿಗೆ ತಂದಿದ್ದ ಸಾಕಷ್ಟು ರೈತಪರ ಯೋಜನೆಗಳನ್ನು ಸ್ಥಗಿತಗೊಳಿಸಿ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದರು.

ಕನ್ನಡಪ್ರಭ ವಾರ್ತೆ ಬೆಳಗಾವಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 9 ತಿಂಗಳು ಕಳೆದರೂ ರೈತಪರ ಯೋಜನೆ ಮಾಡದೆ, ರೈತ ವಿರೋಧಿ‌ ನೀತಿ ಅನುಸರಿಸುತ್ತಿದೆ ಎಂದು ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಆರೋಪಿಸಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಬಿಜೆಪಿ ಅವಧಿಯಲ್ಲಿ ಜಾರಿಗೆ ತಂದಿದ್ದ ಸಾಕಷ್ಟು ರೈತಪರ ಯೋಜನೆಗಳನ್ನು ಸ್ಥಗಿತಗೊಳಿಸಿ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದರು.

ರಾಜ್ಯದಲ್ಲಿ ಭೀಕರ ಬರ ಇದ್ದರೂ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸುತ್ತಿಲ್ಲ. ರೈತರಿಗೆ ಸಮರ್ಪಕ ವಿದ್ಯುತ್ ಸರಬರಾಜು ಮಾಡಲು ಸಾಧ್ಯವಾಗಲಿಲ್ಲ ಎಂದು ಟೀಕಿಸಿದರು.

ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆಯಡಿ ಕೇಂದ್ರ ಸರ್ಕಾರದಿಂದ ₹ 6 ಸಾವಿರ ಹಾಗೂ ರಾಜ್ಯ ಸರ್ಕಾರದಿಂದ ₹ 4 ಸಾವಿರ ಒಟ್ಟು ₹10 ಸಾವಿರ ನೆರವನ್ನು ನೇರವಾಗಿ ರೈತರ ಖಾತೆಗಳಿಗೆ ಜಮೆಮಾಡಲಾಗುತ್ತಿತ್ತು. ಬಸವರಾಜ ಬೊಮ್ಮಾಯಿ ನೇತೃತ್ವದ ಅವಧಿಯಲ್ಲಿ ರೈತರ ಮಕ್ಕಳಿಗೆ ಶಿಷ್ಯವೇತನ ‌ನೀಡುವ ಯೋಜನೆ ಜಾರಿಗೆ ತಂದಿದ್ದರು. ಹಾಲು ಉತ್ಪಾದಕರಿಗೆ ಸರ್ಕಾರ ಪ್ರೋತ್ಸಾಹ ಹಣ ನೀಡುತ್ತಿತ್ತು. ಈ ರೈತಪರ ಯೋಜನೆಗಳನ್ನು ಸಿದ್ದರಾಮಯ್ಯ ಸರ್ಕಾರ ನಿಲ್ಲಿಸಿದೆ‌ ಎಂದು ಆರೋಪಿಸಿದರು.

ರಾಜ್ಯದಲ್ಲಿ 2 ಲಕ್ಷ 70 ಸಾವಿರ ಕೋಟಿ ಬಜೆಟ್ ಮಂಡಿಸಿದೆ. ಆದರೆ, ಸರ್ಕಾರ ರೈತರ ಪರ ಒಂದೇ ಒಂದು ಯೋಜನೆ ಘೋಷಣೆ ಮಾಡಿಲ್ಲ. ರಾಜ್ಯದಲ್ಲಿ ಭೀಕರ ಬರ ಇದೆ. ಪ್ರಕೃತಿ ವಿಕೋಪವಾದಾಗ ಎನ್ ಡಿಆರ್ ಎಫ್, ಎಸ್ ಡಿಆರ್ ಎಫ್ ತಂಡಗಳು ಸಹಾಯ ಮಾಡುತ್ತವೆ. ಆದರೆ, ಈವರೆಗೆ ರಾಜ್ಯ ಸರ್ಕಾರ ಇವರ ಸಹಾಯ ಕೇಳಿಲ್ಲ ಎಂದು ದೂರಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದಾಗ ಬರಗಾಲ ಎದುರಾಗುತ್ತದೆ. ಇಷ್ಟೊಂದು ಭೀಕರತೆ ನಾವು ಎಲ್ಲಿಯೂ ನೋಡಿಲ್ಲ. ದಿನದಿಂದ ದಿನಕ್ಕೆ ಬಿಸಿಲಿನ ಬೇಗೆ ಹೆಚ್ಚಾಗುತ್ತಿದೆ. ಇಂಥ ಸಂದರ್ಭದಲ್ಲಿ ಸರ್ಕಾರ ರೈತರ ಸಂಕಷ್ಟಕ್ಕೆ ಸ್ಪಂದಿಸುತ್ತಿಲ್ಲ ಎಂದು ಅವರು ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಸುಭಾಷ ಪಾಟೀಲ ಮತ್ತು ಮಹಾನಗರ ಜಿಲ್ಲಾಧ್ಯಕ್ಷೆ ಗೀತಾ ಸುತಾರ ಮೊದಲಾದವರು ಉಪಸ್ಥಿತರಿದ್ದರು.

PREV

Recommended Stories

ಸಹಕಾರಿ ತತ್ವದಿಂದ ಕಟ್ಟಕಡೆ ವ್ಯಕ್ತಿಗೂ ಸಹಾಯ
ವೀರಶೈವ ಲಿಂಗಾಯತರಲ್ಲಿ ಸಮಾಜ ಒಗ್ಗಟ್ಟು ಮುಖ್ಯ