ಸಂಸದ ಡಾ.ಸಿದ್ದೇಶ್ವರ ಆಕ್ರೋಶ । ಹುಬ್ಬಳ್ಳಿಯಲ್ಲಿ ಕರಸೇವಕರ ಬಂಧನ ಖಂಡಿಸಿ ಬಿಜೆಪಿ ಪ್ರತಿಭಟನೆ
ಶ್ರೀರಾಮ ಜನ್ಮಭೂಮಿ ಹೋರಾಟದ 1992ರ ಗಲಭೆಯ ಹಳೆ ಪ್ರಕರಣಗಳ ಕೆದಕಿ, ಹೋರಾಟಗಾರರ ಬಂಧಿಸಿದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಜಿಲ್ಲಾ ಘಟಕದಿಂದ ನಗರದಲ್ಲಿ ಬುಧವಾರ ಪ್ರತಿಭಟಿಸಲಾಯಿತು.
ನಗರದ ಜಿಲ್ಲಾಡಳಿತ ಭವನ ಬಳಿ ಸಂಸದ ಡಾ.ಜಿ.ಎಂ.ಸಿದ್ದೇಶ್ವರ, ಬಿಜೆಪಿ ಜಿಲ್ಲಾಧ್ಯಕ್ಷ ಎಸ್.ಎಂ.ವೀರೇಶ ಹನಗವಾಡಿ, ಮಾಜಿ ಶಾಸಕ ಎಸ್.ವಿ.ರಾಮಚಂದ್ರ ಇತರರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಬಿಜೆಪಿ ಮುಖಂಡರು, ಕಾರ್ಯಕರ್ತರು ನಂತರ ಜಿಲ್ಲಾಡಳಿತ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.ಈ ವೇಳೆ ಮಾತನಾಡಿದ ಸಂಸದ ಡಾ.ಜಿ.ಎಂ.ಸಿದ್ದೇಶ್ವರ, ಅಯೋಧ್ಯೆಯಲ್ಲಿ ಜ.22ರಂದು ಶ್ರೀರಾಮನ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಇದೆ. ಇಡೀ ದೇಶವೇ ಐತಿಹಾಸಿಕ ಕ್ಷಣಗಳ ಕಣ್ತುಂಬಿಕೊಳ್ಳಲು ಕಾತುರವಾಗಿದೆ. ಹೀಗಿರುವಾಗ ರಾಜ್ಯ ಕಾಂಗ್ರೆಸ್ ಸರ್ಕಾರವು 1992ರ ಗಲಭೆಯ ಹಳೆ ಪ್ರಕರಣಗಳಿಗೆ ಸಂಬಂಧಿಸಿ ಹುಬ್ಬಳ್ಳಿಯಲ್ಲಿ ವಿಶ್ವ ಹಿಂದೂ ಪರಿಷತ್ ಮುಖಂಡ ಶ್ರೀಕಾಂತ ಪೂಜಾರಿ ಬಂಧಿಸಿದ್ದು ಖಂಡನೀಯ ಎಂದರು.
ಪಕ್ಷದ ಜಿಲ್ಲಾಧ್ಯಕ್ಷ ಎಸ್.ಎಂ.ವೀರೇಶ ಹನಗವಾಡಿ ಮಾತನಾಡಿ, 31 ವರ್ಷದ ಹಳೆಯ ಪ್ರಕರಣಗಳ ಕೆದಕಿ, ಕರ ಸೇವಕರ ಬಂಧಿಸುವ ದುಸ್ಸಾಹಸ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ. ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಇದ್ದಾಗಲೇ ಕಾಂಗ್ರೆಸ್ ಸರ್ಕಾರವು ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ದೂರಿದರು.
ಬಂಧಿತರಾದ ಶ್ರೀಕಾಂತ ಪೂಜಾರಿ ಸೇರಿ ಇಬ್ಬರೂ ಹಿಂದೂ ಕಾರ್ಯಕರ್ತರ ತಕ್ಷಣ ಬಿಡುಗಡೆ ಮಾಡಬೇಕು. ಈ ಬಗ್ಗೆ ಉದಾಸೀನ ಮಾಡಿದರೆ ತೀವ್ರ ಸ್ವರೂಪದ ಹೋರಾಟ ನಡೆಸಬೇಕಾಗುತ್ತದೆ. ಹಿಂದೂಗಳಲ್ಲಿ ಭಯ ಹುಟ್ಟು ಹಾಕಲು ಮುಂದಾಗುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ, ಸಿದ್ದರಾಮಯ್ಯ ಆಡಳಿತಕ್ಕೆ ಇನ್ನು ಕೆಲವೇ ತಿಂಗಳಲ್ಲಿ ನಡೆಯುವ ಲೋಕಸಭೆ ಚುನಾವಣೆಯಲ್ಲಿ ಜನರೇ ಭಯ ಹುಟ್ಟಿಸುವುದು ನಿಶ್ಚಿತ ಎಂದು ಎಚ್ಚರಿಸಿದರು.
ಎಸ್.ಎಂ.ವೀರೇಶ ಹನಗವಾಡಿ, ಜಿಲ್ಲಾಧ್ಯಕ್ಷ