ಕನ್ನಡಪ್ರಭ ವಾರ್ತೆ ಬೆಂಗಳೂರು
ಸೋಮವಾರ ಆಹಾರ ಇಲಾಖೆ ಸಚಿವ ರಿಜ್ವಾನ್ ಅರ್ಷದ್ ಅವರು, ಮೈಸೂರಿನ ಬಂಡಿಪಾಳ್ಯ ಎಪಿಎಂಸಿ ಮಾರುಕಟ್ಟೆಯಲ್ಲಿ ನಡೆದ ಕಾರ್ಯಾಚರಣೆಯ ನೇತೃತ್ವ ವಹಿಸಿದ್ದು ವಿಶೇಷ. ಎಪಿಎಂಸಿಗಳಲ್ಲಿ ತೂಕದಲ್ಲಿ ರೈತರಿಗೆ ಮೋಸ ಮಾಡಲಾಗುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಸಚಿವ ರಿಜ್ವಾನ್ ಅರ್ಷದ್ ಅವರ ಸೂಚನೆ ಮೇರೆಗೆ 10ಕ್ಕೂ ಹೆಚ್ಚು ಅಧಿಕಾರಿಗಳು ಮತ್ತು ಸಿಬ್ಬಂದಿ ಬೆಂಗಳೂರು, ಮೈಸೂರು, ಗಂಗಾವತಿ, ರಾಯಚೂರು, ತುಮಕೂರು, ಹುಬ್ಬಳ್ಳಿ ಮತ್ತು ಬ್ಯಾಡಗಿ ಕೃಷಿ ಉತ್ಪನ್ನ ಮಾರುಕಟ್ಟೆಗಳಲ್ಲಿ ಬೆಳಗ್ಗೆ 6 ಗಂಟೆಯಿಂದಲೇ ಏಕಕಾಲಕ್ಕೆದಾಳಿ ನಡೆಸಿ ತಪಾಸಣೆ ಆರಂಭಿಸಿದರು.
ರಾಜ್ಯಾದ್ಯಂತ 9 ಮಾರುಕಟ್ಟೆಗಳಲ್ಲಿ ಒಟ್ಟು 711 ಅಂಗಡಿಗಳನ್ನು ತಪಾಸಣೆ ನಡೆಸಿದ ಅಧಿಕಾರಿಗಳು, ತೂಕದಲ್ಲಿ ಮೋಸ, ದೋಷಪೂರಿತ ಯಂತ್ರಗಳ ಬಳಕೆ, ನಿಗದಿತ ಅವಧಿಯೊಳಗೆ ಇಲಾಖೆಯಿಂದ ತೂಕದ ಯಂತ್ರಗಳ ಸತ್ಯಾಪನೆ ಮತ್ತು ಮುದ್ರೆ ಮಾಡಿಸಿಕೊಳ್ಳದಿರುವುದು, ಸತ್ಯಾಪನೆ ಪ್ರಮಾಣಪತ್ರವನ್ನು ತಮ್ಮ ಅಂಗಡಿಗಳಲ್ಲಿ ಪ್ರದರ್ಶನ ಮಾಡದಿರುವ ಆರೋಪಗಳ ಮೇಲೆ 275 ವರ್ತಕರ ವಿರುದ್ಧ ಮೊಕದ್ದಮೆ ದಾಖಲಿಸಿದ್ದಾರೆ. ನಿಯಮ ಉಲ್ಲಂಘನೆಗಳಿಗಾಗಿ 9.80 ಲಕ್ಷ ರು. ದಂಡ ವಿಧಿಸಿದ್ದಾರೆ. ಜೊತೆಗೆ ಇದೋಷಪೂರಿತ ತೂಕದ ಯಂತ್ರಗಳು ಹಾಗು ಸತ್ಯಾಪನೆ ಮತ್ತು ಮುದ್ರೆ ಮಾಡಿಸಿಕೊಳ್ಳದ ತೂಕದ ಯಂತ್ರಗಳನ್ನು ವಶಪಡಿಸಿಕೊಂಡರು.ಮೈಸೂರಿನ ಬಂಡಿಪಾಳ್ಯ ಮಾರುಕಟ್ಟೆಯಲ್ಲಿ ಸಚಿವ ರಿಜ್ವಾನ್ ಅರ್ಷದ್ ಅವರು ಹಲವು ಮಳಿಗೆಗಳಲ್ಲಿ ರೈತರ ಉತ್ಪನ್ನಗಳನ್ನು ಖುದ್ದಾಗಿ ತೂಕ ಮಾಡಿಸಿ ದೋಷಪೂರಿತ ಎಂದು ಕಂಡು ಬಂದ ಯಂತ್ರಗಳನ್ನು ಜಪ್ತಿ ಮಾಡಿಸಿದರು. ಮೈಸೂರಿನ ಎಪಿಎಂಸಿ ಮಾರುಕಟ್ಟೆಯೊಂದರಲ್ಲೇ ಸೋಮವಾರ 180 ತಪಾಸಣೆ ನಡೆಸಿ 60 ಮೊಕದ್ದಮೆಗಳನ್ನು ದಾಖಲಿಸಲಾಯಿತು.
ರಾಯಚೂರು ಎಪಿಎಂಸಿ 22, ತುಮಕೂರು ಎಪಿಎಂಸಿಯಲ್ಲಿ 14, ಹುಬ್ಬಳ್ಳಿ 21, ಬ್ಯಾಡಗಿ 37, ಮೈಸೂರು 58, ಬೆಂಗಳೂರು ಹುಸ್ಕೂರು 37, ಯಶವಂತಪುರ 51, ಬೆಂಗಳೂರು-ದಾಸನಪುರ 26, ಗಂಗಾವತಿ 9 ಪ್ರಕರಣಗಳನ್ನು ದಾಖಲು ಮಾಡಲಾಗಿದ್ದು, 9.79 ಲಕ್ಷ ರು.ದಂಡ ವಿಧಿಸಲಾಗಿದೆ ಎಂದು ಆಹಾರ ಇಲಾಖೆ ತಿಳಿಸಿದೆ.