ಸಮಾಜ ತಾರತಮ್ಯ ಹೋಗಲಾಡಿಸಲು ಶ್ರಮಿಸಿದ ಅಪ್ಪಣ್ಣ: ಕೆ.ಇ. ಚಿದಾನಂದಪ್ಪ

KannadaprabhaNewsNetwork |  
Published : Jul 11, 2025, 11:48 PM IST
ಬಳ್ಳಾರಿಯಲ್ಲಿ ಜರುಗಿದ ಶಿವಶರಣ ಹಡಪದ ಅಪ್ಪಣ್ಣ ಜಯಂತ್ಯೋತ್ಸವಕ್ಕೆ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ ಚಾಲನೆ ನೀಡಿದರು.  | Kannada Prabha

ಸಾರಾಂಶ

ಬಳ್ಳಾರಿ ನಗರದ ಡಾ. ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಏರ್ಪಡಿಸಿದ್ದ ಶಿವಶರಣ ಹಡಪದ ಅಪ್ಪಣ್ಣ ಜಯಂತಿ ಹಿನ್ನೆಲೆಯಲ್ಲಿ ಹಡಪದ ಅಪ್ಪಣ್ಣ ಭಾವಚಿತ್ರಕ್ಕೆ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ. ಚಿದಾನಂದಪ್ಪ ಪುಪ್ಪಾರ್ಚನೆ ಮಾಡಿದರು.

ಬಳ್ಳಾರಿ: ಹನ್ನೆರಡನೇ ಶತಮಾನದ ವಚನ ಚಳವಳಿ ಮತ್ತು ಸಾಮಾಜಿಕ ಕ್ರಾಂತಿಯ ಹರಿಕಾರರಲ್ಲಿ ಒಬ್ಬರಾಗಿದ್ದ ಶಿವಶರಣ ಹಡಪದ ಅಪ್ಪಣ್ಣ ಅವರು ತಮ್ಮ ವಚನಗಳ ಮೂಲಕ ಸಮಾಜದ ತಾರತಮ್ಯ ಹೋಗಲಾಡಿಸಿದರು ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ. ಚಿದಾನಂದಪ್ಪ ಹೇಳಿದರು.

ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಸಂಯುಕ್ತಾಶ್ರಯದಲ್ಲಿ ನಗರದ ಡಾ. ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಏರ್ಪಡಿಸಿದ್ದ ಶಿವಶರಣ ಹಡಪದ ಅಪ್ಪಣ್ಣ ಜಯಂತಿ ಹಿನ್ನೆಲೆಯಲ್ಲಿ ಹಡಪದ ಅಪ್ಪಣ್ಣ ಭಾವಚಿತ್ರಕ್ಕೆ ಪುಪ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು. ಹಡಪದ ಅಪ್ಪಣ್ಣನವರು ಬಸವಣ್ಣನವರ ಅತ್ಯಂತ ನಿಕಟವಾಗಿದ್ದರು. “ಅಪ್ಪಣ್ಣ ಪ್ರಿಯ ಚನ್ನಬಸವಣ್ಣ” ಎಂಬ ಅಂಕಿತನಾಮದಿಂದ 250ಕ್ಕೂ ಹೆಚ್ಚು ವಚನಗಳನ್ನು ಹಡಪದ ಅಪ್ಪಣ್ಣ ರಚಿಸಿದ್ದಾರೆ ಎಂದು ಹೇಳಿದರು.

ನಿವೃತ್ತ ಮುಖ್ಯಗುರು ಸಿ. ಕೊಟ್ರಪ್ಪ ವಿಶೇಷ ಉಪನ್ಯಾಸ ನೀಡಿದರು. ಜಂಗಮ ಹೊಸಹಳ್ಳಿಯ ಶ್ರೀ ಶಿವಲಿಂಗ ಶಿವಾಚಾರ್ಯ ಸಾನ್ನಿಧ್ಯ ವಹಿಸಿದ್ದರು. ಸಿರುಗುಪ್ಪದ ವೀರೇಶ ದಳವಾಯಿ ಅವರ ತಂಡದವರು ವಚನ ಸಂಗೀತ ಪ್ರಸ್ತುತ ಪಡಿಸಿದರು. ಸಿಂಧುವಾಳದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕೋಲಾಟ ಕಲೆಯ ಪ್ರದರ್ಶನ ನೀಡಿದ ಮಕ್ಕಳನ್ನು ಸನ್ಮಾನಿಸಲಾಯಿತು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ. ನಾಗರಾಜ, ಬಳ್ಳಾರಿ ಜಿಲ್ಲಾ ಹಡಪದ ಅಪ್ಪಣ್ಣ ಸೇವಾ ಸಮಿತಿ ಅಧ್ಯಕ್ಷ ಎಚ್. ರುದ್ರಪ್ಪ, ಕುರುಗೋಡು ತಾಲೂಕು ಹಡಪದ ಅಪ್ಪಣ್ಣ ಸೇವಾ ಸಮಿತಿ ಅಧ್ಯಕ್ಷ ಎಚ್. ಮಂಜುನಾಥ, ಬಳ್ಳಾರಿ ತಾಲೂಕು ಹಡಪದ ಅಪ್ಪಣ್ಣ ಸೇವಾ ಸಮಿತಿ ಅಧ್ಯಕ್ಷ ಸದಾಶಿವ ಉಪಸ್ಥಿತರಿದ್ದರು.

ಶಿವಶರಣ ಹಡಪದ ಅಪ್ಪಣ್ಣ ಅವರ ಜಯಂತಿ ಅಂಗವಾಗಿ ನಗರದಲ್ಲಿ ಸಂಭ್ರಮದ ಮೆರವಣಿಗೆ ನಡೆಯಿತು. ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ಆರಂಭವಾಗಿ ಗಡಿಗಿ ಚೆನ್ನಪ್ಪ ವೃತ್ತ, ಬೆಂಗಳೂರು ರಸ್ತೆ, ಹಳೇ ಬ್ರೂಸ್‌ಪೇಟೆ ಪೊಲೀಸ್ ಠಾಣೆ ರಸ್ತೆ, ತೇರು ಬೀದಿ, ಎಚ್.ಆರ್. ಗವಿಯಪ್ಪ ವೃತದ ಮೂಲಕ ಡಾ. ಜೋಳದರಾಶಿ ದೊಡ್ಡನಗೌಡ ರಂಗಮದಿರದ ವೇದಿಕೆ ಸಭಾಂಗಣ ತಲುಪಿ ಸಂಪನ್ನಗೊಂಡಿತು.

PREV