ಕನ್ನಡಪ್ರಭ ವಾರ್ತೆ ಮಡಿಕೇರಿ
ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯ ಎಚ್.ಎಸ್.ಮುತ್ತಪ್ಪ ಅವರು ಹೊದ್ದೂರು, ಹೊದವಾಡ ಸೇರಿದಂತೆ ಕಾವೇರಿ ನದಿ ಪಾತ್ರದ ಪ್ರವಾಹ ಪೀಡಿತ ಪ್ರದೇಶದಲ್ಲಿ ಪರಿಶಿಷ್ಟರು ವಾಸ ಮಾಡುತ್ತಿದ್ದು, ಇವರಿಗೆ ಶಾಶ್ವತ ನೆಲೆ ಕಲ್ಪಿಸಬೇಕು ಎಂದು ಮನವಿ ಮಾಡಿದರು.
ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವಾಸ ಮಾಡುತ್ತಿರುವ ಕುಟುಂಬಗಳಿಗೆ ನಿವೇಶನ ಕಲ್ಪಿಸುವುದರ ಜೊತೆಗೆ ಮನೆ ನಿರ್ಮಿಸಿಕೊಡುವಂತಾಗಬೇಕು ಎಂದು ಮುತ್ತಪ್ಪ ಅವರು ಕೋರಿದರು.ಈ ಸಂದರ್ಭದಲ್ಲಿ ಮಾತನಾಡಿದ ಹೊದ್ದೂರು-ಹೊದವಾಡ ಸೇರಿದಂತೆ ಪ್ರವಾಹ ಪೀಡಿತ ಪ್ರದೇಶದಲ್ಲಿನ ಜನರನ್ನು ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್ ಅವರು ಮಾಹಿತಿ ನೀಡಿದರು.
ಮತ್ತೊಬ್ಬ ಸಮಿತಿ ಸದಸ್ಯರಾದ ಜೆ.ಎಲ್.ಜನಾರ್ಧನ ಅವರು ಮಾತನಾಡಿ ಗಂಗಾ ಕಲ್ಯಾಣ ಯೋಜನೆಯಡಿ ಹಲವು ಕೆಲಸಗಳು ಬಾಕಿ ಇದ್ದು, ಕೂಡಲೇ ಪೂರ್ಣಗೊಳಿಸಬೇಕಿದೆ ಎಂದು ಕೋರಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕರಾದ ಚಂದ್ರಪ್ಪ ಕೆಲವು ಯೋಜನೆಗಳು ಕೇಂದ್ರ ಕಚೇರಿಯಿಂದ ಟೆಂಡರ್ ಪ್ರಕ್ರಿಯೆ ನಡೆದಿದ್ದು, ಈ ಸಂಬಂಧ ಕೇಂದ್ರ ಕಚೇರಿ ಗಮನಕ್ಕೆ ತರಲಾಗಿದೆ ಎಂದು ತಿಳಿಸಿದರು.
ವೈದ್ಯರ ನಿಯೋಜನೆಗೆ ಸರ್ಕಾರಕ್ಕೆ ಪತ್ರ:
ಮತ್ತೊಬ್ಬ ಸದಸ್ಯರಾದ ಪಿ.ಪಿ.ಸುಕುಮಾರ್ ಹಾಗೂ ಜಾಯ್ಸ್ ಮೆನೇಜಸ್ ಅವರು ಮಾತನಾಡಿ ಬಾಳೆಗುಂಡಿ ವಾಲ್ನೂರು ತ್ಯಾಗತ್ತೂರು ವಿವಿಧ ಹಾಡಿಗಳಲ್ಲಿ ವಾಸಿಸುವ ಪರಿಶಿಷ್ಟ ವರ್ಗದ ಜನರು ಆಧಾರ್ ಕಾರ್ಡ್ ಇಲ್ಲದೆ ಪಡಿತರ ಚೀಟಿ ಪಡೆಯಲು ಸಾಧ್ಯವಾಗಿಲ್ಲ, ಆದ್ದರಿಂದ ಆಧಾರ್ ಇಲ್ಲದ ಕುಟುಂಬಗಳನ್ನು ಗುರ್ತಿಸಿ ಆಧಾರ್ ಕಾರ್ಡ್ ಮಾಡಿಸುವಂತಾಗಬೇಕು ಎಂದರು.
ಸಮಿತಿ ಸದಸ್ಯರಾದ ರಂಗಸ್ವಾಮಿ ಅವರು ಮಾತನಾಡಿ ಪೌರಕಾರ್ಮಿಕರ ದಿನಾಚರಣೆಯನ್ನು ಗ್ರಾ.ಪಂ.ಮಟ್ಟದಲ್ಲಿಯೂ ಆಯೋಜಿಸುವಂತಾಗಬೇಕು ಎಂದು ಕೋರಿದರು.
ಸುಂಟಿಕೊಪ್ಪ ಹೋಬಳಿ ಕೇಂದ್ರದಲ್ಲಿ ಪೌರಕಾರ್ಮಿಕರಿಗೆ ಸ್ವಂತ ನಿವೇಶನ ಇಲ್ಲದೆ ಗುಡಿಸಿಲಿನಲ್ಲಿ ವಾಸ ಮಾಡುತ್ತಿದ್ದು, ಇವರಿಗೆ ಜಾಗ ಕಾಯ್ದಿರಿಸಿ ಮನೆ ನಿರ್ಮಿಸಿಕೊಡುವಂತಾಗಬೇಕು ಎಂದು ರಂಗಸ್ವಾಮಿ ಕೋರಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸುಂಟಿಕೊಪ್ಪದಲ್ಲಿ ಸರ್ಕಾರಿ ಭೂಮಿ ಸಿಗುವುದು ಕಷ್ಟಸಾಧ್ಯವಾಗಿದೆ. ಹತ್ತಿರದಲ್ಲಿ ಪೈಸಾರಿ ಜಾಗ ಇದ್ದಲ್ಲಿ ಗುರುತಿಸುವಂತೆ ತಹಶೀಲ್ದಾರರಿಗೆ ನಿರ್ದೇಶನ ನೀಡಿದರು.ಸಫಾಯಿ ಕರ್ಮಚಾರಿಗಳಿಗೆ ಅಂಬೇಡ್ಕರ್ ಅಭಿವೃದ್ಧಿ ನಿಗಮದಡಿ ನೇರ ಸಾಲ ಯೋಜನೆಯಡಿ ಸಹಾಯಧನ ಕಲ್ಪಿಸುವಂತಾಗಬೇಕು ಎಂದು ಇದೇ ಸಂದರ್ಭದಲ್ಲಿ ರಂಗಸ್ವಾಮಿ ಕೋರಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಪರಿಶಿಷ್ಟರಿಗಾಗಿ ಸರ್ಕಾರದಿಂದ ಹಲವು ಸೌಲಭ್ಯಗಳಿದ್ದು, ಅವುಗಳನ್ನು ತಲುಪಿಸುವಂತಾಗಬೇಕು. ಸರ್ಕಾರದಲ್ಲಿರುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡುವುದರ ಜೊತೆಗೆ ಅರ್ಹರಿಗೆ ಸವಲತ್ತು ತಲುಪಿಸುವಂತಾಗಬೇಕು ಎಂದು ಸೂಚಿಸಿದರು.ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಾರಿಕೆ ದಿನೇಶ್ ಕುಮಾರ್, ಉಪ ವಿಭಾಗಾಧಿಕಾರಿ ವಿನಾಯಕ ನರ್ವಡೆ, ಸಮಿತಿ ಸದಸ್ಯರಾದ ಪರಮೇಶ್, ವಿಜಯಕುಮಾರ್, ಪುಟ್ಟಮ್ಮ, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕರಾದ ಬಿ.ಬಸಪ್ಪ, ತಹಸೀಲ್ದಾರರಾದ ಪ್ರವೀಣ್ ಕುಮಾರ್, ಕೃಷ್ಣಮೂರ್ತಿ, ಕಿರಣ್ ಗೌರಯ್ಯ, ತಾ.ಪಂ.ಇಒಗಳಾದ ಅಪ್ಪಣ್ಣ, ಪರಮೇಶ, ಪುರಸಭೆ ಮುಖ್ಯಾಧಿಕಾರಿಗಳಾದ ಗಿರೀಶ್, ನಾಚಪ್ಪ, ಸತೀಶ್ ಇತರರು ಇದ್ದರು.