ಅಂ.ರಾ. ವಿಮಾನ ನಿಲ್ದಾಣಕ್ಕೆ ಸಿಎಂಗೆ ಮನವಿ

KannadaprabhaNewsNetwork |  
Published : Nov 22, 2024, 01:17 AM IST
ಕ್ರೀಡಾ ಜ್ಯೋತಿ ಗೆ ಚಾಲನೆ ನೀಡಿದ ಪರಮೇಶ್ವರ್ | Kannada Prabha

ಸಾರಾಂಶ

ತುಮಕೂರು ಜಿಲ್ಲೆಯಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪಿಸುವಂತೆ ಡಿಸೆಂಬರ್ 2 ರಂದು ಆಗಮಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮನವಿ ಮಾಡಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದರು.

ಕನ್ನಡಪ್ರಭ ವಾರ್ತೆ ತುಮಕೂರು

ಜಿಲ್ಲೆಯಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪಿಸುವಂತೆ ಡಿಸೆಂಬರ್ 2 ರಂದು ಆಗಮಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮನವಿ ಮಾಡಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದರು. ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ರಾಜ್ಯಮಟ್ಟದ ಕ್ರೀಡಾಕೂಟದ ಅಂಗವಾಗಿ ಜಿಲ್ಲೆಯಾದ್ಯಂತ ಹಮ್ಮಿಕೊಂಡಿರುವ ಕ್ರೀಡಾಜ್ಯೋತಿ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದರು.ಮಧುಗಿರಿ-ಕೊರಟಗೆರೆ ಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಂತೆ 2-3 ಸಾವಿರ ಎಕರೆ ಜಾಗ ಇದೆ. ಅದನ್ನು ವಿಮಾನ ನಿಲ್ದಾಣ ಸ್ಥಾಪನೆಗೆ ಬಳಸಿಕೊಳ್ಳುವಂತೆ ಮುಖ್ಯಮಂತ್ರಿಗಳಿಗೆ ಕೋರಲಾಗುವುದು ಎಂದರು.ತುಮಕೂರು ಬೆಂಗಳೂರಿನಂತೆ ಬಹಳ ವೇಗವಾಗಿ ಬೆಳೆಯುತ್ತಿರುವ ನಗರ. ಮುಂದಿನ ದಿನಗಳಲ್ಲಿ ತುಮಕೂರು ಬೆಂಗಳೂರಿನ ಒಂದು ಭಾಗವಾಗಬೇಕು. ಗ್ರೇಟರ್ ಬೆಂಗಳೂರು ಎಂದು ಕರೆಯಬೇಕು ಎಂಬುದು ನನ್ನ ಮಹದಾಸೆಯಾಗಿದೆ ಎಂದರು. ನಮ್ಮ ಜಿಲ್ಲೆಯ ಅಭಿವೃದ್ಧಿಗೆ ಇರುವ ಅನುಕೂಲತೆಗಳು ಬೇರೆ ಜಿಲ್ಲೆಯವರಿಗಿಲ್ಲ. ನಮ್ಮಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಶೈಕ್ಷಣಿಕ ಸಂಸ್ಥೆಗಳಿವೆ, ಲಕ್ಷಾಂತರ ವಿದ್ಯಾರ್ಥಿಗಳಿದ್ದಾರೆ. ಇದೆಲ್ಲವನ್ನು ಉಪಯೋಗಪಡಿಸಿಕೊಂಡು ಜಿಲ್ಲೆಯನ್ನು ಸಮಗ್ರವಾಗಿ ಅಭಿವೃದ್ಧಿ ಪಡಿಸುವ ಅವಕಾಶ ನಮಗಿದೆ ಎಂದರು.

ತುಮಕೂರಿನಲ್ಲಿ ಇದೇ ಮೊದಲ ಬಾರಿಗೆ ನ. 24 ರಂದು ರಾಜ್ಯಮಟ್ಟದ ಪತ್ರಕರ್ತರ ಕ್ರೀಡಾಕೂಟ ಆಯೋಜನೆ ಮಾಡಲಾಗಿದೆ. ಇದರ ಅಂಗವಾಗಿ ಕ್ರೀಡಾ ಜ್ಯೋತಿಯನ್ನು ಇಡೀ ಜಿಲ್ಲೆಯಲ್ಲಿ ಶಾಂತಿಯ ಸಂದೇಶ ಸಾರುವ ಸಲುವಾಗಿ ಕ್ರೀಡಾಜ್ಯೋತಿ ಮೆರವಣಿಗೆಗೆ ಚಾಲನೆ ನೀಡಲಾಗಿದೆ. ಈ ಕ್ರೀಡಾಜ್ಯೋತಿ ಜಿಲ್ಲೆಯ ಎಲ್ಲ ತಾಲೂಕುಗಳಲ್ಲೂ ಸಂಚರಿಸಿ ಸಮಾಜದಲ್ಲಿ ಶಾಂತಿ, ಸಹೋದರತ್ವ ಭಾವನೆಯಿಂದ ಬಾಳಬೇಕು ಎಂಬ ಸಂದೇಶ ಸಾರಲಿದೆ ಎಂದರು.

ಪ್ರತಿಯೊಬ್ಬ ಪತ್ರಕರ್ತರಲ್ಲೂ ಕ್ರೀಡಾ ಮನೋಭಾವನೆ ಮೂಡಬೇಕು. ಈ ನಿಟ್ಟಿನಲ್ಲಿ ಕ್ರೀಡಾಜ್ಯೋತಿ ಮೆರವಣಿಗೆ ನಡೆಯುತ್ತಿದೆ ಎಂದು ಅವರು ಹೇಳಿದರು. ನಾನು ಒಬ್ಬ ಕ್ರೀಡಾಪಟುವಾಗಿ ಕ್ರೀಡಾಜ್ಯೋತಿ ಮೆರವಣಿಗೆಗೆ ಚಾಲನೆ ನೀಡುರುವುದು ತುಂಬಾ ಸಂತೋಷ ತಂದಿದೆ ಎಂದು ಅವರು ತಿಳಿಸಿದರು. ನ. 24 ರಂದು ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ನಡೆಯಲಿರುವ ರಾಜ್ಯಮಟ್ಟದ ಪತ್ರಕರ್ತರ ಕ್ರೀಡಾಕೂಟ ಯಶಸ್ವಿಯಾಗಿ ನಡೆಯಲಿ ಎಂದು ಅವರು ಇದೇ ಸಂದರ್ಭದಲ್ಲಿ ಹಾರೈಸಿದರು.

ಈ ಸಂದರ್ಭದಲ್ಲಿ ಶಾಸಕ ಜ್ಯೋತಿಗಣೇಶ್, ಕನ್ನಿಕಾ ಪರಮೇಶ್ವರ್, ಜಿಲ್ಲಾಧಿಕಾರಿ ಶುಭಕಲ್ಯಾಣ್, ಜಿ.ಪಂ. ಸಿಇಒ ಜಿ. ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ., ಪಾಲಿಕೆ ಆಯುಕ್ತೆ ಬಿ.ವಿ.ಅಶ್ವಿಜ, ತುಮಕೂರು ವಿವಿ ಕುಲಪತಿ ಪ್ರೊ. ವೆಂಕಟೇಶ್ವರಲು, ಗೃಹ ಸಚಿವರ ವಿಶೇಷಾಧಿಕಾರಿ ಡಾ. ನಾಗಣ್ಣ, ಕಾನಿಪಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಹಿರಿಯ ಪತ್ರಕರ್ತರಾದ ಎಸ್. ನಾಗಣ್ಣ, ಜಿಲ್ಲಾಧ್ಯಕ್ಷ ಚಿ.ನಿ. ಪುರುಷೋತ್ತಮ್, ಪ್ರಧಾನ ಕಾರ್ಯದರ್ಶಿ ರಘುರಾಮ್, ಕ್ರೀಡಾಕೂಟದ ಪ್ರಚಾರ ಸಮಿತಿ ಅಧ್ಯಕ್ಷ ರಂಗರಾಜು, ಟಿ.ಎನ್. ಮಧುಕರ್, ಸತೀಶ್ ಹಾರೋಗೆರೆ, ಯಶಸ್ ಪದ್ಮನಾಭ್ ಸೇರಿದಂತೆ ಪತ್ರಕರ್ತರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಟಿ ಆತ್ಮ*ತ್ಯೆಗೆ ಸರ್ಕಾರಿ ನೌಕರಿಗೆ ಸೇರುವಂತೆ ಕುಟುಂಬ ಒತ್ತಡ ಕಾರಣ?
ನಮ್ಮವರಿಗೆ ಇಲ್ಲದ ಪರಿಹಾರ ಅವರಿಗೆ ಏಕೆ : ಬಿಜೆಪಿ ಆಕ್ರೋಶ