ಗದಗ: ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ ಕರ್ನಾಟಕ ಶಾಶ್ವತ ನಿವಾಸ ಪ್ರಮಾಣಪತ್ರ (ಪಿಆರ್‌ಸಿ) 2026 ಅಧಿಸೂಚನೆಯನ್ನು ತಕ್ಷಣ ಸ್ಥಗಿತಗೊಳಿಸಿ, ಅದರ ಸಾಂವಿಧಾನಿಕ ಹಾಗೂ ಕಾನೂನು ಬದ್ಧತೆಯನ್ನು ಸಮಗ್ರವಾಗಿ ಪರಿಶೀಲಿಸುವಂತೆ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾಧಿಕಾರಿ ಮೂಲಕ ಸೋಮವಾರ ರಾಜ್ಯಪಾಲರಿಗೆ ಮನವಿ ಸಲ್ಲಿಸಿ, ಆಗ್ರಹಿಸಿದರು.
ಪೌರತ್ವ, ವಲಸೆ ಹಾಗೂ ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ವಿಷಯಗಳು ಸಂವಿಧಾನದ ಪ್ರಕಾರ ಕೇಂದ್ರ ಸರ್ಕಾರದ ವ್ಯಾಪ್ತಿಗೆ ಸೇರಿರುವುದರಿಂದ, ಈ ಅಧಿಸೂಚನೆಯು ಕಾನೂನು ಬದ್ಧವಾಗಿದೆಯೇ ಎಂಬ ಬಗ್ಗೆ ಸಮಗ್ರ ಪರಿಶೀಲನೆ ನಡೆಸಬೇಕು. ರಾಜ್ಯ ಸರ್ಕಾರ ಹೊರಡಿಸಿರುವ ಅಧಿಸೂಚನೆ ಸಂವಿಧಾನದ ಆಶಯಗಳಿಗೆ ಅನುಗುಣವಾಗಿದೆಯೇ ಎಂಬುದನ್ನು ಸಂಬಂಧಿತ ಪ್ರಾಧಿಕಾರಗಳು ಪರಿಶೀಲಿಸುವ ಅಗತ್ಯವಿದೆ.
ಈ ಹಿನ್ನೆಲೆಯಲ್ಲಿ ರಾಜ್ಯಪಾಲರು ಮಧ್ಯಪ್ರವೇಶಿಸಿ, ಶಾಶ್ವತ ನಿವಾಸ ಪ್ರಮಾಣಪತ್ರ ವಿತರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಬೇಕು. ಜೊತೆಗೆ ಕೇಂದ್ರ ಗೃಹ ಸಚಿವಾಲಯ ಹಾಗೂ ಸಂಬಂಧಿತ ಅಧಿಕಾರಿಗಳಿಂದ ಈ ಅಧಿಸೂಚನೆ ಕುರಿತು ಕಾನೂನು ಮತ್ತು ಆಡಳಿತಾತ್ಮಕ ದೃಷ್ಟಿಯಿಂದ ಪರಿಶೀಲನೆ ನಡೆಸುವಂತೆ ಕ್ರಮವಹಿಸಬೇಕು.ಅಲ್ಲದೆ, ಅಧಿಸೂಚನೆ ಹೊರಡಿಸಲು ಆಧಾರವಾದ ಕಾನೂನು ಮತ್ತು ಆಡಳಿತಾತ್ಮಕ ಅಂಶಗಳ ಕುರಿತು ರಾಜ್ಯ ಸರ್ಕಾರದಿಂದ ಸಮಗ್ರ ವರದಿ ಪಡೆದು, ಪರಿಶೀಲನೆ ಪೂರ್ಣಗೊಳ್ಳುವ ವರೆಗೆ ಪ್ರಮಾಣಪತ್ರ ವಿತರಣೆ ಪ್ರಕ್ರಿಯೆಯನ್ನು ಮುಂದುವರಿಸಬಾರದು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಜು ಕುರುಡಗಿ, ಮಾಜಿ ಅಧ್ಯಕ್ಷ ಎಂ.ಎಸ್. ಕರಿಗೌಡ್ರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಿಂಗರಾಜ ಪಾಟೀಲ, ಶಶಿಧರ ದಿಂಡೂರ, ಮಂಜುನಾಥ ಮುಳಗುಂದ, ಅರವಿಂದ ಹುಲ್ಲೂರ, ಸಂತೋಷ ಅಕ್ಕಿ, ಪ್ರೀತಿ ಹೊನ್ನಗುಡಿ ಸೇರಿದಂತೆ ಮಹಿಳಾ ಘಟಕಗಳ ಪದಾಧಿಕಾರಿಗಳು, ಕಾರ್ಯಕರ್ತರು ಹಾಜರಿದ್ದರು.