ಕಾರವಾರ: ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆ, ಹೊರರಾಜ್ಯ ಹಾಗೂ ಹೊರಜಿಲ್ಲೆಯ ಕಾರ್ಮಿಕರಿಗೆ ಕಡ್ಡಾಯ ಪೊಲೀಸ್ ಪರಿಶೀಲನೆ ಮತ್ತು ಕಾರವಾರ- ಕೈಗಾ ಮಾರ್ಗದಲ್ಲಿ ಭಾರೀ ವಾಹನಗಳ ಸಂಚಾರ ನಿಯಂತ್ರಿಸುವಂತೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್‌ನ ಮಾತೃಶಕ್ತಿ, ದುರ್ಗಾವಾಹಿನಿ ಹಾಗೂ ಬಜರಂಗದಳದ ವತಿಯಿಂದ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ವಿಧಾನಪರಿಷತ್ ಸದಸ್ಯ ಗಣಪತಿ ಉಳ್ವೇಕರ ಅವರಿಗೆ ಮನವಿ ಸಲ್ಲಿಸಲಾಯಿತು.ಮುಂಡಗೋಡ ಮತ್ತು ಮಾಜಾಳಿಯಲ್ಲಿ ಅಪ್ರಾಪ್ತೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಪ್ರಕರಣಗಳ ಕುರಿತು ಸಮಗ್ರ ತನಿಖೆ ನಡೆಸಿ, ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ಹಾಗೂ ಅಗತ್ಯ ನೆರವು ಒದಗಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ. ಹೋಟೆಲ್, ರೆಸ್ಟೋರೆಂಟ್, ಅಂಗಡಿ, ಕೈಗಾರಿಕೆ ಹಾಗೂ ಕಟ್ಟಡ ಕಾಮಗಾರಿಗಳಲ್ಲಿ ಕೆಲಸ ಮಾಡುವ ಹೊರರಾಜ್ಯ ಮತ್ತು ಹೊರಜಿಲ್ಲೆಯ ಕಾರ್ಮಿಕರ ಪೊಲೀಸ್ ಹಿನ್ನೆಲೆ ಪರಿಶೀಲನೆ ಕಡ್ಡಾಯಗೊಳಿಸಬೇಕು. ಪರಿಶೀಲನೆ ನಡೆಸದೆ ಕಾರ್ಮಿಕರನ್ನು ನೇಮಿಸಿಕೊಳ್ಳುವ ಮಾಲೀಕರು ಮತ್ತು ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲಾಗಿದೆ.ಜಿಲ್ಲೆಯ ಬಸ್ ನಿಲ್ದಾಣ, ಮಾರುಕಟ್ಟೆ, ಉದ್ಯಾನವನ, ಜಿಮ್ ಸೇರಿದಂತೆ ಜನನಿಬಿಡ ಪ್ರದೇಶಗಳಲ್ಲಿ ಸಿಸಿ ಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು. ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಗಸ್ತು ಹೆಚ್ಚಿಸಬೇಕು. ಮತಾಂತರದ ಹೆಸರಿನಲ್ಲಿ ಆಮಿಷ, ಬಲವಂತ ಹಾಗೂ ಮಹಿಳೆಯರ ಶೋಷಣೆ ನಡೆಯುತ್ತಿದೆ ಎಂಬ ಆರೋಪಗಳ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.ಬೇಡಿಕೆಗಳನ್ನು ನಿರ್ಲಕ್ಷಿಸಿದರೆ ಮುಂದಿನ ಅನಾಹುತಗಳಿಗೆ ಆಡಳಿತವೇ ಹೊಣೆ ಎಂದು ವಿಹಿಂಪ ಜಿಲ್ಲಾ ಸಹಕಾರ್ಯದರ್ಶಿ ಸೂರಜ್ ನಾಯ್ಕ ಎಚ್ಚರಿಸಿದರು.