ಪ್ಲಾಸ್ಟಿಕ್ ರಾಷ್ಟ್ರಧ್ವಜ ತಯಾರಿಕೆ ನಿಯಂತ್ರಿಸಲು ಮನವಿ

KannadaprabhaNewsNetwork |  
Published : Aug 13, 2026, 01:45 AM IST
12ಎಚ್ಎಸ್ಎನ್15 :  | Kannada Prabha

ಸಾರಾಂಶ

ಪ್ಲಾಸ್ಟಿಕ್‌ನಿಂದ ತಯಾರಿಸಲಾದ ರಾಷ್ಟ್ರಧ್ವಜಗಳು ಸುಲಭವಾಗಿ ನಾಶವಾಗುವುದಿಲ್ಲ. ಹೀಗಾಗಿ ಬಳಕೆಯ ನಂತರ ಅವುಗಳನ್ನು ಎಲ್ಲೆಂದರಲ್ಲಿ ಎಸೆಯುವುದರಿಂದ ಹಲವು ದಿನಗಳ ಕಾಲ ರಾಷ್ಟ್ರಧ್ವಜಕ್ಕೆ ಅಪಮಾನವಾಗುವ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಈ ಹಿನ್ನೆಲೆಯಲ್ಲಿ ಪ್ಲಾಸ್ಟಿಕ್ ರಾಷ್ಟ್ರಧ್ವಜಗಳ ಬಳಕೆ, ತಯಾರಿಕೆ ಮತ್ತು ಮಾರಾಟದ ವಿರುದ್ಧ ಸರ್ಕಾರ ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಪ್ಲಾಸ್ಟಿಕ್ ರಾಷ್ಟ್ರಧ್ವಜಗಳ ತಯಾರಿಕೆ ಹಾಗೂ ಮಾರಾಟವನ್ನು ಸಂಪೂರ್ಣವಾಗಿ ನಿಯಂತ್ರಿಸಬೇಕು ಎಂದು ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿಯ ಪದಾಧಿಕಾರಿಗಳು ಜಿಲ್ಲಾಡಳಿತಕ್ಕೆ ಬುಧವಾರ ಮನವಿ ಸಲ್ಲಿಸಿದರು.

ಕನ್ನಡಪ್ರಭ ವಾರ್ತೆ ಹಾಸನ

ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ರಾಷ್ಟ್ರಧ್ವಜಕ್ಕೆ ಅಪಮಾನವಾಗುವುದನ್ನು ತಡೆಯಲು ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಬೇಕು. ಪ್ಲಾಸ್ಟಿಕ್ ರಾಷ್ಟ್ರಧ್ವಜಗಳ ತಯಾರಿಕೆ ಹಾಗೂ ಮಾರಾಟವನ್ನು ಸಂಪೂರ್ಣವಾಗಿ ನಿಯಂತ್ರಿಸಬೇಕು ಎಂದು ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿಯ ಪದಾಧಿಕಾರಿಗಳು ಜಿಲ್ಲಾಡಳಿತಕ್ಕೆ ಬುಧವಾರ ಮನವಿ ಸಲ್ಲಿಸಿದರು.

ಈ ವೇಳೆ ಹಿಂದೂ ಜನಜಾಗೃತಿ ಸಮಿತಿಯ ಎಲ್. ಗೋವಿಂದರಾಜು ಮಾಧ್ಯಮದೊಂದಿಗೆ ಮಾತನಾಡಿ, ರಾಷ್ಟ್ರಧ್ವಜವು ದೇಶದ ಆತ್ಮ ಹಾಗೂ ಪ್ರತಿಯೊಬ್ಬ ಭಾರತೀಯನ ಹೆಮ್ಮೆಯ ಸಂಕೇತವಾಗಿದೆ. ಸ್ವಾತಂತ್ರ್ಯ ದಿನಾಚರಣೆ ಮತ್ತು ಗಣರಾಜ್ಯೋತ್ಸವದಂದು ಅತ್ಯಂತ ಗೌರವದಿಂದ ರಾಷ್ಟ್ರಧ್ವಜವನ್ನು ಹಾರಿಸಲಾಗುತ್ತದೆ. ಆದರೆ ಕಾರ್ಯಕ್ರಮಗಳು ಮುಗಿದ ಬಳಿಕ ಇದೇ ಧ್ವಜಗಳು ರಸ್ತೆ, ಚರಂಡಿ, ಕಸದ ರಾಶಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಹರಿದ ಸ್ಥಿತಿಯಲ್ಲಿ ಕಂಡುಬರುತ್ತಿರುವುದು ವಿಷಾದನೀಯ ಎಂದರು. ವಿಶೇಷವಾಗಿ ಪ್ಲಾಸ್ಟಿಕ್‌ನಿಂದ ತಯಾರಿಸಲಾದ ರಾಷ್ಟ್ರಧ್ವಜಗಳು ಸುಲಭವಾಗಿ ನಾಶವಾಗುವುದಿಲ್ಲ. ಹೀಗಾಗಿ ಬಳಕೆಯ ನಂತರ ಅವುಗಳನ್ನು ಎಲ್ಲೆಂದರಲ್ಲಿ ಎಸೆಯುವುದರಿಂದ ಹಲವು ದಿನಗಳ ಕಾಲ ರಾಷ್ಟ್ರಧ್ವಜಕ್ಕೆ ಅಪಮಾನವಾಗುವ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಈ ಹಿನ್ನೆಲೆಯಲ್ಲಿ ಪ್ಲಾಸ್ಟಿಕ್ ರಾಷ್ಟ್ರಧ್ವಜಗಳ ಬಳಕೆ, ತಯಾರಿಕೆ ಮತ್ತು ಮಾರಾಟದ ವಿರುದ್ಧ ಸರ್ಕಾರ ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಪ್ಲಾಸ್ಟಿಕ್ ರಾಷ್ಟ್ರಧ್ವಜದಿಂದಾಗುವ ಅವಮಾನವನ್ನು ತಡೆಯುವ ಉದ್ದೇಶದಿಂದ ಹಿಂದೂ ಜನಜಾಗೃತಿ ಸಮಿತಿಯು ಮುಂಬೈ ಹೈಕೋರ್ಟ್‌ನಲ್ಲಿ ಪಿಐಎಲ್ (೧೦೩/೨೦೧೧) ಸಲ್ಲಿಸಿತ್ತು. ಪ್ರಕರಣದ ವಿಚಾರಣೆ ವೇಳೆ ಪ್ಲಾಸ್ಟಿಕ್ ರಾಷ್ಟ್ರಧ್ವಜದಿಂದಾಗುವ ಅವಮಾನವನ್ನು ತಡೆಯಲು ಅಗತ್ಯ ಕ್ರಮ ಕೈಗೊಳ್ಳುವಂತೆ ನ್ಯಾಯಾಲಯ ಸರ್ಕಾರಕ್ಕೆ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ಹಾಗೂ ರಾಜ್ಯದ ಗೃಹ ಮತ್ತು ಶಿಕ್ಷಣ ಇಲಾಖೆಗಳು ಸಂಬಂಧಿಸಿದಂತೆ ಸುತ್ತೋಲೆಗಳನ್ನು ಹೊರಡಿಸಿದ್ದವು ಎಂದು ಹೇಳಿದರು.

ರಾಷ್ಟ್ರಧ್ವಜಕ್ಕೆ ಅಪಮಾನವಾಗುವುದನ್ನು ತಡೆಯಲು ಸಾಮಾಜಿಕ ಸಂಘಟನೆಗಳನ್ನು ಒಳಗೊಂಡ ರಾಷ್ಟ್ರಧ್ವಜ ಗೌರವ ಕೃತಿ ಸಮಿತಿಯನ್ನು ರಚಿಸಿ, ಅದರ ಮೂಲಕ ನಿರಂತರ ಜನಜಾಗೃತಿ ಕಾರ್ಯಕ್ರಮಗಳನ್ನು ನಡೆಸಬೇಕು. ಶಾಲಾ-ಕಾಲೇಜುಗಳು, ಸಾರ್ವಜನಿಕ ಸ್ಥಳಗಳು ಹಾಗೂ ಮಾರುಕಟ್ಟೆ ಪ್ರದೇಶಗಳಲ್ಲಿ ರಾಷ್ಟ್ರಧ್ವಜದ ಗೌರವ ಮತ್ತು ಅದರ ಬಳಕೆಯ ನಿಯಮಗಳ ಕುರಿತು ಜನರಿಗೆ ಅರಿವು ಮೂಡಿಸಬೇಕು ಎಂದು ಅವರು ಆಗ್ರಹಿಸಿದರು.

ಸಮಿತಿಯು ಹಲವು ವರ್ಷಗಳಿಂದ ರಾಷ್ಟ್ರಧ್ವಜದ ಗೌರವ ಕಾಪಾಡುವ ಕುರಿತು ಜಾಗೃತಿ ಅಭಿಯಾನ ನಡೆಸುತ್ತಿದೆ. ಶಾಲಾ-ಕಾಲೇಜುಗಳಲ್ಲಿ ಉಪನ್ಯಾಸ, ಪ್ರಶ್ನೋತ್ತರ ಸ್ಪರ್ಧೆ, ಕರಪತ್ರ ವಿತರಣೆ, ಪೋಸ್ಟರ್ ಮತ್ತು ಪ್ಲೆಕ್ಸ್‌ಗಳ ಅಳವಡಿಕೆ, ಸ್ಥಳೀಯ ಕೇಬಲ್ ವಾಹಿನಿಗಳ ಮೂಲಕ ಜಾಗೃತಿ ವಿಡಿಯೊಗಳ ಪ್ರಸಾರ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬಿದ್ದಿರುವ ರಾಷ್ಟ್ರಧ್ವಜಗಳನ್ನು ಸಂಗ್ರಹಿಸಿ ಗೌರವಯುತವಾಗಿ ವಿಲೇವಾರಿ ಮಾಡುವ ಕಾರ್ಯವನ್ನೂ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು. ಸಮಿತಿಯ ಪ್ರಮುಖ ಬೇಡಿಕೆಗಳೆಂದರೇ ಜಿಲ್ಲಾಮಟ್ಟದಲ್ಲಿ ರಾಷ್ಟ್ರಧ್ವಜ ಗೌರವ ಕೃತಿ ಸಮಿತಿ ರಚಿಸಬೇಕು. ಜಿಲ್ಲೆಯಲ್ಲಿ ಪ್ಲಾಸ್ಟಿಕ್ ರಾಷ್ಟ್ರಧ್ವಜಗಳನ್ನು ತಯಾರಿಸಿ ಅಥವಾ ಮಾರಾಟ ಮಾಡುತ್ತಿರುವವರ ವಿರುದ್ಧ ತಕ್ಷಣ ಕಾನೂನು ಕ್ರಮ ಕೈಗೊಳ್ಳಬೇಕು. ಶಾಲೆಗಳಲ್ಲಿ ‘ರಾಷ್ಟ್ರಧ್ವಜವನ್ನು ಗೌರವಿಸಿ’ ಎಂಬ ವಿಶೇಷ ಜಾಗೃತಿ ಉಪಕ್ರಮವನ್ನು ಕಡ್ಡಾಯವಾಗಿ ನಡೆಸಲು ಶಿಕ್ಷಣ ಇಲಾಖೆಗೆ ಸೂಚನೆ ನೀಡಬೇಕು ಎಂದು ಒತ್ತಾಯಿಸಿದರು. ರಾಷ್ಟ್ರಧ್ವಜಕ್ಕೆ ಸಂಬಂಧಿಸಿದ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಸಂಬಂಧಪಟ್ಟ ಕಾಯ್ದೆಗಳ ಅಡಿಯಲ್ಲಿ ಕ್ರಮ ಕೈಗೊಳ್ಳುವ ಮೂಲಕ ರಾಷ್ಟ್ರೀಯ ಗೌರವವನ್ನು ಕಾಪಾಡಬೇಕು. ಸ್ವಾತಂತ್ರ್ಯ ದಿನಾಚರಣೆ ಹಾಗೂ ಗಣರಾಜ್ಯೋತ್ಸವದ ಸಂದರ್ಭಗಳಲ್ಲಿ ಮಾತ್ರವಲ್ಲದೆ ವರ್ಷವಿಡೀ ರಾಷ್ಟ್ರಧ್ವಜದ ಗೌರವದ ಕುರಿತು ಜನಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಸಮಿತಿ ತಿಳಿಸಿತು.

ಇದೇ ವೇಳೆ ಹಿಂದೂ ಜನಜಾಗೃತಿ ಸಮಿತಿಯ ಎನ್. ರಾಜ ವೆಂಕಟೇಶ್, ನವೀನ್ ಜೈನ್, ಕೆ. ಎಲ್. ವೇದಾ ಅಶೋಕ್, ಎಚ್. ಎಂ. ಚಂದ್ರಶೇಖರ್‌, ಸಂದೀಪ್ ಮತ್ತಿತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

20ರಂದು ಅರಸು ಜಯಂತಿ: ಸಿದ್ಧತೆ ನಡೆಸಿ
ಪರಮಾಣು ವಿದ್ಯುತ್ ಸಾಮರ್ಥ್ಯ ವಿಸ್ತರಣೆಗೆ ಒತ್ತು