ಮೂಡುಬಿದಿರೆ ಆಳ್ವಾಸ್‌ ಕಾಲೇಜಿಗೆ ಸ್ವಾಯತ್ತ ಸ್ಥಾನಮಾನ

KannadaprabhaNewsNetwork |  
Published : Jan 04, 2024, 01:45 AM IST
ಆಳ್ವಾಸ್ ಕಾಲೇಜಿಗೆ ಸ್ವಾಯತ್ತ ಸ್ಥಾನಮಾನ (ಅಟೋನೊಮಸ್) | Kannada Prabha

ಸಾರಾಂಶ

ಮೂಡುಬಿದಿರೆಯ ಆಳ್ವಾಸ್‌ ಕಾಲೇಜಿಗೆ ೨೦೨೩- ೨೪ರ ಶೈಕ್ಷಣಿಕ ವರ್ಷದಿಂದ ಅನ್ವಯವಾಗುವಂತೆ ಸ್ವಾಯತ್ತ ಸ್ಥಾನಮಾನ ನೀಡಲಾಗಿದೆ.

ಕನ್ನಡಪ್ರಭ ವಾರ್ತೆ ಮೂಡುಬಿದಿರೆ

ಶಿಕ್ಷಣ, ಕ್ರೀಡೆ ಹಾಗೂ ಸಾಂಸ್ಕೃತಿಕ ಸಾಧನೆಯ ಮೂಲಕ ಅನನ್ಯವಾಗಿ ಗುರುತಿಸಿಕೊಂಡಿರುವ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಳ್ವಾಸ್ ಕಾಲೇಜು ೨೦೨೩-೨೪ನೇ ಶೈಕ್ಷಣಿಕ ವರ್ಷದಿಂದ ಸ್ವಾಯತ್ತ ಸ್ಥಾನಮಾನ ಪಡೆದಿದೆ.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾಲೇಜಿಗೆ ೨೦೨೩-೨೪ರಿಂದ ಮುಂದಿನ 10 ವರ್ಷಗಳಿಗೆ ಅನ್ವಯವಾಗುವಂತೆ ಸ್ವಾಯತ್ತ ಸ್ಥಾನಮಾನ ನೀಡುವ ಕುರಿತು ವಿಶ್ವವಿದ್ಯಾಲಯ ಧನ ಸಹಾಯ ಆಯೋಗವು (ಯುಜಿಸಿ) ೨೦೨೩ರ ಮೇ ೩೧ರಂದು ಮಂಗಳೂರು ವಿಶ್ವವಿದ್ಯಾಲಯಕ್ಕೆ ಶಿಫಾರಸ್ಸು ಮಾಡಿತ್ತು. ಈ ಶಿಫಾರಸ್ಸಿನ ಅನ್ವಯ ಮಂಗಳೂರು ವಿಶ್ವವಿದ್ಯಾಲಯವು ವಿದ್ಯಾವಿಷಯಕ ಪರಿಷತ್ ಸಮಾಲೋಚನೆಯೊಂದಿಗೆ ಸಿಂಡಿಕೇಟ್ ಮಾಡಿರುವ ಶಿಫಾರಸ್ಸು ಅನುಸರಿಸಿ ಸ್ವಾಯತ್ತ ಸ್ಥಾನಮಾನ ನೀಡಲು ಕರ್ನಾಟಕ ರಾಜ್ಯ ಸರ್ಕಾರದ ಉನ್ನತ ಶಿಕ್ಷಣ ಇಲಾಖೆಯು ಸಹಮತ ಸೂಚಿಸಿ ಆದೇಶಿಸಿದೆ ಎಂದು ತಿಳಿಸಿದರು.

ಮೌಲ್ಯಾಧಾರಿತ ಶಿಕ್ಷಣ, ಕ್ರೀಡೆ ಹಾಗೂ ಸಾಂಸ್ಕೃತಿಕ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಆಳ್ವಾಸ್ ಕಾಲೇಜಿಗೆ ಸ್ವಾಯತ್ತ ಸ್ಥಾನಮಾನ ದೊರೆಯುವ ಕಾರಣ ಪದವಿ, ಸ್ನಾತಕೋತ್ತರ ಹಾಗೂ ವೃತ್ತಿಪರ ಪದವಿಗಳನ್ನು ಇನ್ನಷ್ಟು ಕಾಲಬದ್ಧ ಹಾಗೂ ಸುಸಂಘಟಿತವಾಗಿ ನಡೆಸಲು ಅವಕಾಶವಾಗಲಿದೆ. ದಾಖಲಾತಿ, ಪರೀಕ್ಷೆ ಹಾಗೂ ಫಲಿತಾಂಶವನ್ನು ಸುಸಜ್ಜಿತವಾಗಿ ನಡೆಸಲು ಸಹಕಾರಿಯಾಗುವುದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಇನ್ನಷ್ಟು ವೇಗ ಸಿಗಲಿದೆ. ಕ್ರೀಡೆ, ಸಾಹಿತ್ಯ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳನ್ನು ಸುಸಂಘಟಿತವಾಗಿ ಆಯೋಜಿಸಲು ಅನುವು ಮಾಡಿಕೊಡಲಿದೆ. ವೃತ್ತಿಪರತೆ ಹಾಗೂ ಆಧುನಿಕ ಕೈಗಾರಿಕೆ ಮತ್ತು ಉದ್ಯಮ ವಲಯಕ್ಕೆ ಬೇಕಾದ ಕೌಶಲಭರಿತ ತರಬೇತಿಗೆ ಅವಕಾಶ ಹೆಚ್ಚಲಿದೆ ಎಂದು ಅವರು ಅಭಿಪ್ರಾಯಪಟ್ಟರು.

ಮೂಡುಬಿದಿರೆಯಲ್ಲಿ ೧೯೯೮ರಲ್ಲಿ ಡಾ.ಎಂ. ಮೋಹನ ಆಳ್ವ ಅವರ ಅಧ್ಯಕ್ಷತೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಆಳ್ವಾಸ್ ಕಾಲೇಜನ್ನು ಆರಂಭಿಸಿದ್ದು, ರಜತ ಮಹೋತ್ಸವದ ಹೊಸ್ತಿಲಲ್ಲಿದೆ.

ಈಗಾಗಲೇ ಮಂಗಳೂರು ವಿಶ್ವವಿದ್ಯಾಲಯದ ಶೈಕ್ಷಣಿಕ ರ‍್ಯಾಂಕ್, ಕ್ರೀಡಾ ಮತ್ತು ಸಾಂಸ್ಕೃತಿಕ ವಲಯದಲ್ಲಿ ಗಣನೀಯ ಸಾಧನೆ ಹಾಗೂ ಅತಿಹೆಚ್ಚಿನ ಉದ್ಯೋಗ ಗಳಿಕೆ ಮೂಲಕ ವಿಶಿಷ್ಟ ಸಾಧನೆಯನ್ನು ಮಾಡಿದೆ. ಪತ್ರಿಕಾಗೋಷ್ಠಿಯಲ್ಲಿ ಆಳ್ವಾಸ್ ಕಾಲೇಜಿನ ಪ್ರಾಚರ‍್ಯ ಡಾ ಕುರಿಯನ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

5 ಪಾಲಿಕೆಗಳಲ್ಲಿ ಜಯಭೇರಿ ಬಾರಿಸಲು ಬಿಜೆಪಿಗೆ ಒಳ್ಳೆ ಅವಕಾಶ
ಸಿಎಂ ಗಾದಿ ಸಂಚಲನ : ನಾನು ಸಿಎಂ ಆಗಲಿ ಎಂಬುದು ಜನರ ಬಯಕೆ ಎಂದರು ಡಿಕೆಶಿ