ಜಿಲ್ಲೆಯ ಮೊರಾರ್ಜಿ ದೇಸಾಯಿ, ಏಕಲವ್ಯ ಮಾದರಿ, ಅಟಲ್ ಬಿಹಾರಿ ವಾಜಪೇಯಿ, ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯಲ್ಲಿ ಅವಕಾಶ
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಏಕಲವ್ಯ ಮಾದರಿ, ಅಟಲ್ ಬಿಹಾರಿ ವಾಜಪೇಯಿ, ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗಳಲ್ಲಿ 2025-26ನೇ ಸಾಲಿಗೆ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.ರಾಜ್ಯ ಸರ್ಕಾರವು ಸ್ಥಾಪಿಸಿರುವ ಮೊರಾರ್ಜಿ ದೇಸಾಯಿ, ಏಕಲವ್ಯ ಮಾದರಿ, ಅಟಲ್ ಬಿಹಾರಿ ವಾಜಪೇಯಿ, ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗಳಲ್ಲಿ 6 ರಿಂದ 10ನೇ ತರಗತಿ ವರೆಗೆ ಆಂಗ್ಲ ಮಾಧ್ಯಮದಲ್ಲಿ ವ್ಯಾಸಂಗ ಮಾಡಲು ಪ್ರತಿಭಾನ್ವಿತ ಗ್ರಾಮೀಣ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ. ಈ ವಿದ್ಯಾರ್ಥಿಗಳಿಗೆ ಉಚಿತವಾಗಿ ಊಟ, ವಸತಿ, ಸಮವಸ್ತ್ರ, ಪಠ್ಯಪುಸ್ತಕ ಹಾಗೂ ಇನ್ನಿತರೆ ಸಾಮಗ್ರಿಗಳನ್ನು ನೀಡುವುದರ ಜೊತೆಗೆ ಉತ್ತಮವಾದ ವಿದ್ಯಾಭ್ಯಾಸ ನೀಡಲಾಗುತ್ತಿದೆ. ಈ ಶಾಲೆಗಳಲ್ಲಿ ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಅಂದರೆ ಸಾಮಾನ್ಯ ವರ್ಗ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಪ್ರವೇಶ ಲಭ್ಯವಿದೆ.ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1ರ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯ ಮಿತಿ 2.50 ಲಕ್ಷ ರು. ಮತ್ತು ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅವರಿಗೆ 1 ಲಕ್ಷ ರು.ಗಳ ಆದಾಯ ಮಿತಿ ಇರುತ್ತದೆ. ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಶೇ.50ರಷ್ಟು ಸೀಟುಗಳು ವಿದ್ಯಾರ್ಥಿನಿಯರಿಗೆ ಲಭ್ಯವಿರುತ್ತದೆ. ಒಮ್ಮೆ ಈ ವಸತಿ ಶಾಲೆಗಳಿಗೆ ವಿದ್ಯಾರ್ಥಿ ಸೇರಿದಲ್ಲಿ 10ನೇ ತರಗತಿ ವರೆಗೆ ಉಚಿತವಾಗಿ ವಿದ್ಯಾಭ್ಯಾಸ ಮಾಡಬಹುದು.ಈ ಮೊರಾರ್ಜಿ ದೇಸಾಯಿ, ಏಕಲವ್ಯ ಮಾದರಿ, ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗಳಲ್ಲಿ 2025-26ನೇ ಸಾಲಿನಲ್ಲಿ 6ನೇ ತರಗತಿಗೆ 50 ವಿದ್ಯಾರ್ಥಿಗಳನ್ನು, ಅಟಲ್ ಬಿಹಾರಿ ವಾಜಪೇಯಿ ಶಾಲೆಗಳಲ್ಲಿ 6ನೇ ತರಗತಿಗೆ 80 ವಿದ್ಯಾರ್ಥಿಗಳನ್ನು ಮಾತ್ರ ಸೇರಿಸಿಕೊಳ್ಳಲಾಗುವುದು. ಪ್ರಸ್ತುತ ಸರ್ಕಾರದಿಂದ ಮಾನ್ಯತೆ ಪಡೆದ ಶಾಲೆಯಲ್ಲಿ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.ಈ ಬಗ್ಗೆ ತಾಲೂಕು ಕೇಂದ್ರಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುವುದು. ಈ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳ ಅರ್ಹತೆ ಮತ್ತು ಮೀಸಲಾತಿಯಂತೆ ಪಟ್ಟಿ ತಯಾರಿಸಿ, ಮೆರಿಟ್ ಆಧಾರದ ಮೇಲೆ ಮೀಸಲಾತಿ ಅನ್ವಯ ಆಯ್ಕೆ ಮಾಡಲಾಗುವುದು. ಅಭ್ಯರ್ಥಿಯು ತನ್ನ ಸ್ವಂತ ಜಿಲ್ಲೆಯಲ್ಲಿರುವ ಎಲ್ಲ ವಸತಿ ಶಾಲೆಗಳಿಗೆ ಪ್ರವೇಶ ಪಡೆಯಲು ಮೀಸಲಾತಿಗನುಗುಣವಾಗಿ ಅರ್ಹರಾಗಿರುತ್ತಾನೆ. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಯು ಪ್ರಾಧಿಕಾರದ ವೆಬ್‌ಸೈಟ್ http://kea.kar.nic.in, www.kreis.kar.nic.in ಅಲ್ಲಿ ಅರ್ಜಿ ಸಲ್ಲಿಸಬಹುದು.ಪ್ರವೇಶ ಪರೀಕ್ಷೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಜ.25 ಕೊನೆಯ ದಿನವಾಗಿದೆ. ವಿದ್ಯಾರ್ಥಿಗಳು ಪ್ರವೇಶ ಪರೀಕ್ಷೆಯ ಪ್ರವೇಶ ಪತ್ರವನ್ನು 2025ರ ಫೆಬ್ರವರಿ 6ರ ನಂತರ ಅರ್ಜಿ ಸಲ್ಲಿಸಿದ ವಸತಿ ಶಾಲೆಯಲ್ಲಿ ಡೌನ್‌ಲೋಡ್ ಮಾಡಿಕೊಳ್ಳುವುದು. ಪ್ರವೇಶ ಪರೀಕ್ಷೆಯು 2025ರ ಫೆಬ್ರವರಿ 15ರಂದು ಮಧ್ಯಾಹ್ನ 2.30 ಗಂಟೆಯಿಂದ ಸಂಜೆ 4.30ರ ವರೆಗೆ ನಡೆಯಲಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.