ಬೆಳ್ತಂಗಡಿ : ಸಾರ್ವಜನಿಕರು ತಮ್ಮ ವೈಯಕ್ತಿಕ ಹಾಗೂ ಗ್ರಾಮಕ್ಕೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಈ ಸಭೆಯಲ್ಲಿ ಅಹವಾಲು ಸಲ್ಲಿಸಲು ಅವಕಾಶವಿದೆ. ಸಮಸ್ಯೆಗೆ ಸಂಬಂಧಿಸಿದ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿದಲ್ಲಿ, ಅದನ್ನು ಪರಿಶೀಲಿಸಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ರವಾನಿಸಿ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಲಾಗುವುದು ಎಂದು ತಹಸೀಲ್ದಾರ್ ಎಸ್.ಎನ್. ನರಗುಂದ ಹೇಳಿದರು. ಸಾರ್ವಜನಿಕರ ಸಮಸ್ಯೆ ಹಾಗೂ ಕುಂದುಕೊರತೆಗಳನ್ನು ನೇರವಾಗಿ ಆಲಿಸಿ, ಅವುಗಳಿಗೆ ಸಕಾಲದಲ್ಲಿ ಸೂಕ್ತ ಪರಿಹಾರ ಒದಗಿಸುವ ಉದ್ದೇಶದಿಂದ ಸರ್ಕಾರದ ಸುತ್ತೋಲೆಯಂತೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಆಯೋಜಿಸಲಾಗುತ್ತಿರುವ ಪ್ರಜಾಸೇವೆ ಆಂದೋಲನ ಸಭೆಯು ಶನಿವಾರ ಕಡಿರುದ್ಯಾವರ ಗ್ರಾಮ ಪಂಚಾಯಿತಿಯ ಸ್ವಾಮಿ ವಿವೇಕಾನಂದ ಸಭಾಭವನದಲ್ಲಿ ನಡೆಯಿತು.
ತಾಪಂ ಕಾರ್ಯನಿರ್ವಹಣಾಧಿಕಾರಿ ದಯಾವತಿ ಎಂ. ಮಾತನಾಡಿ, ಸರ್ಕಾರದ ಆಶಯದಂತೆ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಥಳೀಯ ಮಟ್ಟದಲ್ಲಿಯೇ ಸ್ಪಂದಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಮುಕ್ತವಾಗಿ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರ ಕಂಡುಕೊಳ್ಳಲು ಮುಂದಾಗಬೇಕು. ಸಲ್ಲಿಕೆಯಾದ ಅಹವಾಲುಗಳ ಬಗ್ಗೆ ಸಂಬಂಧಪಟ್ಟ ಇಲಾಖೆಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದು, ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದರು. ಸ್ಥಳೀಯರು ತಮ್ಮ ವೈಯಕ್ತಿಕ ಹಾಗೂ ಸಾರ್ವಜನಿಕ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಅರ್ಜಿಗಳನ್ನು ಸಲ್ಲಿಸಿದರು.ಪಿಡಿಒ ಅಧಿಕಾರಿ ರವಿ ಬನಪ್ಪನವರ್ ಸ್ವಾಗತಿಸಿದರು. ಕಂದಾಯ ಇಲಾಖೆಯ ಹೇಮಾ ಕಾರ್ಯಕ್ರಮ ನಿರೂಪಿಸಿದರು.