ಕನ್ನಡಪ್ರಭ ವಾರ್ತೆ ಮಂಗಳೂರು
ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಕಳೆದ ವಾರ ಮಂಗಳೂರಿಗೆ ಭೇಟಿ ನೀಡಿದ್ದ ಸಂದರ್ಭ ಮಾಣಿ- ಸಂಪಾಜೆ ಹೆದ್ದಾರಿಯನ್ನು ಚತುಷ್ಪಥ ರಸ್ತೆಯಾಗಿ ಮೇಲ್ದರ್ಜೆಗೇರಿಸಲು ಡಿಪಿಆರ್ ತಯಾರಿಸುವುದಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಕ್ಯಾ. ಚೌಟ ಮನವಿ ಮಾಡಿದ್ದರು. ಇದಕ್ಕೆ ತುರ್ತು ಸ್ಪಂದಿಸಿರುವ ಲೋಕೋಪಯೋಗಿ ಇಲಾಖೆಯು ರಾಷ್ಟ್ರೀಯ ಹೆದ್ದಾರಿ 275ರ ಮಾಣಿಯಿಂದ ಸಂಪಾಜೆವರೆಗಿನ 71.60 ಕಿ.ಮೀ. ದೂರದ ರಸ್ತೆ ಅಗಲೀಕರಣಕ್ಕೆ ಡಿಪಿಆರ್ ಸಿದ್ಧಪಡಿಸಲು ಸಮಾಲೋಚಕರನ್ನು ನೇಮಕಗೊಳಿಸಲು ಅನುಮತಿ ನೀಡಿದೆ.
ಜತೆಗೆ ಇದಕ್ಕೆ ತಗಲುವ ವೆಚ್ಚವಾದ 3.19 ಕೋಟಿ ರು.ಗಳನ್ನು ಏಜೆನ್ಸಿ ವೆಚ್ಚದಡಿ ಭರಿಸುವುದಕ್ಕೆ ಅನುಮೋದನೆ ನೀಡಿ ಆದೇಶ ಹೊರಡಿಸಿದೆ. ಶೀಘ್ರದಲ್ಲೇ ಮಾಣಿ-ಸಂಪಾಜೆಯನ್ನು ನಾಲ್ಕು ಪಥದ ರಸ್ತೆಯನ್ನಾಗಿ ಅಭಿವೃದ್ಧಿಪಡಿಸುವಲ್ಲಿ ವಿಸ್ತೃತ ಯೋಜನಾ ವರದಿ ತಯಾರಿಸುವುದಕ್ಕೆ ಏಜೆನ್ಸಿ ಆಯ್ಕೆ ಮಾಡಲು ಟೆಂಡರ್ ಪ್ರಕ್ರಿಯೆ ನಡೆಯಲಿದೆ.ಲೋಕೋಪಯೋಗಿ ಇಲಾಖೆಯ ತುರ್ತು ಸ್ಪಂದನೆಯನ್ನು ಶ್ಲಾಘಿಸಿರುವ ಸಂಸದ ಕ್ಯಾ. ಚೌಟ, ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಬಿ.ಸಿ. ರೋಡ್- ಅಡ್ಡಹೊಳೆ, ಪುಂಜಾಲಕಟ್ಟೆ- ಚಾರ್ಮಾಡಿ ಸೇರಿ ಹಲವು ಪ್ರಮುಖ ರಾಷ್ಟ್ರೀಯ ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸುವ ಕಾಮಗಾರಿ ಪ್ರಗತಿಯಲ್ಲಿದೆ. ಇದೀಗ ಜಿಲ್ಲೆಯ ಮತ್ತೊಂದು ಹೆದ್ದಾರಿ ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿ ಲೋಕೋಪಯೋಗಿ ಇಲಾಖೆಯಿಂದ ರಾಷ್ಟ್ರೀಯ ಹೆದ್ದಾರಿ ಇಲಾಖೆ ಮುಖ್ಯ ಎಂಜಿನಿಯರ್‌ಗೆ ಅನುಮತಿ ನೀಡಿ ಆದೇಶ ಬಂದಿರುವುದು ಸಂತಸ ತಂದಿದೆ ಎಂದು ಹೇಳಿದ್ದಾರೆ.
ನೆನೆಗುದಿಗೆ ಬಿದ್ದಿದ್ದ ಪ್ರಸ್ತಾವನೆಗೆ ಮರುಜೀವ
ರಾಷ್ಟ್ರೀಯ ಹೆದ್ದಾರಿ-275ರಲ್ಲಿ ಮಂಗಳೂರು ವಿಭಾಗ ವ್ಯಾಪ್ತಿಯ ಉಪವಿಭಾಗದಲ್ಲಿ ಬರುವ ಮಾಣಿ-ಸಂಪಾಜೆ ಹೆದ್ದಾರಿಯನ್ನು ಚತುಷ್ಪಥ ರಸ್ತೆಯನ್ನಾಗಿ ಅಭಿವೃದ್ಧಿಪಡಿಸಬೇಕೆಂಬುದು ಹಲವು ವರ್ಷಗಳ ಬೇಡಿಕೆಯಾಗಿತ್ತು. ಆದರೆ, ಡಿಪಿಆರ್‌ಗೆ ಸಂಬಂಧಿಸಿದಂತೆ 2022ರಲ್ಲಿ ಸಲ್ಲಿಕೆಯಾಗಿದ್ದ ಪ್ರಸ್ತಾವನೆಯು ನಾನಾ ಕಾರಣಗಳಿಂದ ನೆನೆಗುದ್ದಿಗೆ ಬಿದ್ದಿತ್ತು. ಅಲ್ಲದೆ ಹಿಂದಿನ ಪ್ರಸ್ತಾವನೆಯಲ್ಲಿ ಯಾವುದೇ ಪ್ರಗತಿ ಕಾಣದ ಕಾರಣ ಹಿಂದಿನದನ್ನು ಹೊರತುಪಡಿಸಿ ಸಂಸದ ಕ್ಯಾ. ಚೌಟ ಹೆಚ್ಚಿನ ಮುತುವರ್ಜಿ ವಹಿಸಿ ರಾಷ್ಟ್ರೀಯ ಹೆದ್ದಾರಿ ಇಲಾಖೆಗೆ ಈ ವರ್ಷ ಜನವರಿ ತಿಂಗಳಿನಲ್ಲಿ ಹೊಸದಾಗಿ ಪ್ರಸ್ತಾವನೆ ಸಲ್ಲಿಸಿದ್ದರು. ಅಲ್ಲದೆ, ಇತ್ತೀಚೆಗೆ ಲೋಕೋಪಯೋಗಿ ಸಚಿವರು ಜಿಲ್ಲೆಗೆ ಬಂದ ವೇಳೆ ಆದಷ್ಟು ಬೇಗ ಡಿಪಿಆರ್‌ಗೆ ಅನುಮತಿಸಲು ಕ್ರಮ ಜರುಗಿಸುವಂತೆ ಕೋರಿದ್ದರು.