ಎಸ್‌ಸಿಡಿಸಿಸಿ ಬ್ಯಾಂಕ್‌ಗೆ ‘ಎಪಿವೈ ರಾಷ್ಟ್ರೀಯ ಪ್ರಶಸ್ತಿ’

KannadaprabhaNewsNetwork |  
Published : Sep 14, 2024, 01:45 AM IST
ಪ್ರಶಸ್ತಿ ಸ್ವೀಕರಿಸುತ್ತಿರುವ ಎಸ್‌ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್. | Kannada Prabha

ಸಾರಾಂಶ

ಎಸ್‌ಸಿಡಿಸಿಸಿ ಬ್ಯಾಂಕ್ 2022-23ನೇ ಸಾಲಿನಲ್ಲಿ ಸರ್ವಾಂಗೀಣ ಪ್ರಗತಿಯೊಂದಿಗೆ ಗುರುತಿಸಿಕೊಂಡು ಲೆಕ್ಕ ಪರಿಶೋಧನೆಯಲ್ಲಿ ‘ಎ’ ವರ್ಗ ಪಡೆದು ಅಪೆಕ್ಸ್ ಬ್ಯಾಂಕಿನ ಪ್ರಥಮ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ಇದರೊಂದಿಗೆ ಎಸ್‌ಸಿಡಿಸಿಸಿ ಬ್ಯಾಂಕ್ 22ನೇ ಬಾರಿ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ ಪಡೆದ ಹೆಗ್ಗಳಿಕೆಗೆ ಪಾತ್ರವಾಗಿದೆ.

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‌ಸಿಡಿಸಿಸಿ ಬ್ಯಾಂಕ್‌)ಗೆ ಅಟಲ್ ಪಿಂಚಣಿ ಯೋಜನೆಯ ರಾಷ್ಟ್ರೀಯ ಪ್ರಶಸ್ತಿ (ಎಪಿವೈ ಪ್ರಶಸ್ತಿ) ಹಾಗೂ ರಾಜ್ಯದ ಪ್ರತಿಷ್ಠಿತ ಅಪೆಕ್ಸ್ ಬ್ಯಾಂಕಿನ ಪ್ರಥಮ ಪ್ರಶಸ್ತಿಯನ್ನು ಶುಕ್ರವಾರ ಬೆಂಗಳೂರಿನಲ್ಲಿ ಪ್ರದಾನ ಮಾಡಲಾಯಿತು.

ಕರ್ನಾಟಕ ಸಹಕಾರಿ ಅಪೆಕ್ಸ್ ಬ್ಯಾಂಕ್‌ನ ವಾರ್ಷಿಕ ಮಹಾಸಭೆಯಲ್ಲಿ ಅಟಲ್ ಪಿಂಚಣಿ ಯೋಜನೆಯ ರಾಷ್ಟ್ರೀಯ ಪ್ರಶಸ್ತಿ ಹಾಗೂ ಅಪೆಕ್ಸ್ ಬ್ಯಾಂಕಿನ ಪ್ರಥಮ ಪ್ರಶಸ್ತಿಯನ್ನು ಅಪೆಕ್ಸ್ ಬ್ಯಾಂಕಿನ ಅಧ್ಯಕ್ಷ ಬೆಳ್ಳಿಪ್ರಕಾಶ್ ಅವರಿಂದ ಎಸ್‌ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ. ಗೋಪಾಲಕೃಷ್ಣ ಭಟ್ ಸ್ವೀಕರಿಸಿದರು.

ಎಪಿವೈ ರಾಷ್ಟ್ರೀಯ ಪ್ರಶಸ್ತಿ: ಭಾರತ ಸರ್ಕಾರದ ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರದ ಕೋರಿಕೆಯಂತೆ ಎಸ್‌ಸಿಡಿಸಿಸಿ ಬ್ಯಾಂಕ್ 2019ರ ಜನವರಿ 11ರಂದು ಅಟಲ್ ಪಿಂಚಣಿ ಯೋಜನೆ ಅಡಿಯಲ್ಲಿ ನೋಂದಾಯಿಸಲ್ಪಟ್ಟಿದ್ದು, ಬ್ಯಾಂಕಿನ ಪ್ರತಿ ಶಾಖೆಗಳಲ್ಲಿ ಅಟಲ್ ಪಿಂಚಣಿ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತಂದು ಚಂದಾದಾರರನ್ನು ನೊಂದಾಯಿಸುವ ಗುರಿ ನೀಡಲಾಗಿತ್ತು. ಅದರಂತೆ ಈ ಯೋಜನೆಯಲ್ಲಿ ಬ್ಯಾಂಕ್ ಗಣನೀಯ ಪ್ರಗತಿ ಸಾಧಿಸಿದ್ದು ಮಾತ್ರವಲ್ಲ, ಇದುವರೆಗೆ ಒಟ್ಟು 10,717 ಚಂದಾದಾರರ ನೋಂದಣಿಯೊಂದಿಗೆ ದಾಖಲೆ ನಿರ್ಮಿಸಿದ ರಾಜ್ಯದ ಮೊದಲ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಎನ್ನುವ ಖ್ಯಾತಿಗೆ ಎಸ್‌ಸಿಡಿಸಿಸಿ ಬ್ಯಾಂಕ್ ಪಾತ್ರವಾಗಿ ಇದೀಗ ರಾಷ್ಟ್ರೀಯ ಪ್ರಶಸ್ತಿಯಿಂದ ಪುರಸ್ಕೃತಗೊಂಡಿದೆ.

ಅಪೆಕ್ಸ್ ಪ್ರಶಸ್ತಿ: ವೈವಿಧ್ಯಮಯ ಯೋಜನೆಗಳನ್ನು ಕಾರ್ಯಗತಗೊಳಿಸಿ ಆಧುನಿಕ ಬ್ಯಾಂಕಿಂಗ್ ಸೇವೆಯಲ್ಲಿ ರಾಷ್ಟ್ರಕ್ಕೆ ಮಾದರಿಯಾಗಿರುವ ಎಸ್‌ಸಿಡಿಸಿಸಿ ಬ್ಯಾಂಕ್ 2022-23ನೇ ಸಾಲಿನಲ್ಲಿ ಸರ್ವಾಂಗೀಣ ಪ್ರಗತಿಯೊಂದಿಗೆ ಗುರುತಿಸಿಕೊಂಡು ಲೆಕ್ಕ ಪರಿಶೋಧನೆಯಲ್ಲಿ ‘ಎ’ ವರ್ಗ ಪಡೆದು ಅಪೆಕ್ಸ್ ಬ್ಯಾಂಕಿನ ಪ್ರಥಮ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ಇದರೊಂದಿಗೆ ಎಸ್‌ಸಿಡಿಸಿಸಿ ಬ್ಯಾಂಕ್ 22ನೇ ಬಾರಿ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ ಪಡೆದ ಹೆಗ್ಗಳಿಕೆಗೆ ಪಾತ್ರವಾಗಿದೆ.

ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅಪೆಕ್ಸ್ ಬ್ಯಾಂಕಿನ ನಿರ್ದೇಶಕರು ಹಾಗೂ ಸಚಿವ ಶಿವಾನಂದ ಎಸ್. ಪಾಟೀಲ್, ನಿರ್ದೇಶಕರಾದ ಸಿದ್ದಪ್ಪ ಕಲ್ಲಪ್ಪ ಸವದಿ, ಶರಣೇಗೌಡ ಬಯ್ಯಾಪುರ್, ಟಿ. ಎಂ. ಚಂದ್ರಶೇಖರಯ್ಯ, ಆರ್.ಎಂ. ಮಂಜುನಾಥ್ ಗೌಡ, ಅಮರಾವತಿ ಸಿ. ಅಶ್ವಥ್, ಶಿವಾನಂದ ಅಪ್ಪ ಸಾಹೇಬ್ ಮನಕರ್, ಕೊಡಂದೇರ ಪಿ. ಗಣಪತಿ, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸಿ.ಎನ್. ದೇವರಾಜ್, ಎಸ್‌ಸಿಡಿಸಿಸಿ ಬ್ಯಾಂಕಿನ ನಿರ್ದೇಶಕ ಶಶಿಕುಮಾರ್ ಬಾಲ್ಯೋಟ್ಟು ಮೊದಲಾದವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

5 ಪಾಲಿಕೆಗಳಲ್ಲಿ ಜಯಭೇರಿ ಬಾರಿಸಲು ಬಿಜೆಪಿಗೆ ಒಳ್ಳೆ ಅವಕಾಶ
ಸಿಎಂ ಗಾದಿ ಸಂಚಲನ : ನಾನು ಸಿಎಂ ಆಗಲಿ ಎಂಬುದು ಜನರ ಬಯಕೆ ಎಂದರು ಡಿಕೆಶಿ