ಕನ್ನಡಪ್ರಭ ವಾರ್ತೆ ಉಡುಪಿ
ರಾಜ್ಯ ಕಂಡ ಅತ್ಯಂತ ಅನುಭವಿ, ಪ್ರಾಮಾಣಿಕ ರಾಜಕಾರಣಿ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು. ತಮ್ಮ ಕ್ರಾಂತಿಕಾರಕ ನಿರ್ಧಾರಗಳಿಂದ ರಾಜ್ಯದಲ್ಲಿ ಮಹತ್ವದ ಬದಲಾವಣೆಗೆ ಮತ್ತು ಹಿಂದುಳಿದ ವರ್ಗದವರ ಏಳಿಗೆಗೆ ಕಾರಣರಾದವರು ಎಂದು ಶಾಸಕ ಯಶ್ಪಾಲ್ ಎ. ಸುವರ್ಣ ಹೇಳಿದರು.ಅವರು ಮಂಗಳವಾರ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಜಗನ್ನಾಥ ಸಭಾಭವನದಲ್ಲಿ ಜಿಲ್ಲಾಡಳಿತ ವತಿಯಿಂದ ಆಯೋಜಿಸಲಾದ ಡಿ.ದೇವರಾಜ ಅರಸು ಅವರ 109ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಹಿಂದುಳಿದ ವರ್ಗಗಳ ಜನರಿಗೆ ಶೇ.27ರಷ್ಟು ಮೀಸಲಾತಿ, ಉಳುವವನೇ ಭೂ ಒಡೆಯ ಕಾರ್ಯಕ್ರಮದ ಮೂಲಕ ರೈತರ ಬದುಕಿಗೆ ಆಶಾಕಿರಣವಾಗಿ, ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ಹಾಸ್ಟೆಲ್‌ಗಳ ನಿರ್ಮಾಣ, ಮೀಸಲಾತಿ ನಿಯಮಗಳ ಮೂಲಕ ಹಿಂದುಳಿದ ವರ್ಗಗಳ ಬೆಳವಣಿಗೆಗೆ ಅಪಾರ ಕೊಡುಗೆ ನೀಡಿದ್ದಾರೆ ಎಂದರು.ಡಿ.ದೇವರಾಜ ಅರಸು ಅವರ ವ್ಯಕ್ತಿತ್ವ ಮತ್ತು ಸಾಧನೆ ಕುರಿತು ಜಿಲ್ಲೆಯ ಉಪ ಪೊಲೀಸ್ ಅಧೀಕ್ಷಕ ಡಿ.ಟಿ ಪ್ರಭು ಉಪನ್ಯಾಸ ನೀಡಿ, ಕರ್ನಾಟಕ ಕಂಡ ಅಪರೂಪದ ರಾಜಕಾರಣಿ ಡಿ. ದೇವರಾಜ ಅರಸು. ದೇಶದಲ್ಲಿ ಮೊದಲ ಬಾರಿಗೆ ಭೂ ಸುಧಾರಣೆ ಕಾಯ್ದೆ, ಮಲ ಹೊರುವ ಪದ್ಧತಿ ನಿಷೇಧ, ಪೌರಾಡಳಿತ ಸಂಸ್ಥೆಗಳಲ್ಲಿ ಕಾಯಂ ಹುದ್ದೆ, ಕೇಂದ್ರದ 20 ಅಂಶಗಳು ಸೇರಿದಂತೆ ನೂರಾರು ಕಾಯ್ದೆಗಳನ್ನು ಅನುಷ್ಠಾನಗೊಳಿಸಿದರು. ನಿರುದ್ಯೋಗಿ ಪದವೀಧರ ಯುವ ಜನರಿಗೆ ಸ್ಟೈಫಂಡ್ ಅನ್ನು ದೇಶದಲ್ಲಿಯೇ ಪ್ರಥಮವಾಗಿ ನೀಡಿದರು ಎಂದು ಹೇಳಿದರು.
ಈ ಸಂದರ್ಭ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಹಾಸ್ಟೆಲ್‌ಗಳ ವಿದ್ಯಾರ್ಥಿಗಳನ್ನು ಸನ್ಮಾನಿಸಿದರು.ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್., ಜಿ.ಪಂ. ಉಪಕಾರ್ಯದರ್ಶಿ ರಾಧಾಕೃಷ್ಣ ಅಡಿಗ, ಪೌರಾಯುಕ್ತ ರಾಯಪ್ಪ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಐ.ಪಿ. ಗಡಾದ್, ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಎಲ್ಲಮ್ಮ, ಡಿ.ದೇವರಾಜ ಅರಸು ಪ್ರಶಸ್ತಿ ಪುರಸ್ಕೃತ ಮಲ್ಪೆ ರಾಘವೇಂದ್ರ ಮತ್ತಿತರರು ಉಪಸ್ಥಿತರಿದ್ದರು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಹಾಕಪ್ಪ ಆರ್. ಲಮಾಣಿ ಸ್ವಾಗತಿಸಿದರು. ಉಡುಪಿ ತಾಲೂಕು ವಿಸ್ತರಣಾಧಿಕಾರಿ ಶ್ರೀಕಾಂತ್ ನಿರೂಪಿಸಿದರು. ಇಲಾಖೆಯ ಲೆಕ್ಕ ಅಧೀಕ್ಷಕಿ ಸುಗುಣ ವಂದಿಸಿದರು.