20ರಂದು ಅರಸು ಜಯಂತಿ: ಸಿದ್ಧತೆ ನಡೆಸಿ

KannadaprabhaNewsNetwork |  
Published : Aug 13, 2026, 01:45 AM IST
ಕ್ಯಾಪ್ಷನ12ಕೆಡಿವಿಜಿ34 ದಾವಣಗೆರೆಯಲ್ಲಿ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರ ಸ್ವಾಮಿ ಅಧ್ಯಕ್ಷತೆಯಲ್ಲಿ ಡಿ.ದೇವರಾಜ ಅರಸು ಜನ್ಮದಿನಾಚರಣೆಯ ಪೂರ್ವಭಾವಿ ಸಿದ್ಧತಾ ಸಭೆ ನಡೆಯಿತು. | Kannada Prabha

ಸಾರಾಂಶ

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ 111ನೇ ಜನ್ಮದಿನಾಚರಣೆಯನ್ನು ಆಗಸ್ಟ್ 20ರಂದು ಜಿಲ್ಲೆಯಲ್ಲಿ ಅತ್ಯಂತ ಅರ್ಥಪೂರ್ಣ ಹಾಗೂ ವಿಜೃಂಭಣೆಯಿಂದ ಆಚರಿಸಲು ಅಧಿಕಾರಿಗಳು ಅಗತ್ಯ ಪೂರ್ವಭಾವಿ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಸೂಚಿಸಿದ್ದಾರೆ.

- ಪೂರ್ವಸಿದ್ಧತಾ ಸಭೆಯಲ್ಲಿ ಅಧಿಕಾರಿಗಳಿಗೆ ಡಿಸಿ ಗಂಗಾಧರ ಸ್ವಾಮಿ ಸೂಚನೆ

- - -

ಕನ್ನಡಪ್ರಭ ವಾರ್ತೆ ದಾವಣಗೆರೆ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ 111ನೇ ಜನ್ಮದಿನಾಚರಣೆಯನ್ನು ಆಗಸ್ಟ್ 20ರಂದು ಜಿಲ್ಲೆಯಲ್ಲಿ ಅತ್ಯಂತ ಅರ್ಥಪೂರ್ಣ ಹಾಗೂ ವಿಜೃಂಭಣೆಯಿಂದ ಆಚರಿಸಲು ಅಧಿಕಾರಿಗಳು ಅಗತ್ಯ ಪೂರ್ವಭಾವಿ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಲಾಗಿದ್ದ ಡಿ.ದೇವರಾಜ ಅರಸು 111ನೇ ಜನ್ಮದಿನಾಚರಣೆಯ ಪೂರ್ವಭಾವಿ ಸಿದ್ಧತಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮಾಜಿ ಸಿಎಂ ದೇವರಾಜ ಅರಸು ಜಯಂತಿ ಕಾರ್ಯಕ್ರಮವನ್ನು ಸರ್ಕಾರದ ಸುತ್ತೋಲೆಯ ಪ್ರಕಾರ, ಯಾವುದೇ ಕೊರತೆ ಆಗದಂತೆ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ವಿವಿಧ ಸಂಘ- ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಅಧಿಕಾರಿಗಳು ಶ್ರಮಿಸಬೇಕು ಎಂದರು.

ಈ ವರ್ಷ ಜಿಲ್ಲೆಯ ಎಲ್ಲ ಶಾಲೆ ಮತ್ತು ಕಾಲೇಜುಗಳಲ್ಲಿ ದೇವರಾಜ ಅರಸು ಜೀವನ, ಸಾಧನೆ ಮತ್ತು ಕೊಡುಗೆಗಳ ಕುರಿತು ಪ್ರಬಂಧ ಹಾಗೂ ಭಾಷಣ ಸ್ಪರ್ಧೆಗಳನ್ನು ಆಯೋಜಿಸಿ, ತಾಲೂಕುಮಟ್ಟದಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸಲಾಗುವುದು ಎಂದರು.

ಜಯಂತಿ ಕಾರ್ಯಕ್ರಮವನ್ನು ನಗರದ ಬಕ್ಕೇಶ್ವರ ಕಲ್ಯಾಣ ಮಂಟಪ ಅಥವಾ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ತುಂಗಭದ್ರಾ ಸಭಾಂಗಣದಲ್ಲಿ ಆಯೋಜಿಸಲು ಪರಿಶೀಲಿಸಲಾಗುವುದು. ಜೊತೆಗೆ, ನಗರದಲ್ಲಿ ಆಕರ್ಷಕ ಮೆರವಣಿಗೆಯನ್ನು ಆಯೋಜಿಸಲು ಕ್ರಮ ವಹಿಸುವಂತೆ ತಿಳಿಸಿದರು.

ಎಲ್.ಇ.ಡಿ. ಫ್ಲೆಕ್ಸ್ ಬೋರ್ಡ್‌ಗಳು, ವಾಹನಗಳು, ಪತ್ರಿಕೆಗಳಲ್ಲಿ ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ಜಯಂತಿ ಕಾರ್ಯಕ್ರಮದ ಕುರಿತು ಜಿಲ್ಲಾದ್ಯಂತ ವ್ಯಾಪಕ ಪ್ರಚಾರ ನೀಡಲು ಕ್ರಮ ವಹಿಸುವಂತೆ ಹಾಗೂ ಅರಸು ಅವರ ತತ್ವಾದರ್ಶ ಹಾಗೂ ಸಾಧನೆಗಳ ಕುರಿತು ಪ್ರಬುದ್ಧವಾಗಿ ಮಾತನಾಡಬಲ್ಲ ಉತ್ತಮ ಸಂಪನ್ಮೂಲ ವ್ಯಕ್ತಿಗಳನ್ನು/ ಉಪನ್ಯಾಸಕರನ್ನು ಆಯ್ಕೆ ಮಾಡುವಂತೆ ತಿಳಿಸಿದರು.

ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳು, ಸರ್ಕಾರಿ ಕಚೇರಿಗಳು ಮತ್ತು ತಾಲೂಕು ಕೇಂದ್ರಗಳಲ್ಲಿ ಕಡ್ಡಾಯವಾಗಿ ದೇವರಾಜ ಅರಸು ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಜಯಂತಿ ಆಚರಿಸಬೇಕು. ಅಂದು ಕಾರ್ಯಕ್ರಮಕ್ಕೂ ಮುನ್ನ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿರುವ ಡಿ.ದೇವರಾಜು ಅರಸು ಪ್ರತಿಮೆಗೆ ಮಾಲಾರ್ಪಣೆ ಮಾಡಲು ಕ್ರಮವಹಿಸುವಂತೆ ತಿಳಿಸಿದರು.

ಸಭೆಯಲ್ಲಿ ಜಿಪಂ ಸಿಇಒ ಗಿತ್ತೆ ಮಾಧವ ವಿಠ್ಠಲ ರಾವ್, ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರೇಣುಕ, ಮಹಾನಗರ ಪಾಲಿಕೆ ಆಯುಕ್ತ ಡಾ.ಮಹಾಂತೇಶ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಸಿದ್ದಲಿಂಗೇಶ್, ಅಲೆಮಾರಿ ಸಮುದಾಯದ ಜಿಲ್ಲಾಧ್ಯಕ್ಷ ಆರ್.ರಂಗಪ್ಪ, ಗೊಲ್ಲ ಸಮಾಜದ ಜಿಲ್ಲಾಧ್ಯಕ್ಷ ಬಾಲರಾಜು, ಕುಂಬಾರ ಸಂಘದ ಉಪಾಧ್ಯಕ್ಷ ಲೊಕೇಶ್, ಹೇಳವ ಸಮಾಜದ ಜಿಲ್ಲಾಧ್ಯಕ್ಷರಾದ ರಾಮಪ್ಪ, ವೆಂಕಟೇಶ್, ವಿವಿಧ ಸಂಘ- ಸಂಸ್ಥೆಗಳ ಮುಖ್ಯಸ್ಥರು ಹಾಗೂ ಎಲ್ಲ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

- - -

(ಟಾಪ್‌ ಕೋಟ್‌) ಈ ಬಾರಿಯ ಮಾಜಿ ಸಿಎಂ ದೇವರಾಜ ಅರಸು ಜಯಂತಿ ಕಾರ್ಯಕ್ರಮಕ್ಕೆ ಜಿಲ್ಲೆಯ ಎಲ್ಲ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ತಮ್ಮ ಕುಟುಂಬ ಸಮೇತರಾಗಿ ಕಡ್ಡಾಯವಾಗಿ ಆಗಮಿಸಬೇಕು. ಜೊತೆಗೆ ವಸತಿ ಶಾಲೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ನಿಲಯಗಳ ವಿದ್ಯಾರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಕರೆತರಬೇಕು.

- ಜಿ.ಎಂ. ಗಂಗಾಧರ ಸ್ವಾಮಿ, ಜಿಲ್ಲಾಧಿಕಾರಿ.

- - -

-12ಕೆಡಿವಿಜಿ34:

ದಾವಣಗೆರೆಯಲ್ಲಿ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಅಧ್ಯಕ್ಷತೆಯಲ್ಲಿ ಡಿ.ದೇವರಾಜ ಅರಸು ಜನ್ಮದಿನಾಚರಣೆಯ ಪೂರ್ವಭಾವಿ ಸಿದ್ಧತಾ ಸಭೆ ನಡೆಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪರಮಾಣು ವಿದ್ಯುತ್ ಸಾಮರ್ಥ್ಯ ವಿಸ್ತರಣೆಗೆ ಒತ್ತು
ನೀರು ಬಿಡುವಂತೆ ಆದೇಶ ಸಮಿತಿ, ಪ್ರಾಧಿಕಾರದ ವಿರುದ್ಧ ಆಕ್ರೋಶ, ಪ್ರತಿಭಟನೆ