ಕನ್ನಡಪ್ರಭ ವಾರ್ತೆ ಮಡಿಕೇರಿ
ಅರೆಭಾಷೆ ಉಳಿದರೆ ಮಾತ್ರ ಅರೆಭಾಷೆ ಸಂಸ್ಕೃತಿ, ಸಮಾಜ ಉಳಿಯಲು ಸಾಧ್ಯ. ಆ ನಿಟ್ಟಿನಲ್ಲಿ ತಮ್ಮದೇ ಆದ ವಿಭಿನ್ನ ಸಂಸ್ಕೃತಿ, ಆಚಾರ-ವಿಚಾರ ಕಲೆಗಳನ್ನು ಉಳಿಸಿಕೊಂಡು ಬಂದಿರುವ ಅರೆಭಾಷೆಯನ್ನು ಎಲ್ಲೆಡೆ ಪಸರಿಸುವಂತಾಗಬೇಕು ಎಂದು ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಕರೆ ನೀಡಿದ್ದಾರೆ.ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಭಾಗಮಂಡಲ ನಾಡಗೌಡ ಸಮಾಜ, ಕರಿಕೆ, ಚೇರಂಬಾಣೆ ಗೌಡ ಸಮಾಜ, ಭಾಗಮಂಡಲ ನಾಡಗೌಡ ಯುವ ಒಕ್ಕೂಟ ಮತ್ತು ಚೇರಂಬಾಣೆ ಗೌಡ ಮಹಿಳಾ ಒಕ್ಕೂಟ ಇವರ ಸಹಯೋಗದಲ್ಲಿ ಭಾಗಮಂಡಲದ ಮಾರುಕಟ್ಟೆ ಆವರಣದಲ್ಲಿ ಮಂಗಳವಾರ ನಡೆದ ‘ಅರೆಭಾಷೆ ಗಡಿನಾಡ ಉತ್ಸವ’ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಅರೆಭಾಷಿಕರು ಸ್ವಾತಂತ್ರ್ಯ ಪೂರ್ವದಲ್ಲಿ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ್ದಾರೆ. ಅಮರ ಸುಳ್ಯ ಇತಿಹಾಸವು ಇದಕ್ಕೆ ಸಾಕ್ಷಿಯಾಗಿದೆ. ಆ ನಿಟ್ಟಿನಲ್ಲಿ ಸ್ವಾತಂತ್ರ್ಯಕ್ಕಾಗಿ ಹೋರಾಡಿದವರನ್ನು ಸದಾ ಸ್ಮರಿಸುವಂತಾಗಬೇಕು ಎಂದರು.ತಾಯಿ ಭಾಷೆಗೆ ಹೆಚ್ಚಿನ ಒತ್ತು: ಮುಂದಿನ ಒಂದು ಶತಮಾನದಲ್ಲಿ ಕನ್ನಡ ಭಾಷೆ ಮಾತನಾಡುವವರ ಸಂಖ್ಯೆ ಕಡಿಮೆಯಾಗುತ್ತದೆ ಎಂಬ ಆತಂಕ ಎಲ್ಲೆಡೆ ಎದುರಾಗುತ್ತಿದೆ. ಆದ್ದರಿಂದ ಸ್ಥಳೀಯ ಭಾಷೆಗಳಾದ ಅರೆಭಾಷೆ, ಕೊಡವ, ತುಳು, ಕೊಂಕಣಿ, ಹೀಗೆ ಸಣ್ಣ ಸಣ್ಣ ಭಾಷೆಗಳನ್ನು ಉಳಿಸಿದ್ದಲ್ಲಿ, ಕನ್ನಡ ಭಾಷೆ ಉಳಿಯಲು ಸಾಧ್ಯ. ಆ ನಿಟ್ಟಿನಲ್ಲಿ ತಾಯಿ ಭಾಷೆಗೆ ಹೆಚ್ಚಿನ ಒತ್ತು ನೀಡುವಂತಾಗಬೇಕು. ಜೀವನಕ್ಕೆ ಇತರೆ ಭಾಷೆ ಕಲಿಯುವಂತಾಗಬೇಕು ಎಂದು ಎ.ಎಸ್.ಪೊನ್ನಣ್ಣ ಅವರು ಅಭಿಪ್ರಾಯಪಟ್ಟರು.
ಅರೆಭಾಷೆಯು ನಾಡಿನ ಹೆಮ್ಮೆಯ ಸಾಹಿತ್ಯ, ಸಂಸ್ಕೃತಿ ಹೊಂದಿದೆ. ಆ ನಿಟ್ಟಿನಲ್ಲಿ ಅರೆಭಾಷೆ, ಸಾಹಿತ್ಯ, ಸಂಸ್ಕೃತಿಯಲ್ಲಿ ಉತ್ತಮ ಸಾಧನೆ ಮಾಡುವತ್ತ ಮುನ್ನಡೆಯಬೇಕು. ಮಕ್ಕಳ ಉಜ್ವಲ ಭವಿಷ್ಯ ಮತ್ತು ಬದುಕು ರೂಪಿಸಿಕೊಳ್ಳುವತ್ತ ಹೆಜ್ಜೆ ಇಡಬೇಕು ಎಂದು ಎ.ಎಸ್.ಪೊನ್ನಣ್ಣ ನುಡಿದರು.ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ ಮಾತನಾಡಿ, ಈಗಾಗಲೇ ಗಡಿನಾಡ ಉತ್ಸವವನ್ನು ಸುಳ್ಯದ ಬಂದಡ್ಕ, ಮಂಡೆಕೋಲು, ಹಾಗೆಯೇ ಕೊಡಗು ಜಿಲ್ಲೆಯ ಚೆಯ್ಯಂಡಾಣೆ, ಕುಶಾಲನಗರ ಮತ್ತು ಭಾಗಮಂಡಲದಲ್ಲಿ ಹಮ್ಮಿಕೊಂಡು ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದರು.
ಅಭಿವೃದ್ಧಿಯತ್ತ ಗಮನ: ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷರಾದ ಧರ್ಮಜ ಉತ್ತಪ್ಪ ಮಾತನಾಡಿ ಸ್ಪರ್ಧೆ ಎಲ್ಲಾ ರಂಗದಲ್ಲೂ ಇದೆ. ಆರೋಗ್ಯಯುತ ಸ್ಪರ್ಧೆ ಇದ್ದಾಗ ಗೆಲುವು ಸಾಧಿಸಲು ಸಾಧ್ಯ. ಆ ನಿಟ್ಟಿನಲ್ಲಿ ವಾಟ್ಸಾಪ್ ಸಂದೇಶಗಳಿಗೆ ಕಿವಿಗೊಡದೆ ಅಭಿವೃದ್ಧಿಯತ್ತ ಗಮನಹರಿಸಬೇಕು ಎಂದರು.ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲರಾದ ಡಾ.ಕೋರನ ಸರಸ್ವತಿ ಪ್ರಕಾಶ್ ಮಾತನಾಡಿ, ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯಕ್ಕೆ ತನ್ನದೇ ಆದ ಇತಿಹಾಸವಿದೆ. ಆ ನಿಟ್ಟಿನಲ್ಲಿ ಅರೆಭಾಷೆ ಸಂಸ್ಕೃತಿ, ಸಾಹಿತ್ಯ ಪರಂಪರೆಯನ್ನು ಉಳಿಸಿಕೊಂಡು ಹೋಗಬೇಕು ಎಂದರು.
ಭಾಗಮಂಡಲ ಗ್ರಾ.ಪಂ.ಅಧ್ಯಕ್ಷರಾದ ಕಾಳನ ರವಿ ಮಾತನಾಡಿ, ಎರಡು ವರ್ಷಗಳ ಹಿಂದೆ ಭಾಗಮಂಡಲದಲ್ಲಿ ಕಾರ್ಯಕ್ರಮ ಆಯೋಜಿಸುವಂತಾಗಬೇಕು ಎಂದು ಮನವಿ ಮಾಡಲಾಗಿತ್ತು. ಆ ನಿಟ್ಟಿನಲ್ಲಿ ಇಂದು ಅಕಾಡೆಮಿ ವತಿಯಿಂದ ಅರೆಭಾಷೆ ಗಡಿನಾಡ ಉತ್ಸವ ಆಯೋಜಿಸಿರುವುದು ಶ್ಲಾಘನೀಯವಾಗಿದೆ. ಇದಕ್ಕೆ 2 ಸಾವಿರಕ್ಕೂ ಹೆಚ್ಚು ಜನರು ಪಾಲ್ಗೊಂಡಿರುವುದೇ ಸಾಕ್ಷಿಯಾಗಿದೆ ಎಂದರು.ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷರಾದ ಸೂರ್ತಲೆ ಸೋಮಣ್ಣ ಮಾತನಾಡಿ, ಅರೆಭಾಷೆ ಅಕಾಡೆಮಿ ಸ್ಥಾಪನೆಗೆ ಹಲವರು ಪ್ರಯತ್ನಿಸಿದ್ದಾರೆ. ಆ ನಿಟ್ಟಿನಲ್ಲಿ ಅಕಾಡೆಮಿ ವತಿಯಿಂದ ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯವನ್ನು ಬೆಳೆಸುವಲ್ಲಿ ಸಹಕಾರಿಯಾಗಿದೆ ಎಂದರು.
ಸಂಸ್ಕೃತಿ ಉಳಿಯಲು ಸಾಧ್ಯ: ಜಿಲ್ಲೆಯ ಶ್ರೀ ಆದಿಚುಂಚನಗಿರಿ ಶಾಖಾಮಠದ ಶ್ರೀ ಶಂಭುನಾಥ ಸ್ವಾಮೀಜಿಯವರು ಮಾತನಾಡಿ ತಾಯಿ ಭಾಷೆಯನ್ನು ಉಳಿಸಿದಲ್ಲಿ ಸಂಸ್ಕೃತಿ ಉಳಿಯಲು ಸಾಧ್ಯ. ಆ ನಿಟ್ಟಿನಲ್ಲಿ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯವನ್ನು ಉಳಿಸಿ ಬೆಳೆಸಬೇಕು ಎಂದರು.ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷರಾದ ಕೊಲ್ಯದ ಗಿರೀಶ್ , ಅಕಾಡೆಮಿ ಮಾಜಿ ಅಧ್ಯಕ್ಷರಾದ ಲಕ್ಷ್ಮಿನಾರಾಯಣ ಕಜೆಗದ್ದೆ, ಅಕಾಡೆಮಿ ಮಾಜಿ ಅಧ್ಯಕ್ಷರಾದ ಪಿ.ಸಿ.ಜಯರಾಮ ಮಾತನಾಡಿದರು.
ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಹಿರಿಯರನ್ನು ಇದೇ ಸಂದರ್ಭದಲ್ಲಿ ಗೌರವಿಸಲಾಯಿತು. ಗ್ಯಾರಂಟಿ ಯೋಜನಾ ತಾಲೂಕು ಅನುಷ್ಠಾನ ಸಮಿತಿ ಅಧ್ಯಕ್ಷರಾದ ಮಂದ್ರೀರ ಮೋಹನ್ ದಾಸ್, ಕೊಡಗು ಗೌಡ ಮಹಿಳಾ ಒಕ್ಕೂಟದ ಅಧ್ಯಕ್ಷರಾದ ಅಮೆ ದಮಯಂತಿ, ಚೇರಂಬಾಣೆ ಗೌಡ ಸಮಾಜದ ಅಧ್ಯಕ್ಷರಾದ ಕೊಡಪಾಲು ಗಣಪತಿ, ಚೇರಂಬಾಣೆ ಗೌಡ ಮಹಿಳಾ ಒಕ್ಕೂಟದ ಅಧ್ಯಕ್ಷರಾದ ಕಡ್ಲೇರ ತುಳಸಿ ಮೋಹನ್, ಭಾಗಮಂಡಲ ನಾಡ ಗೌಡ ಸಮಾಜದ ಅಧ್ಯಕ್ಷರಾದ ಪಿ.ಪಳಂಗಪ್ಪ, ಕರಿಕೆ ಗೌಡ ಸಮಾಜದ ಅಧ್ಯಕ್ಷರಾದ ಕೋಡಿ ಪೊನ್ನಪ್ಪ, ಅಕಾಡೆಮಿ ಸದಸ್ಯರಾದ ಚಂದ್ರಶೇಖರ ಪೆರಾಲು, ತೇಜಕುಮಾರ ಕುಡೆಕಲ್ಲು, ಚಂದ್ರಾವತಿ ಬಡ್ಡಡ್ಕ, ಲತಾ ಪ್ರಸಾದ್ ಕುದ್ಪಾಜೆ, ನಿಡ್ಯಮಲೆ ಡಾ.ಜ್ಞಾನೇಶ್, ಸಂದೀಪ್ ಪೂಳಕಂಡ, ವಿನೋದ್ ಮೂಡಗದ್ದೆ, ಮೋಹನ್ ಪೊನ್ನಚ್ಚನ, ರಿಜಿಸ್ಟ್ರಾರ್ ಚಿನ್ನಸ್ವಾಮಿ ಇತರರು ಇದ್ದರು.ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ನಿರ್ದೇಶಕರಾದ ಹೊಸೂರು ಜೆ.ಸತೀಶ್ ಕುಮಾರ್ ಸ್ವಾಗತಿಸಿದರು. ಪಟ್ಟಡ ಶಿವಕುಮಾರ್, ಕೆ.ಜೆ.ದಿವಾಕರ, ಲತಾಶ್ರೀ ಮೋಂಟಡ್ಕ ನಿರೂಪಿಸಿದರು. ಭಾಗಮಂಡಲ ನಾಡಗೌಡ ಯುವ ಒಕ್ಕೂಟದ ಅಧ್ಯಕ್ಷರಾದ ಕುದುಕುಳಿ ಕಿಶೋರ್ ಕುಮಾರ್ ವಂದಿಸಿದರು.
ಸುಳ್ಯದ ಶಿವಪ್ರಸಾದ್ ಆಲೆಟ್ಪಿ ಮತ್ತು ಬಳಗದವರಿಂದ ಅರೆಭಾಷೆ ಸಂಗೀತ ರಸಮಂಜರಿ ನಡೆಯಿತು. ಭಾಗಮಂಡಲ ಕರಿಕೆ ಗೇಟ್ ಬಳಿಯಿಂದ ಮೆರವಣಿಗೆಗೆ ಶಂಭುನಾಥ ಸ್ವಾಮೀಜಿ ಅವರು ಚಾಲನೆ ನೀಡಿದರು.ಸುಗ್ಗಿ ಕುಣಿತ, ಕೋಲಾಟ, ಗಮನ ಸೆಳೆಯಿತು. ಪೂರ್ಣಕುಂಭದೊಂದಿಗೆ ಮೆರವಣಿಗೆಯಲ್ಲಿ ಮಹಿಳಾ ಸಂಘಟಕರು ಪಾಲ್ಗೊಂಡಿದ್ದರು. ಮೆರವಣಿಗೆಯಲ್ಲಿ ವೆಂಕಟ್ರಮಣ ಸ್ವಾಮಿ ಸ್ತಬ್ಧಚಿತ್ರದೊಂದಿಗೆ ಕುದುರೆ ಮೆರವಣಿಗೆ ಆಕರ್ಷಣೀಯವಾಗಿತ್ತು. ವಿವಿಧ ವಾದ್ಯ ತಂಡಗಳು ಪಾಲ್ಗೊಂಡಿದ್ದು ವಿಶೇಷವಾಗಿತ್ತು.