ಕನ್ನಡಪ್ರಭ ವಾರ್ತೆ ಮಡಿಕೇರಿಮಡಿಕೇರಿ ತಾಲೂಕಿನ ಅರೆಕಾಡು, ಹೊಸ್ಕೇರಿ, ಅಭ್ಯತ್‌ಮಂಗಲ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು, ವಾಹನ ಸಂಚಾರ ಅಸಾಧ್ಯವಾಗಿದೆ. ಆದ್ದರಿಂದ ರಸ್ತೆ ಅಭಿವೃದ್ಧಿ ಕಾರ್ಯಕ್ಕೆ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಕೊಡವ ವೆಲ್ಫೇರ್ ಆ್ಯಂಡ್ ರಿಕ್ರಿಯೇಷನ್ ಅಸೋಸಿಯೇಷನ್ ಲೋಕೋಪಯೋಗಿ ಇಲಾಖೆಗೆ ಮನವಿ ಪತ್ರ ಸಲ್ಲಿಸಿದೆ.ರಸ್ತೆ ಅವ್ಯವಸ್ಥೆಯಿಂದ ವಾಹನಗಳು ಮತ್ತು ಪಾದಾಚಾರಿಗಳ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಈ ಹಿಂದೆ ಕೂಡ ರಸ್ತೆ ಅವ್ಯವಸ್ಥೆ ಕುರಿತು ಶಾಸಕರ ಗಮನ ಸೆಳೆಯಲಾಗಿತ್ತು. ಅಲ್ಲದೆ ಶಾಸಕರು ಸ್ಥಳ ಪರಿಶೀಲನೆ ಮಾಡಿ ರಸ್ತೆ ಅಭಿವೃದ್ಧಿಯ ಬಗ್ಗೆ ಭರವಸೆ ನೀಡಿದ್ದರು. ಆದರೆ ಇಲ್ಲಿ ವರೆಗೆ ರಸ್ತೆ ಅಭಿವೃದ್ಧಿಯನ್ನು ಕಂಡಿಲ್ಲ, ಬದಲಿಗೆ ಮತ್ತಷ್ಟು ಹದಗೆಟ್ಟಿದೆ. ದ್ವಿಚಕ್ರ ವಾಹನಗಳು ಹಾಗೂ ಪಾದಾಚಾರಿಗಳು ನಿಯಂತ್ರಣ ತಪ್ಪಿ ಬೀಳುತ್ತಿರುವ ಘಟನೆಗಳು ನಡೆದಿದೆ. ಅನೇಕರು ಗಾಯಗಳಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಪ್ರಸ್ತುತ ಜೀವಕ್ಕೆ ಹಾನಿಯಾಗುವ ಪರಿಸ್ಥಿತಿ ಉದ್ಭವಿಸಿದೆ ಎಂದು ಅಸೋಸಿಯೇಷನ್ ಅಧ್ಯಕ್ಷ ಕುಕ್ಕೇರ ಬಿ.ಜಯ ಚಿಣ್ಣಪ್ಪ ಆತಂಕ ವ್ಯಕ್ತಪಡಿಸಿದರು.
ರಸ್ತೆ ಅವ್ಯವಸ್ಥೆ ಮತ್ತು ಇಲ್ಲಿನ ಅಪಾಯಕಾರಿ ಪರಿಸ್ಥಿತಿಯ ಬಗ್ಗೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳಿಗೆ ಮನವರಿಕೆ ಮಾಡಿಕೊಟ್ಟಿದ್ದರೂ ಯಾರೂ ಕಾಳಜಿ ತೋರುತ್ತಿಲ್ಲ. ರಸ್ತೆ ಅಭಿವೃದ್ಧಿಗಾಗಿ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದರೂ ಇಲ್ಲಿಯ ವರೆಗೆ ಕಾಮಗಾರಿಯನ್ನು ಆರಂಭಿಸಿಲ್ಲ ಎಂದು ಆರೋಪಿಸಿದರು.ಈ ರಸ್ತೆಯಲ್ಲಿರುವ ಎರಡು ಮರಗಳು ಕಾಮಗಾರಿಗೆ ಅಡ್ಡಿಯಾಗಿದೆ ಎಂದು ತಿಳಿದು ಬಂದಿದೆ. ಆದ್ದರಿಂದ ಅರಣ್ಯ ಇಲಾಖೆ ತ್ವರಿತವಾಗಿ ಮರವನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು ಮತ್ತು ರಸ್ತೆ ಅಭಿವೃದ್ಧಿ ವಿಚಾರದಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಹೆಚ್ಚು ಕಾಳಜಿ ವಹಿಸಬೇಕೆಂದು ಒತ್ತಾಯಿಸಿದರು.ಅರೆಕಾಡು, ಹೊಸ್ಕೇರಿ ಗ್ರಾಮಸ್ಥರು ಸಹಿ ಮಾಡಿರುವ ಮನವಿ ಪತ್ರವನ್ನು ಲೋಕೋಪಯೋಗಿ ಇಲಾಖೆಯ ಮುಖ್ಯ ಅಭಿಯಂತರರು ಹಾಗೂ ಸಹಾಯಕ ಅಭಿಯಂತರರಿಗೆ ಸಲ್ಲಿಸಿದರು. ಕ್ಷೇತ್ರದ ಶಾಸಕರಿಗೂ ಮನವಿ ಸಲ್ಲಿಸುವುದಾಗಿ ತಿಳಿಸಿದರು.