ಮಹಿಳೆ ಕುತ್ತಿಗೆಯಿಂದ ಸರ ಕದಿಯುತ್ತಿದ್ದವರ ಬಂಧನ

KannadaprabhaNewsNetwork | Published : Jul 9, 2024 12:47 AM

ಸಾರಾಂಶ

ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಮೂವರು ಸರಗಳ್ಳರನ್ನು ರಾಜಗೋಪಾಲನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಮೂವರು ಸರಗಳ್ಳರನ್ನು ರಾಜಗೋಪಾಲನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸುಂಕದಕಟ್ಟೆ ನಿವಾಸಿ ಮನೋಜ್‌ ಕುಮಾರ್‌(27), ಲಗ್ಗೆರೆ ನಿವಾಸಿಗಳಾದ ರಾಮಕೃಷ್ಣ(37) ಹಾಗೂ ನಾಗೇಶ್‌(32) ಬಂಧಿತರು. ಆರೋಪಿಗಳಿಂದ 2.40 ಲಕ್ಷ ರು. ಮೌಲ್ಯದ 70 ಗ್ರಾಂನ 2 ಚಿನ್ನದ ಸರ ಹಾಗೂ ಕೃತ್ಯಕ್ಕೆ ಬಳಸಿದ್ದ 2 ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಲಾಗಿದೆ.

ಇತ್ತೀಚೆಗೆ ಶ್ರೀಗಂಧನಗರದ ಹೆಗ್ಗನಹಳ್ಳಿಯ ಮಹಿಳೆಯೊಬ್ಬರು ತಮ್ಮ ಇಬ್ಬರು ಮಕ್ಕಳನ್ನು ಟ್ಯೂಷನ್‌ನಿಂದ ಕರೆದುಕೊಂಡು ದ್ವಿಚಕ್ರ ವಾಹನದಲ್ಲಿ ಮನೆಗೆ ಬರುತ್ತಿದ್ದರು. ಈ ವೇಳೆ ಶ್ರೀಗಂಧನಗರದ ಬಾಲಾಜಿ ಅಪಾರ್ಟ್‌ಮೆಂಟ್‌ ಎದುರು ಹೋಗುವಾಗ ದ್ವಿಚಕ್ರ ವಾಹನದಲ್ಲಿ ಬಂದ ಅಪರಿಚಿತ ವ್ಯಕ್ತಿ ಏಕಾಏಕಿ ಮಹಿಳೆಯ ಕುತ್ತಿಗೆಗೆ ಕೈ ಹಾಕಿ ಚಿನ್ನದ ಸರ ಕಿತ್ತುಕೊಂಡು ಪರಾರಿಯಾಗಿದ್ದ. ಈ ಸಂಬಂಧ ದಾಖಲಾದ ದೂರಿನ ಮೇರೆಗೆ ತನಿಖೆ ನಡೆಸಿ ಘಟನಾ ಸ್ಥಳದ ಸುತ್ತಮುತ್ತಲ ಸಿಸಿ ಟೀವಿ ಕ್ಯಾಮರಾ ದೃಶ್ಯಾವಳಿ ಆಧರಿಸಿ ಆರೋಪಿ ಮನೋಜ್‌ ಕುಮಾರ್‌ನನ್ನು ಬಂಧಿಸಿ, 30 ಗ್ರಾಂ ತೂಕದ ಮಾಂಗಲ್ಯ ಸರ ಹಾಗೂ ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇಬ್ಬರು ಆರೋಪಿಗಳ ಬಂಧನ:

ಮತ್ತೊಂದು ಪ್ರಕರಣದಲ್ಲಿ ಹೆಗ್ಗನಹಳ್ಳಿ ಕ್ರಾಸ್‌ ಸಂಜೀವಿನಗರದಲ್ಲಿ ಮಹಿಳೆಯೊಬ್ಬರು ಮನೆಯಲ್ಲಿ ಒಬ್ಬರೇ ಇರುವಾಗ ಬಾಡಿಗೆ ಕೇಳುವ ನೆಪದಲ್ಲಿ ಇಬ್ಬರು ಅಪರಿಚಿತರು ಮನೆಗೆ ಬಂದಿದ್ದರು. ಈ ವೇಳೆ ಮನೆಯಲ್ಲಿ ಮಹಿಳೆ ಒಬ್ಬರೇ ಇರುವುದನ್ನು ಗಮನಿಸಿ ಏಕಾಏಕಿ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾಗಿದ್ದರು. ಈ ಸಂಬಂಧ ದಾಖಲಾದ ದೂರಿನ ಮೇರೆಗೆ ತನಿಖೆ ನಡೆಸಿ ಘಟನಾ ಸ್ಥಳದ ಸುತ್ತಮುತ್ತಲ ಸಿಸಿ ಟೀವಿ ಕ್ಯಾಮರಾ ದೃಶ್ಯಾವಳಿ ಪರಿಶೀಲಿಸಿ ಸಿಕ್ಕ ಸುಳಿವಿನ ಮೇರೆಗೆ ಆರೋಪಿಗಳಾದ ರಾಮಕೃಷ್ಣ ಮತ್ತು ನಾಗೇಶ್‌ನನ್ನು ಬಂಧಿಸಿ, 40 ಗ್ರಾಂ ತೂಕದ ಮಾಂಗಲ್ಯ ಸರ ಹಾಗೂ ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Share this article